ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ ಅವರನ್ನು ರಾಜ್ಯ ಬಿಜೆಪಿ ಘಟಕದ ಮುಖ್ಯಸ್ಥರನ್ನಾಗಿ ನೇಮಕ ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ಸಂಸದ ರಮೇಶ್ ಜಗಜಿಣಗಿ ನೀವು ದಲಿತರಾಗಿದ್ದುಕೊಂಡು ಬಿಜೆಪಿಯೊಳಗಿದ್ದರೆ ಬೆಳಯಲು ಏನು ಅವಕಾಶ ಸಿಗುವುದಿಲ್ಲ ಎಂದು ಹೇಳಿದ್ದಾರೆ.
ವಿಜಯಪುರದಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ರಮೇಶ್ ಜಗಜಿಣಗಿ, ದಲಿತರಾಗಿದ್ದರೆ ಬಿಜೆಪಿಯೊಳಗೆ ಬೆಳೆಯಲು ಅವಕಾಶ ಸಿಗುವುದಿಲ್ಲ. ಶ್ರೀಮಂತ ನಾಯಕರು ಅಥವಾ ಒಕ್ಕಲಿಗರು ಇದ್ದರೆ ಅವರನ್ನು ಬೆಂಬಲಿಸುತ್ತಾರೆ. ಆದರೆ ದಲಿತರಿದ್ದರೆ ಯಾರೂ ಬೆಂಬಲಿಸುವುದಿಲ್ಲ. ಇದು ನಮಗೆ ತಿಳಿದಿದೆ ಮತ್ತು ಇದು ತುಂಬಾ ದುರದೃಷ್ಟಕರ ಎಂದು ಹೇಳಿದ್ದಾರೆ.
ಬಿಜೆಪಿಯ ಹೈಕಮಾಂಡ್ ವಿಜಯೇಂದ್ರ ಅವರನ್ನು ಪಕ್ಷದ ಅಧ್ಯಕ್ಷರನ್ನಾಗಿ ನೇಮಿಸಿದೆ ಹೊರತು ಅವರನ್ನು ರಾಜ್ಯದ ಬಿಜೆಪಿ ನಾಯಕರು ಹೆಸರಿಸಿಲ್ಲ ಎಂದು ಹೇಳುವ ಮೂಲಕ ಪಕ್ಷದ ಹೈಕಮಾಂಡ್ ನಿರ್ಧಾರದ ವಿರುದ್ದ ಅಸಮಾಧಾನವನ್ನು ಹೊರಹಾಕಿದ್ದಾರೆ. ಬಿ.ವೈ.ವಿಜಯೇಂದ್ರ ಅವರು ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಎಂಬ ಕಾರಣಕ್ಕೆ ಪಕ್ಷದ ಹೈಕಮಾಂಡ್ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಿಸಿದೆ ಎಂದು ಟೀಕಿಸಿದರು.
ಕರ್ನಾಟಕ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಹಾಗೂ ಶಿಕಾರಿಪುರ ಶಾಸಕ ಬಿವೈ ವಿಜಯೇಂದ್ರ ಅವರನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಬಿಜೆಪಿಯ ರಾಜ್ಯಾಧ್ಯಕ್ಷರಾಗಿ ಶುಕ್ರವಾರ ನೇಮಿಸಿದ್ದರು. ಅವರು ನ.15 ರಂದು ಕರ್ನಾಟಕ ಬಿಜೆಪಿ ಘಟಕದ ಅಧ್ಯಕ್ಷರಾಗಿ ಅಧಿಕೃತವಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ನಳಿನ್ ಕುಮಾರ್ ಕಟೀಲ್ ಅವರಿಂದ ವಿಜಯೇಂದ್ರ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಬಿಜೆಪಿಯ ರಾಜ್ಯಾಧ್ಯಕ್ಷರನ್ನಾಗಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ ಅವರ ನೇಮಕ ಬಿಜೆಪಿಯ ಹಲವು ಹಿರಿಯ ನಾಯಕರಲ್ಲಿ ಅಸಮಾಧಾನಕ್ಕೆ ಕಾರಣವಾಗಿತ್ತು. ಸೋಮಣ್ಣ, ಸಿಟಿ ರವಿ, ಯತ್ನಾಳ್ ಸೇರಿ ಹಲವು ಬಿಜೆಪಿ ನಾಯಕರು ರಾಜ್ಯಾಧ್ಯಕ್ಷ ಹುದ್ದೆಗೆ ಆಕಾಂಕ್ಷಿತರಾಗಿದ್ದರು. ಆದರೆ ಕೊನೆಗೆ ಯಡಿಯೂರಪ್ಪ ಅವರೇ ಮೇಲುಗೈ ಸಾಧಿಸಿದ್ದಾರೆ.
ವಿಜಯೇಂದ್ರ ಅವರ ನೇಮಕದ ಬಗ್ಗೆ ಪ್ರತಿಕ್ರಿಯಿಸಿದ ಸಿಟಿ ರವಿ, ಈಗಾಗಲೆ ಬಹಳಷ್ಟು ಮಾತನಾಡಿದ್ದೇನೆ. 35 ವರ್ಷಗಳಿಂದ ರಾಜಕೀಯ ಕ್ಷೇತ್ರದಲ್ಲಿದ್ದೇನೆ. ಬೂತ್ ಅಧ್ಯಕ್ಷನಿಂದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿವರೆಗೂ ಜವಾಬ್ದಾರಿ ನಿರ್ವಹಿಸಿದ್ದೇನೆ. ಈಗಾಗಲೆ ಬಹಳ ವಿಷಯ ಮಾತನಾಡಿ ಬಿಟ್ಟಿದ್ದೇನೆ. ಈಗ ಏನಾದರೂ ಮಾತನಾಡಿದರೇ ನಮ್ಮ ಮಾತೇ ನಮಗೆ ತಿರುಗುಬಾಣವಾಗುತ್ತೆ ಎಂದು ಪರೋಕ್ಷವಾಗಿ ಅಸಮಾಧಾನ ಹೊರ ಹಾಕಿದ್ದರು.
ಇದನ್ನು ಓದಿ; ‘ಮರುನಾಡನ್ ಮಲಯಾಳಿ’ ಯೂಟ್ಯೂಬ್ ಚಾನೆಲ್ ಸಂಸ್ಥಾಪಕರ ವಿರುದ್ಧ ಪ್ರಕರಣ ದಾಖಲು