ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗ ಬಿಜೆಪಿ ಪಕ್ಷವು ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದೆ. NRC, ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸುವ ಭರವಸೆ ನೀಡಿದೆ.
ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಪ್ರಣಾಳಿಕೆ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಮಾಜಿ ಸಿಎಂ ಡಿ ವಿ ಸದಾನಂದಗೌಡ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಹಲವು ನಾಯಕರು ಇದ್ದರು.
ಬಿಪಿಎಲ್ ಕುಟು೦ಬಗಳಿಗೆ ಪ್ರತಿ ವರ್ಷ ಯುಗಾದಿ, ಗಣೇಶ ಚತುರ್ಥಿ ಮತ್ತು ದೀಪಾವಳಿಗೆ ತಲಾ ಒಂದರಂತೆ 3 ಅಡುಗೆ ಅನಿಲದ ಸಿಲಿಂಡರ್‌ಗಳನ್ನು ಉಚಿತವಾಗಿ ವಿತರಿಸುತ್ತೇವೆ. ಬೆಂಗಳೂರಿನ ಪ್ರತಿ ವಾರ್ಡ್‌ಗಳಲ್ಲಿ ಅಟಲ್ ಆಹಾರ ಕೇಂದ್ರ ಸ್ಥಾಪನೆ ಮಾಡುತ್ತೇವೆ ಎಂದು ಬಿಜೆಪಿ ಭರವಸೆ ನೀಡಿದೆ.
ಪ್ರಜಾ ಪ್ರಣಾಳಿಕೆಯ ಮುಖ್ಯಾಂಶಗಳು
‘ಪೋಷಣೆ’ ಯೋಜನೆಯ ಮೂಲಕ ಪ್ರತಿ ಬಿಪಿಎಲ್ ಕುಟುಂಬಗಳಿಗೆ ಪ್ರತಿದಿನ ಅರ್ಧ ಲೀಟರ್ ನಂದಿನಿ ಹಾಲು ಮತ್ತು ಪ್ರತಿ ತಿಂಗಳು 5 ಕೆಜಿ ಸಿರಿ ಅನ್ನ-ಸಿರಿಧಾನ್ಯವನ್ನು ಒಳಗೊಂಡ ಪಡಿತರ ಕಿಟ್ ನೀಡುತ್ತೇವೆ.
ಉನ್ನತ ಮಟ್ಟದ ಸಮಿತಿಯ ಶಿಫಾರಸ್ಸಿನ ಆಧಾರದ ಮೇಲೆ ಕರ್ನಾಟಕದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೊಳಿಸುತ್ತೇವೆ.
ರಾಜ್ಯದಾದ್ಯಂತ ನಿವೇಶನ ರಹಿತ/ ವಸತಿ ರಹಿತ ನಿವಾಸಿಗಳಿಗೆ, ‘ಸರ್ವರಿಗೂ ಸೂರು ಯೋಜನೆ’ಯಡಿ 10 ಲಕ್ಷ ವಸತಿ ನಿವೇಶನಗಳನ್ನು ಕಂದಾಯ ಇಲಾಖೆ ಮೂಲಕ ಹಂಚಿಕೆ ಮಾಡುತ್ತೇವೆ.
ಕರ್ನಾಟಕದಲ್ಲಿ ರಾಷ್ಟ್ರೀಯ ನಾಗರಿಕರ ನೋಂದಣಿ ಪ್ರಕ್ರಿಯೆ ಚುರುಕುಗೊಳಿಸಿ ಎಲ್ಲಾ ಅಕ್ರಮ ವಲಸಿಗರನ್ನು ಗಡಿಪಾರು ಮಾಡುತ್ತೇವೆ ಎಂದು ಬಿಜೆಪಿ ಹೇಳಿಕೊಂಡಿದೆ.
ಇದನ್ನೂ ಓದಿ: ಸಿಟಿ ರವಿ ಸೋಲಿಸಲು ಕಾಂಗ್ರೆಸ್‌ಗೆ ಮತ ಹಾಕಿ: ಕೈ ಅಭ್ಯರ್ಥಿ ಪರ ಜೆಡಿಎಸ್ ಮುಖಂಡನ ಪ್ರಚಾರ


