ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣಗಳ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್‌ಐಟಿ) ಇದೀಗ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಗೊಳಿಸುವಂತೆ ವಿದೇಶಾಂಗ ಸಚಿವಾಲಯಕ್ಕೆ ಪತ್ರ ಬರೆದಿದೆ.
ಲೈಂಗಿಕ ದೌರ್ಜನ್ಯ ಪ್ರಕರಣ ಬಯಲಾಗುತ್ತಿದ್ದಂತೆ ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್ ಬಳಸಿಕೊಂಡು ವಿದೇಶಕ್ಕೆ ಪರಾರಿಯಾಗಿದ್ದು, ಈ ಪಾಸ್‌ಪೋರ್ಟ್ ರದ್ದುಪಡಿಸುವಂತೆ ಕೋರಿ ರಾಜ್ಯ ಪೊಲೀಸ್ ಮಹಾನಿರ್ದೇಶಕರ ಮೂಲಕ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ತಿಳಿದು ಬಂದಿದೆ.
ಕರ್ನಾಟಕದಲ್ಲಿ ಲೋಕಸಭೆಯ ಚುನಾವಣೆಯ ಹೊಸ್ತಿಲಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳು ಹರಿದಾಡಿದ್ದವು. ಆ ಬಳಿಕ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಪರಾರಿಯಾಗಿದ್ದರು. ಪ್ರಜ್ವಲ್ ರೇವಣ್ಣ ವಿರುದ್ಧ ಹೊಳೆನರಸೀಪುರ ಹಾಗೂ ಸಿಐಡಿ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಈ ಕುರಿತು ವಿಶೇಷ ತನಿಖಾ ತಂಡ(ಎಸ್‌ಐಟಿ) ತನಿಖೆ ನಡೆಸುತ್ತಿದೆ.
ಮನೆ ಕೆಲಸದಾಕೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಸಚಿವ ಹೆಚ್.ಡಿ ರೇವಣ್ಣಗೆ ನಿನ್ನೆ ಷರತ್ತುಬದ್ಧ ಜಾಮೀನು ನೀಡಲಾಗಿದೆ.
“ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ”ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶೆ ಜೆ.ಪ್ರೀತ್ ಅವರ ಪೀಠವು ಈ ಕುರಿತು ಅರ್ಜಿಯನ್ನು ವಿಚಾರಣೆ ನಡೆಸಿ ತೀರ್ಪನ್ನು ಕಾಯ್ದಿರಿಸಿತ್ತು. ಹಾಸನದ ಹೊಳೆನರಸೀಪುರದಲ್ಲಿ ದಾಖಲಾಗಿದ್ದ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಲಕ್ಷ ರೂ. ಬಾಂಡ್, ತನಿಖೆಗೆ ಸಹಕರಿಸಬೇಕೆಂಬ ಷರತ್ತು ವಿಧಿಸಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಮನೆ ಕೆಲಸ ಮಾಡುತ್ತಿದ್ದ ಮಹಿಳೆಯನ್ನು ಕಿಡ್ನಾಪ್ ಮಾಡಿದ್ದ ಕೇಸ್‍ನಲ್ಲಿ ಕಳೆದ ವಾರವಷ್ಟೇ ಮಧ್ಯಂತರ ಜಾಮೀನಿನಲ್ಲಿ ರೇವಣ್ಣ ಜೈಲಿನಿಂದ ಬಿಡುಗಡೆಯಾಗಿದ್ದರು.
ಇದನ್ನು ಓದಿ: ಟಿಕೆಟ್ ಕೈತಪ್ಪಿದಕ್ಕೆ ‘ಮತದಾನ’ ಮಾಡದ ಬಿಜೆಪಿ ಸಂಸದ: ಶೋಕಾಸ್ ನೋಟಿಸ್ ಜಾರಿ


