ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಮುರುಕುಂಬಿ ಗ್ರಾಮದಲ್ಲಿ ಸುಮಾರು 9 ವರ್ಷಗಳ ಹಿಂದೆ ನಡೆದ ಅಸ್ಪೃಶ್ಯತೆ ಆಚರಣೆ ಮತ್ತು ದಲಿತರ ಓಣಿಗೆ ನುಗ್ಗಿ ಗುಡಿಸಲುಗಳಿಗೆ ಬೆಂಕಿ ಹಚ್ಚಿ ಹಲ್ಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ 101 ಮಂದಿಯ ವಿರುದ್ದದ ಆರೋಪ ನ್ಯಾಯಾಲಯದಲ್ಲಿ ಸಾಬೀತಾಗಿದೆ ಎಂದು ವರದಿಯಾಗಿದೆ.
ಪ್ರಕರಣದ ವಿಚಾರಣೆ ಪೂರ್ಣಗೊಳಿಸಿರುವ ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಸಿ. ಚಂದ್ರಶೇಖರ ಅವರು 101 ಆರೋಪಿಗಳ ವಿರುದ್ಧದ ಆರೋಪ ಸಾಬೀತಾಗಿರುವುದಾಗಿ ಸೋಮವಾರ ತೀರ್ಪು ಪ್ರಕಟಿಸಿದ್ದಾರೆ. ಶಿಕ್ಷೆಯ ಪ್ರಮಾಣವನ್ನು ಅಕ್ಟೋಬರ್ 24ರಂದು ಪ್ರಕಟಿಸಲು ಕಾಯ್ದಿರಿಸಿದ್ದಾರೆ.
ಪ್ರಕರಣದ ಹಿನ್ನೆಲೆ : 2015ರಲ್ಲಿ ಗಂಗಾವತಿ ತಾಲೂಕಿನ ಮುರುಕುಂಬಿ ಗ್ರಾಮದಲ್ಲಿ ಕ್ಷೌರದಂಗಡಿಗೆ ಮತ್ತು ಹೋಟೆಲ್‌ಗಳಿಗೆ ದಲಿತರಿಗೆ ಪ್ರವೇಶ ನಿರಾಕರಿಸಿದ ವಿಚಾರವಾಗಿ ಜಗಳವಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಗಳು ಮುರುಕುಂಬಿಗೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮಾಡುತ್ತಿದ್ದರು. ಇದೇ ಸಿಟ್ಟಿನಿಂದ ಸರ್ವಣೀಯರು ರಾತ್ರಿ ಸಮಯದಲ್ಲಿ ದಲಿತರ ಕೇರಿಗೆ ನುಗ್ಗಿ ದಲಿತರ ಗುಡಿಸಲುಗಳಿಗೆ ಬೆಂಕಿ ಹಚ್ಚಿದ್ದಲ್ಲದೆ, ದಲಿತರ ಮೇಲೆ ಹಲ್ಲೆ ನಡೆಸಿದ್ದರು. ಈ ವಿಚಾರ ರಾಜ್ಯಾದ್ಯಂತ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು.
ಈ ಘಟನೆಗೆ ಸಂಬಂಧಿಸಿದಂತೆ ಗ್ರಾಮದ 117 ಮಂದಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿತ್ತು, ಈ ನಡುವೆ ಕೆಲ ಆರೋಪಿಗಳು ಸಾವನ್ನಪ್ಪಿದ್ದಾರೆ. ಉಳಿದವರ ಪೈಕಿ 101 ಮಂದಿಯ ವಿರುದ್ಧ ಅರೋಪ ಸಾಬೀತಾಗಿದೆ.
ಈ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗಿದ್ದ 100 ಮಂದಿಯನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಇನ್ನೊಬ್ಬರು ವಿಚಾರಣೆಗೆ ಹಾಜರಾಗಿರದ ಕಾರಣ ಅವರ ಬಂಧನವಾಗಿಲ್ಲ. ಅವರನ್ನು ಬಂಧಿಸಲು ಪೊಲೀಸರು ಕಾರ್ಯಾಚರಣೆ ಕೈಗೊಂಡಿದ್ದಾರೆ.
ಸೌಜನ್ಯ : ವಾರ್ತಾ ಭಾರತಿ
ಇದನ್ನೂ ಓದಿ : ಲೈಂಗಿಕ ದೌರ್ಜನ್ಯ-ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ತಿರಸ್ಕರಿಸಿದ ಹೈಕೋರ್ಟ್


