ಈಶಾನ್ಯ ದೆಹಲಿಯಲ್ಲಿ ಸತತ ನಾಲ್ಕು ದಿನಗಳಿಂದ ಭುಗಿಲೆದ್ದ ಘರ್ಷಣೆಗೆ ಒಟ್ಟು 34 ಮಂದಿ ಮೃತಪಟ್ಟಿದ್ದಾರೆ ಹಾಗೂ 200 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಇದು 1984 ರ ಗಲಭೆಯ ನಂತರದಲ್ಲಿ ದೆಹಲಿಯಲ್ಲಿ ಅತೀ ಹೆಚ್ಚು ಮೃತಪಟ್ಟವರ ಸಂಖ್ಯೆಯಾಗಿದೆ.
ಹಿಂಸಾಚಾರಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು 18 ಎಫ್‌ಐಆರ್ ಮತ್ತು 130 ಜನರನ್ನು ಬಂಧಿಸಲಾಗಿದೆ ಹಾಗೂ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪೊಲಿಸರು ಹೇಳಿದ್ದಾರೆ. ಪೊಲೀಸರು ಮತ್ತು ಅರೆಸೈನಿಕ ಸಿಬ್ಬಂದಿ ಗಲಭೆ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದಾರೆ.
ಹಿಂಸಾಚಾರದ ಕುರಿತಂತೆ ಕಾಂಗ್ರೆಸ್ ನಾಯಕಿ ಸೋನಿಯ ಗಾಂಧಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿ ಗೃಹ ಮಂತ್ರಿ ಅಮಿತ್ ಶಾ ರಾಜಿನಾಮೆಗೆ ಆಗ್ರಹಿಸಿದ್ದಾರೆ. ಪ್ರಧಾನಿ ಮೋದಿ ಶಾಂತಿ ಕಾಪಾಡುವಂತೆ ಜನರಿಗೆ ಮನವಿ ಮಾಡಿದ್ದಾರೆ. ಅಲ್ಲದೆ ರಾಷ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಗಲಭೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ.
ಗಲಭೆ ಪೀಡಿತ ಪ್ರದೇಶದಲ್ಲಿ 144 ಸೆಕ್ಷನ್ ಹಾಕಲಾಗಿದೆ. ಗಲಭೆಗೆ ಪ್ರಚೋದನೆ ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ನಾಯಕ ಕಪಿಲ್ ಮಿಶ್ರ ಸೇರಿದಂತೆ ನಾಲ್ಕು ಜನರ ಮೇಲೆ FIR ದಾಖಲಿಸುವಂತೆ ದೆಹಲಿ ಹೈಕೋರ್ಟ್ ಹೇಳಿದೆ. ಇದೇ ಸಂದರ್ಭದಲ್ಲಿ ಈ ಆದೇಶ ನೀಡಿದ ನ್ಯಾಯಮೂರ್ತಿಯನ್ನು ಸರ್ಕಾರ ಹರ್ಯಾಣ-ಪಂಜಾಬ್ ಹೈಕೋರ್ಟಿಗೆ ವರ್ಗಾವಣೆ ಮಾಡಿದ ನಾಟಕೀಯ ಸನ್ನಿವೇಶ ಕೂಡಾ ನಡೆದಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಜನರು ಸರ್ಕಾರದ ವಿರುದ್ಧ ಭಾರಿ ಟೀಕಾಪ್ರಹಾರ ನಡೆಸಿದ್ದಾರೆ.


