2023ರ ರಾಜ್ಯ ವಿಧಾನ ಸಭಾ ಚುನಾವಣೆ ಹೊಸ್ತಿಲಲ್ಲಿ ಹಲವು ನಾಯಕರ ಪಕ್ಷಾಂತರ ಪರ್ವ ಜೋರಾಗಿ ನಡೆಯುತ್ತಿದೆ. ಶುಕ್ರವಾರದಂದು (ಮಾ.31) ಅರಕಲಗೂಡು ಜೆಡಿಎಸ್ ಶಾಸಕ ಎ.ಟಿ.ರಾಮಸ್ವಾಮಿ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಇಂದು (ಶನಿವಾರ) ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಎ.ಟಿ ರಾಮಸ್ವಾಮಿ ಅವರನ್ನು ಕೇಂದ್ರ ಸಚಿವ ಅನುರಾಗ್ ಠಾಕೂರ್ ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ.
ಶುಕ್ರವಾರ ಬೆಳಿಗ್ಗೆ ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಎನ್.ವೈ ಗೋಪಾಲಕೃಷ್ಣರವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬೆನ್ನಲ್ಲೇ ಮಧ್ಯಾಹ್ನ ಅರಕಲಗೂಡು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಎ.ಟಿ.ರಾಮಸ್ವಾಮಿಯವರು ವಿಧಾನಸಭೆ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಅವರನ್ನು ಭೇಟಿಮಾಡಿ, ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಬಿಜೆಪಿಯ ಎನ್.ವೈ ಗೋಪಾಲಕೃಷ್ಣರವರು ಇದೀಗ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಇನ್ನು ಜೆಡಿಎಸ್ ತೊರೆದಿದ್ದ ಎ.ಟಿ.ರಾಮಸ್ವಾಮಿಯವರು ಇಂದು ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಇದನ್ನೂ ಓದಿ: ಜೆಡಿಎಸ್ ತೊರೆದ ಮತ್ತೊಬ್ಬ ಶಾಸಕ: ಅರಕಲಗೂಡು ಎ.ಟಿ.ರಾಮಸ್ವಾಮಿ ರಾಜೀನಾಮೆ
ಗುಬ್ಬಿ ಜೆಡಿಎಸ್ ಶಾಸಕ ಶ್ರೀನಿವಾಸ್ ಅವರು ಪಕ್ಷ ತೊರೆದು ಶುಕ್ರವಾರ ಕಾಂಗ್ರೆಸ್ ಸೇರಿದ್ದಾರೆ. ಮಾಜಿ ಶಾಸಕ ವೈ.ಎಸ್.ವಿ ದತ್ತಾರವರು ಕಾಂಗ್ರೆಸ್ ಸೇರಿದ್ದಾರೆ. ವಿಧಾನ ಪರಿಷತ್ ಸದಸ್ಯರಾಗಿದ್ದ ಪುಟ್ಟಣ್ಣ ಹಾಗೂ ಬಾಬುರಾವ್ ಚಿಂಚನಸೂರ್ ಕಾಂಗ್ರೆಸ್ ಸೇರಿದ್ದಾರೆ.
ಶಾಸಕ ಸ್ಥಾನಕ್ಕೆ ಎ.ಟಿ.ರಾಮಸ್ವಾಮಿ ಅವರು ರಾಜೀನಾಮೆ ನೀಡಿದ ನಂತರ, ಕಾಂಗ್ರೆಸ್ ಪಕ್ಷವನ್ನು ಸೇರುತ್ತಾರೆ ಎನ್ನುವ ಮಾತುಗಳು ರಾಜಕೀಯ ವಲಯದಿಂದ ಕೇಳಿಬಂದಿತ್ತು. ಆದರೆ ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಅವರು ಇಂದು ಬಿಜೆಪಿ ಸೇರ್ಪಡೆಯಾಗಿದ್ದಾರೆ.


