ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿಯವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಕೊಲೆ ಪ್ರಕರಣದ ಆರೋಪಿಯಾಗಿರುವ ಅವರು, ಕ್ಷೇತ್ರಕ್ಕೆ ಪ್ರವೇಶಿಸದಂತೆ ಚುನಾವಣೆ ಎದುರಿಸಬೇಕಾಗಿದೆ.
ಹುಬ್ಬಳ್ಳಿ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಗೌಡರ್ ಕೊಲೆ ಪ್ರಕರಣದ ಆರೋಪಿಯಾಗಿರುವ ಅವರು, ಕ್ಷೇತ್ರಕ್ಕೆ ಪ್ರವೇಶಿಸದಂತೆ ಜನಪ್ರತಿನಿಧಿಗಳ ನ್ಯಾಯಾಲಯ ಸೂಚಿಸಿತ್ತು. ಇದನ್ನು ಪ್ರಶ್ನಿಸಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಕುಲಕರ್ಣಿಯವರ ಕೋರಿಕೆಯನ್ನು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿದೆ.
‘ಚುನಾವಣೆಯಲ್ಲಿ ನಾನು ಅಭ್ಯರ್ಥಿಯಾಗಿರುವ ಕಾರಣ ಪ್ರಚಾರದ ನಿಮಿತ್ತ 50 ದಿನಗಳ ಕಾಲ ಧಾರವಾಡದಲ್ಲೇ ನೆಲೆಸಲು ಅನುಮತಿ ನೀಡಬೇಕು’ ಎಂಬ ವಿನಯ ಕುಲಕರ್ಣಿ ಮನವಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇದೇ 18ರಂದು ತಿರಸ್ಕರಿಸಿತ್ತು.
ಈ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಸಲ್ಲಿಸಲಾಗಿದ್ದ ಕ್ರಿಮಿನಲ್ ಅರ್ಜಿಯನ್ನು, ಶಾಸಕರು- ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಪೀಠದ ನ್ಯಾಯಮೂರ್ತಿ ಕೆ.ನಟರಾಜನ್ ಶುಕ್ರವಾರ ವಿಚಾರಣೆ ನಡೆಸಿದರು. ವಿಚಾರಣೆ ವೇಳೆ ಅರ್ಜಿದಾರರ ಮನವಿಗೆ ಸಿಬಿಐ ಪರ ವಕೀಲ ಪಿ.ಪ್ರಸನ್ನಕುಮಾರ್ ಆಕ್ಷೇಪ ವ್ಯಕ್ತಪಡಿಸಿದರು.
‘ಧಾರವಾಡ ಪ್ರವೇಶಿಸಲು ಇರುವ ನಿರ್ಬಂಧ ಸಡಿಲಿಸಬೇಕೆಂಬ ಅರ್ಜಿದಾರರ ಕೋರಿಕೆಯನ್ನು ಸುಪ್ರೀಂಕೋರ್ಟ್ ಕಳೆದ ತಿಂಗಳ 29ರಂದು ತಿರಸ್ಕರಿಸಿದೆ. ಹೀಗಿರುವಾಗ, ಈ ಅರ್ಜಿಯನ್ನು ನ್ಯಾಯಪೀಠ ಮಾನ್ಯ ಮಾಡಬಾರದು’ ಎಂದರು. ಇದನ್ನು ಪರಿಗಣಿಸಿದ ನ್ಯಾಯಪೀಠ ಅರ್ಜಿ ವಜಾಗೊಳಿಸಿ ಆದೇಶಿಸಿತು.
ಇದನ್ನೂ ಓದಿರಿ: 13 ಷರತ್ತು ವಿಧಿಸಿ ಕಾಂಗ್ರೆಸ್‌ಗೆ ದಸಂಸ ಐಕ್ಯ ಹೋರಾಟ ಚಾಲನಾ ಸಮಿತಿ ಬೆಂಬಲ
ಬಿಜೆಪಿ ಮುಖಂಡ ಯೋಗೇಶ್ ಗೌಡ ಗೌಡರ್ ಅವರನ್ನು 2016ರ ಜೂನ್ 15ರಂದು ಕೊಲೆ ಮಾಡಲಾಗಿತ್ತು. ಈ ಪ್ರಕರಣವನ್ನು ರಾಜ್ಯ ಸರ್ಕಾರ ಕೇಂದ್ರೀಯ ತನಿಖಾ ದಳಕ್ಕೆ ವರ್ಗಾಯಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಮಂದಿ ವಿರುದ್ಧ ಸಿಬಿಐ ಎಫ್‌ಐಆರ್ ದಾಖಲಿಸಲಾಗಿದೆ.
ಪ್ರಕರಣದಲ್ಲಿ ಆರೋಪಿಯಾಗಿರುವ ವಿನಯ ಕುಲಕರ್ಣಿ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮತ್ತು ಹೈಕೋರ್ಟ್ ಜಾಮೀನು ನಿರಾಕರಿಸಿದ್ದವು. ಹೀಗಾಗಿ, ಅವರು ಸುಪ್ರಿಂ ಕೋರ್ಟ್ ಮೊರೆ ಹೋಗಿದ್ದರು. 2021ರ ಆಗಸ್ಟ್‌ನಲ್ಲಿ ಕುಲಕರ್ಣಿ ಅವರಿಗೆ ಜಾಮೀನು ಮಂಜೂರು ಮಾಡಿದ್ದ ಸುಪ್ರೀಂ ಕೋರ್ಟ್, ‘ನ್ಯಾಯಾಲಯದ ಅನುಮತಿ ಪಡೆಯದೆ ಧಾರವಾಡ ಜಿಲ್ಲೆ ಪ್ರವೇಶಿಸುವಂತಿಲ್ಲ’ ಎಂಬುದೂ ಸೇರಿದಂತೆ ನಾಲ್ಕು ಷರತ್ತುಗಳನ್ನು ವಿಧಿಸಿತ್ತು.
ಈಗ ಚುನಾವಣಾ ಅಭ್ಯರ್ಥಿಯಾದರೂ ಕ್ಷೇತ್ರವನ್ನು ಪ್ರವೇಶಿಸದೆ ಚುನಾವಣೆಯನ್ನು ನಡೆಸಬೇಕಾದ ಸವಾಲು ವಿನಯ ಕುಲಕರ್ಣಿಯವರಿಗೆ ಎದುರಾಗಿದೆ.


