ಲೈಂಗಿಕ ದೌರ್ಜನ್ಯ ಪ್ರಕರಣದ ಪ್ರಮುಖ ಆರೋಪಿ, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ಕೊನೆಗೂ ಬಂಧಿಸಿದೆ.
ಲೈಂಗಿಕ ದೌರ್ಜನ್ಯ ಪ್ರಕರಣ ಬಹಿರಂಗಗೊಳ್ಳುತ್ತಿದ್ದಂತೆ ಜರ್ಮನಿಗೆ ಹಾರಿದ್ದ ಪ್ರಜ್ವಲ್, 34 ದಿನಗಳ ಬಳಿಕ ನಿನ್ನೆ (ಮೇ 30) ಭಾರತಕ್ಕೆ ಮರಳಿದ್ದು, ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.
ನಿನ್ನೆ ಮಧ್ಯಾಹ್ನ ಜರ್ಮನಿಯ ಮ್ಯೂನಿಕ್ ನಗರದಿಂದ ಲುಫ್ತಾನ್ಸಾ ಏರ್‌ಲೈನ್ಸ್ ಮೂಲಕ ಟಿಕೆಟ್ ಬುಕ್ ಮಾಡಿಕೊಂಡಿದ್ದ ಪ್ರಜ್ವಲ್, ಮಧ್ಯರಾತ್ರಿ 12:30ಕ್ಕೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿಯುವ ಸಾಧ್ಯತೆ ಇದ್ದಿದ್ದರಿಂದ ಎಸ್‌ಐಟಿ ಅಧಿಕಾರಿಗಳ ತಂಡ ವಿಮಾನ ನಿಲ್ದಾಣದಲ್ಲಿಯೇ ಮೊಕ್ಕಾಂ ಹೂಡಿತ್ತು. ಪ್ರಜ್ವಲ್ ಆಗಮಿಸುತ್ತಿದ್ದಂತೆ ಬಂಧಿಸಿ ಕರೆದೊಯ್ದಿದೆ.
ಹೊಳೆನರಸೀಪುರ ಟೌನ್ ಮತ್ತು ಸಿಐಡಿ ಠಾಣೆಗಳಲ್ಲಿ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಬಂಧನವಾಗಿದೆ. ಇವರ ಬಂಧನಕ್ಕೆ ಬ್ಲೂ ಕಾರ್ನರ್ ನೋಟಿಸ್ ಹಾಗೂ ನ್ಯಾಯಾಲಯದಿಂದ ವಾರೆಂಟ್ ಜಾರಿಯಾಗಿತ್ತು.
ಇಂದು( ಮೇ 31) ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ನಂತರ, ಪ್ರಜ್ವಲ್ ರೇವಣ್ಣರನ್ನು ಎಸ್‌ಐಟಿ ಅಧಿಕಾರಿಗಳು ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ. ಪ್ರಜ್ವಲ್ ವಿಚಾರಣೆ ಅಗತ್ಯವಿರುವುದರಿಂದ ಕನಿಷ್ಠ ಹತ್ತು ದಿನಗಳ ಕಸ್ಟಡಿಗೆ ನೀಡುವಂತೆ ಎಸ್‌ಐಟಿ ಪರ ವಕೀಲರು ವಿನಂತಿಸುವ ಸಾಧ್ಯತೆ ಇದೆ.
ಪ್ರಜ್ವಲ್ ಬಂಧನಕ್ಕೆ ಆಗ್ರಹಿಸಿ ನಿನ್ನೆ (ಮೇ 30) ಹಾಸನದಲ್ಲಿ ಜನಪರ ಚಳುವಳಿಗಳ ಒಕ್ಕೂಟದಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆದಿತ್ತು. ಸಾವಿರಾರು ಜನರು ಪಾಲ್ಗೊಂಡಿದ್ದರು.
ಇದನ್ನೂ ಓದಿ : ಇಲ್ಲಿ ನಡೆದಿರುವುದು ಲೈಂಗಿಕ ಹಗರಣವಲ್ಲ.. ವಿಕೃತ ಲೈಂಗಿಕ ಹತ್ಯಾಕಾಂಡ: ರೂಪ ಹಾಸನ


