ಅತ್ಯಾಚಾರ ಪ್ರಕರಣಗಳಲ್ಲಿ ಮಹಿಳೆಯನ್ನು ಆರೋಪಿಯನ್ನಾಗಿ ಮಾಡಬಹುದೇ ಅಥವಾ ಇಲ್ಲವೇ? ಎಂಬ ಬಗ್ಗೆ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 375ರ ಅಡಿ ಪರಿಶೀಲನೆ ನಡೆಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರ್ಧರಿಸಿದೆ.
ಪಸ್ತುತ ಕಾನೂನಿನ ಪ್ರಕಾರ, ಅತ್ಯಾಚಾರ ಆರೋಪಿ ಎಂದು ಪುರುಷನನ್ನು ಪರಿಗಣಿಸಲಾಗ್ತಿದೆ. ಒಬ್ಬ ಪುರುಷ ಮಹಿಳೆಯ ಜೊತೆ ಬಲವಂತವಾಗಿ ಲೈಂಗಿಕ ಸಂಪರ್ಕ ನಡೆಸಿದರೆ ಅತ್ಯಾಚಾರ ಎಂದು ಹೇಳಲಾಗುತ್ತದೆ. ಆದರೆ, ಮಹಿಳೆಯನ್ನು ಅತ್ಯಾಚಾರ ಆರೋಪಿ ಎಂದು ಪರಿಗಣಿಸಬಹುದೇ? ಎಂಬುವುದು ಪ್ರಶ್ನಾರ್ಹವಾಗಿದೆ. ನ್ಯಾಯಮೂರ್ತಿಗಳಾದ ಹೃಷಿಕೇಶ್ ರಾಯ್ ಮತ್ತು ಸಂಜಯ್ ಕರೋಲ್ ಅವರಿದ್ದ ಸುಪ್ರೀಂ ಕೋರ್ಟ್ ಪೀಠವು ಮಹಿಳೆಯ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸುವ ಕುರಿತು ಅನುಮಾನ ವ್ಯಕ್ತಪಡಿಸಿದ್ದು, ಅತ್ಯಾಚಾರ ಆರೋಪಿ ಎಂದರೆ ಪುರುಷ ಎಂಬುವುದನ್ನು ಮೌಖಿಕವಾಗಿ ಹೇಳಿದೆ.
ಮಗನ ವಿರುದ್ದ ದಾಖಲಾಗಿರುವ ಅತ್ಯಾಚಾರ ಪ್ರಕರಣದಲ್ಲಿ ತನ್ನನ್ನು ತಪ್ಪಾಗಿ ಸಿಲುಕಿಸಲಾಗಿದೆ ಎಂದು 61 ವರ್ಷದ ಪಂಜಾಬ್ ಮೂಲದ ಮಹಿಳೆಯೊಬ್ಬರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿದೆ.
ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ರಿಷಿ ಮಲ್ಹೋತ್ರಾ, ಅತ್ಯಾಚಾರ ಪ್ರಕರಣದಲ್ಲಿ ಮಹಿಳೆಯ ವಿರುದ್ಧ ಪ್ರಕರಣ ದಾಖಲಿಸಲು ಎಂದಿಗೂ ಸಾಧ್ಯವಿಲ್ಲ ಎಂದು ವಾದಿಸಿದರು. ಸಾಮೂಹಿಕ ಅತ್ಯಾಚಾರ ಪ್ರಕರಣಗಳಲ್ಲಿ ಮಹಿಳೆಯರು ಅತ್ಯಾಚಾರ ಮಾಡುವ ಉದ್ದೇಶ ಹೊಂದಿರುತ್ತಾರೆ ಎಂದು ಎನ್ನಲಾಗುವುದಿಲ್ಲ ಎಂದು ಪ್ರಿಯಾ ಪಟೇಲ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಹೇಳಿದೆ ಎಂದು ಅವರು ತಿಳಿಸಿದರು. ವಾದ ಆಲಿಸಿದ ಕೋರ್ಟ್, ನೋಟಿಸ್ ಜಾರಿಗೊಳಿಸಿ ಮಹಿಳೆಯ ಬಂಧನಕ್ಕೆ ತಡೆಯಾಜ್ಞೆ ನೀಡಿದೆ.
ಪಂಜಾಬ್‌ನ ವಿಚಾರಣಾ ನ್ಯಾಯಾಲಯ ಮತ್ತು ಹೈಕೋರ್ಟ್ ಮಹಿಳೆಯ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕರಿಸಿದ ಹಿನ್ನೆಲೆ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
ಇದನ್ನೂ ಓದಿ : ಇಂಟರ್ನೆಟ್ ಸ್ಥಗಿತ ಮುಂದುವರಿಸುವಂತಿಲ್ಲ: ಮಣಿಪುರ ಸರ್ಕಾರಕ್ಕೆ ಹೈಕೋರ್ಟ್ ತರಾಟೆ


