BJP ಮುಖಂಡನ ವಿರುದ್ಧ ಲೈಂಗಿಕ ದೌರ್ಜನ್ಯ ದೂರು; ಮಾರಕಾಸ್ತ್ರಗಳಿಂದ JDS ಕಾರ್ಯಕರ್ತರ ಮೇಲೆ ಹಲ್ಲೆ

0
ಕಾರ್ಯಕರ್ತರ

ಬಿಜೆಪಿ ಕಾರ್ಯಕರ್ತರು ಮಾರಕಾಸ್ತ್ರಗಳಿಂದ ಜೆಡಿಎಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿರುವ ಘಟನೆ ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ನಡೆದಿದೆ. ಘಟನೆಯಲ್ಲಿ ನಾಲ್ವರು ಜೆಡಿಎಸ್ ಕಾರ್ಯಕರ್ತರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಹೊನ್ನೇನಹಳ್ಳಿಯ ರಾಧಾಕೃಷ್ಣ, ಸಂಜೀವಮ್ಮ, ರಂಗಸ್ವಾಮಯ್ಯ, ಶ್ರೀನಿವಾಸ್ ಗಾಯಗೊಂಡಿದ್ದು ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ರಾಧಾಕೃಷ್ಣ ಅವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.

ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಪ್ರಕರಣವೊಂದರಲ್ಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ಮತ್ತು ಬಿಜೆಪಿ ಮುಖಂಡರಾದ ವೆಂಟಕೇಶ್ ವಿರುದ್ಧ ಹೆಬ್ಬೂರು ಠಾಣೆಯಲ್ಲಿ ಏಪ್ರಿಲ್‌ 22ರಂದು ದೂರು ದಾಖಲಾಗಿತ್ತು. ವೆಂಕಟೇಶ್‌ ಆಕೆಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡುತ್ತಿದ್ದು, ಸಾರ್ವಜನಿಕವಾಗಿ ಎಳೆದಾಡಿ ಹಲ್ಲೆ ಮಾಡಿದ್ದ ಎಂದು ದೂರಲಾಗಿತ್ತು. ಈ ಪ್ರಕರಣಕ್ಕೆ ಜೆಡಿಎಸ್‌ ಕಾರ್ಯಕರ್ತರಾದ ರಾಧಾಕೃಷ್ಣ ಪ್ರತ್ಯಕ್ಷ ಸಾಕ್ಷಿಯಾಗಿದ್ದರು ಎಂದು ಹೇಳಲಾಗಿದೆ.

ವೆಂಕಟೇಶ್ ಬಿಜೆಪಿ ಮುಖಂಡರಾಗಿದ್ದು ಸಾಕ್ಷಿಯಿಂದ ಹಿಂದೆ ಸರಿಯುವಂತೆ ರಾಧಾಕೃಷ್ಣ ಮೇಲೆ ಒತ್ತಡ ಹೇರುತ್ತಿದ್ದರು. ಆದರೆ ರಾಧಾಕೃಷ್ಣ ಸಾಕ್ಷಿ ಹಿಂತೆಗೆದುಕೊಳ್ಳಲು ನಿರಾಕರಿಸಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಜೆಡಿಎಸ್‌ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು ಬಿಜೆಪಿಯವರು ಹಲ್ಲೆ ನಡೆಸಿದ್ದಾರೆ ಎಂದು ದೂರಲಾಗಿದೆ.

ಆರೋಪಿ ವೆಂಕಟೇಶ್

ಅದೇ ಗ್ರಾಮದ ಶಂಕರ, ಮಂಡಲ್ ರವಿ, ಯೋಗೇಶ್, ಸ್ವಾಮಿ, ಮಂಜ, ಎಂ.ಎಚ್. ರಂಗಸ್ವಾಮಿ ಎಂಬುವರಿಂದ ಹಲ್ಲೆ ನಡೆದಿದೆ ಎಂದು ಮತ್ತೊಂದು ದೂರು ದಾಖಲಾಗಿದೆ.

ಈ ಕುರಿತು ನಾನುಗೌರಿ.ಕಾಂ ತುಮಕೂರು ಗ್ರಾಮಾಂತರ ಶಾಸಕ ಗೌರಿಶಂಕರ್‌ರವರನ್ನು ಮಾತನಾಡಿಸಿತು.  ವೆಂಕಟೇಶ್ ವಿರುದ್ದ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿರುವುದೇ ಘಟನೆಗೆ ಕಾರಣ. ಅವರು ತಪ್ಪಿತಸ್ಥರಲ್ಲದಿದ್ದರೆ ಅದನ್ನು ಪೊಲೀಸ್‌ ಠಾಣೆ ಮತ್ತು ಕೋರ್ಟಿನಲ್ಲಿ ಬಗೆಹರಿಸಿಕೊಳ್ಳಬೇಕಿತ್ತು. ಆದರೆ ಬಿಜೆಪಿ ಮುಖಂಡ ಹಾಗೂ ಗ್ರಾಮ ಪಂಚಾಯ್ತಿ ಅಧ್ಯಕ್ಷ ವೆಂಕಟೇಶ್ ಮತ್ತು ಅವರ ಬೆಂಬಲಿಗರು ಏಕಾಏಕಿ ನಿನ್ನೆ ರಾತ್ರಿ ಜೆಡಿಎಸ್ ಕಾರ್ಯಕರ್ತರ ಮೇಲೆ ದಾಳಿ ನಡೆಸಿರುವುದು ಹೇಯ ಕೃತ್ಯ. ಇದರಿಂದ ಬೆದರಿಸಿ ಪ್ರಕರಣದಲ್ಲಿ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದಾರೆ. ಆದರೆ ನಾವು ಬಗ್ಗುವುದಿಲ್ಲ ಎಂದಿದ್ದಾರೆ.

ಮಾಜಿ ಶಾಸಕ ಸುರೇಶ್‌ಗೌಡ ಮತ್ತು ಸಬ್ ಇನ್ಸ್ ಪೆಕ್ಟರ್ ಕೂಡ ಹಲ್ಲೆಗೆ ಕುಮ್ಮಕ್ಕು ನೀಡಿದ್ದಾರೆ ಎಂದು ಆರೋಪಿಸಿರುವ ಗೌರಿಶಂಕರ್, ನೆಲಮಂಗಲದ ರೌಡಿಶೀಟರ್‌ಗಳು ಈ ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ಮಚ್ಚು, ದೊಣ್ಣೆಗಳಿಂದ ಹಲ್ಲೆ ನಡೆಸಿದ್ದು ನಮ್ಮ ಕಾರ್ಯಕರ್ತ ರಾಧಾಕೃಷ್ಣ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಕೂಡಲೇ ಪೊಲೀಸರು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.


ಇದನ್ನೂ ಓದಿ: ಬಿಜೆಪಿಯವರು ನನ್ನಷ್ಟು ವರ್ಷ ರಾಜಕಾರಣ ಮಾಡಲಿ ನೋಡೊಣ: ಬಿಜೆಪಿ ವಿರುದ್ದ ಮಲ್ಲಿಕಾರ್ಜುನ ಖರ್ಗೆ ಕಿಡಿ

Donate

ಜನಪರ ಪತ್ರಿಕೋದ್ಯಮದ ಉಳಿವು ಮತ್ತು ಬೆಳವಣಿಗೆಗಾಗಿ ನಿಮ್ಮ ನಿರಂತರ ಆರ್ಥಿಕ ನೆರವು ಅಗತ್ಯ. ನಿಮ್ಮಿಂದ ಸಾಧ್ಯವಿರುವಷ್ಟು ಹೆಚ್ಚಿನ ವಂತಿಗೆಯನ್ನು ನೀಡಲು ಕೆಳಗಿನ ಲಿಂಕುಗಳನ್ನು ಕ್ಲಿಕ್ಕಿಸಿ.
ಒಂದು ವೇಳೆ ಈ ಲಿಂಕಿನ ಮೂಲಕ ಹಣ ಪಾವತಿ ಮಾಡುವುದಕ್ಕೆ ಅಡಚಣೆ ಇದ್ದರೆ, ಈ ಪುಟದ ಮೇಲೆ ಅಥವಾ ಕೆಳಗೆ ಇರುವ ವಂತಿಗೆ – Donate ಬಟನ್.ಅನ್ನು ಕ್ಲಿಕ್ಕಿಸಿ.
ಧನ್ಯವಾದಗಳು
Independent journalism can’t be independent without your support, contribute by clicking below.

LEAVE A REPLY

Please enter your comment!
Please enter your name here