ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದಲ್ಲದೆ, ಆಕೆಯ ತಾಯಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಉತ್ತರ ಪ್ರದೇಶದ ಅಮೇಥಿಯ ಜಮೋ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ (ಎಸ್‌ಹೆಚ್‌ಒ) ಸೇರಿದಂತೆ ಕೆಲ ಪೊಲೀಸರ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಎನ್‌ಡಿ ಟಿವಿ ವರದಿ ಮಾಡಿದೆ.
ಮಹಿಳೆಯ ದೂರಿನ ಪ್ರಕಾರ, ಜಮೋ ಠಾಣೆಯ ಎಸ್‌ಹೆಚ್‌ಒ ಮತ್ತು ಇತರ ಕೆಲ ಕಾನ್‌ಸ್ಟೇಬಲ್‌ಗಳು ಮನೆಗೆ ನುಗ್ಗಿ ಮಹಿಳೆ ಮತ್ತು ಆಕೆಯ ಮಗಳ ಮೇಲೆ ದೌರ್ಜನ್ಯ ನಡೆಸಿದ್ದಾರೆ ಎಂದು ಅಮೇಥಿಯ ಪೊಲೀಸ್ ಅಧೀಕ್ಷಕ (ಎಸ್‌ಪಿ) ಅನುಪ್ ಕುಮಾರ್ ಸಿಂಗ್ ತಿಳಿಸಿದ್ದಾರೆ.
“ಪೊಲೀಸರು ನನ್ನ ಬಟ್ಟೆ ಹರಿದು ಹಾಕಿ ಅನುಚಿತವಾಗಿ ವರ್ತಿಸಿದ್ದಾರೆ. ನನ್ನ ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ಅಲ್ಲದೆ, ತನ್ನ ಮೊಬೈಲ್ ಫೋನ್ ತೆಗೆದುಕೊಂಡು ಹೋಗಿದ್ದಾರೆ” ಎಂದು ಮಹಿಳೆ ಆರೋಪಿಸಿದ್ದಾಗಿ ಎಸ್‌ಪಿ ತಿಳಿಸಿದ್ದಾರೆ.
ಮಹಿಳೆ ಸಹಾಯಕ್ಕಾಗಿ ಕೂಗಿಕೊಂಡಾಗ ಸ್ಥಳೀಯರು ಧಾವಿಸಿ ಬಂದಿದ್ದಾರೆ. ಹಾಗಾಗಿ, ಪೊಲೀಸರು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಈ ವೇಳೆ ಇನ್‌ಸ್ಪೆಕ್ಟರ್ ತನ್ನ ಟೋಪಿಯನ್ನು ಅಲ್ಲಿಯೇ ಬಿಟ್ಟು ಹೋಗಿದ್ದರು. ಆ ಟೋಪಿ ಹಿಡಿದುಕೊಂಡು ಮಹಿಳೆ ಪೊಲೀಸ್ ಠಾಣೆಗೆ ಆಗಮಿಸಿದ್ದಾರೆ ಎಂದು ಎಸ್‌ಪಿ ಮಾಹಿತಿ ನೀಡಿದ್ದಾರೆ.
ಸೋಮವಾರ ರಾತ್ರಿ 11 ಗಂಟೆ ಸುಮಾರಿಗೆ ಬಾಲಕಿಯ ತಂದೆ ಮನೆಯಲ್ಲಿ ಇಲ್ಲದ ವೇಳೆ ಈ ಘಟನೆ ನಡೆದಿದೆ. ನಾವು ತನಿಖೆ ಕೈಗೊಂಡಿದ್ದೇವೆ. ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಸ್ ಅನುಪ್ ಸಿಂಗ್ ತಿಳಿಸಿದ್ದಾರೆ.
ಇದನ್ನೂ ಓದಿ : ಶಹಜಹಾನ್ ಶೇಖ್‌ನ್ನು ಸಿಬಿಐಗೆ ಒಪ್ಪಿಸಲು ನಕಾರ: ಸುಪ್ರೀಂ ಮೊರೆ ಹೋದ ಪಶ್ಚಿಮ ಬಂಗಾಳ ಸರ್ಕಾರ


