ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರನ್ ಆತ್ಮಹತ್ಯೆ ಪ್ರಕರಣ ಮತ್ತು ಹಣಕಾಸಿನ ಅವ್ಯವಹಾರಗಳ ಬಗ್ಗೆ ತನಿಖೆಗೆ ಐಪಿಎಸ್ ಅಧಿಕಾರಿ ಮನೀಷ್ ಖರ್ಬೀಕರ್ ನೇತೃತ್ವದಲ್ಲಿ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ(ಎಸ್‌ಐಟಿ) ರಚಿಸಿ ಆದೇಶವನ್ನು ನೀಡಿದೆ.
ಶಿವಮೊಗ್ಗದ ವಿನೋಬ ನಗರದ ಕೆಂಚಪ್ಪ ಲೇಔಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಭಾನುವಾರ ಸಂಜೆ ಡೆತ್‌ನೋಟ್ ಬರೆದಿಟ್ಟು ಚಂದ್ರಶೇಖರನ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಡೆತ್ ನೋಟ್‌ನಲ್ಲಿ ತಮ್ಮ ಸಾವಿಗೆ ಕಾರಣ ತಿಳಿಸಿ ಮೂವರು ಉನ್ನತ ಅಧಿಕಾರಿಗಳ ಹೆಸರು ಉಲ್ಲೇಖಿಸಿದ್ದರು. ಈ ಆಧಾರದ ಮೇಲೆ ಶಿವಮೊಗ್ಗ ಪೊಲೀಸರು ಎಫ್ಐಆರ್ ದಾಖಲಿಸಿದ್ದರು.
ಮೂವರು ಅಧಿಕಾರಿಗಳು ವಿವಿಧ ಠೇವಣಿಗಳ ಮೂಲಕ ವೈಯಕ್ತಿಕ ಲಾಭಕ್ಕಾಗಿ ಸುಮಾರು 87 ಕೋಟಿ ರೂಪಾಯಿ ದುರುಪಯೋಗ ಪಡಿಸಿಕೊಂಡಿದ್ದು, ಮಾತ್ರವಲ್ಲದೇ ತನಗೆ ಕಿರುಕುಳ ನೀಡಿದ್ದಾರೆ. ನಿಗಮದ ಪ್ರಾಥಮಿಕ ಖಾತೆಯಿಂದ ಲೆಕ್ಕಕ್ಕೆ ಸಿಗದ ಹಣವನ್ನು ಬೇರೆಡೆಗೆ ತಿರುಗಿಸಲು ಸಮಾನಾಂತರ ಬ್ಯಾಂಕ್ ಖಾತೆ ತೆರೆಯುವಂತೆ ಹಿರಿಯ ಅಧಿಕಾರಿಗಳು ಒತ್ತಾಯಿಸಿದ್ದಾರೆ ಎಂದು ಚಂದ್ರಶೇಖರನ್ ತನ್ನ ಡೆತ್‌ನೋಟ್‌ನಲ್ಲಿ ಬರೆದಿದ್ದರು.
ನಿಗಮದ ವ್ಯವಸ್ಥಾಪಕ ನಿರ್ದೇಶಕ ಜೆ.ಜಿ. ಪದ್ಮನಾಭ, ಲೆಕ್ಕಾಧಿಕಾರಿ ಪರಶುರಾಮ ದುರುಗಣ್ಣವರ, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಮುಖ್ಯ ವ್ಯವಸ್ಥಾಪಕಿ ಶುಚಿಸ್ಮತಾ ರವುಲ್ ನನ್ನ ಸಾವಿಗೆ ಕಾರಣ ಎಂದು ಅವರು ಡೆತ್ ನೋಟ್‌ನಲ್ಲಿ ಬರೆದಿದ್ದರು. ಮಾನ್ಯ ಸಚಿವರು ಮೌಖಿಕವಾಗಿ ಸೂಚಿಸಿದ್ದಾರೆ ಎಂದು ಹಣ ವರ್ಗಾಯಿಸಲು ಲೆಕ್ಕಾಧಿಕಾರಿ ಹೇಳಿದ ಹಿನ್ನೆಲೆಯಲ್ಲಿ ನಿಗಮದ 87 ಕೋಟಿ ಅನುದಾನವನ್ನು ಬೇರೆ ಬೇರೆ ಖಾತೆಗಳಿಗೆ ವರ್ಗಾಯಿಸಲಾಗಿದೆ. ವ್ಯವಸ್ಥಾಪಕ ನಿರ್ದೇಶಕರು ಒತ್ತಾಯಪೂರ್ವಕ ಅನುದಾನ ವರ್ಗಾಯಿಸುತ್ತಿದ್ದರು. ನಮಗೆ ಅವರ ಒಳಸಂಚು ಅರ್ಥವೇ ಆಗಿಲ್ಲ. ಬ್ಯಾಂಕ್‌ನವರು ಚೆಕ್ ಬುಕ್ ಮತ್ತು ಪಾಸ್ ಬುಕ್ ಈವರೆಗೂ ನೀಡಿಲ್ಲ. 87 ಕೋಟಿ ಅವ್ಯವಹಾರ ಆಗಿದೆ. ಅಧಿಕಾರಿಗಳು ಅಕ್ರಮವಾಗಿ ಹಣ ವರ್ಗಾವಣೆ ಮಾಡಿಸಿದ್ದಾರೆ. ನಾನು ನಿಗಮಕ್ಕೆ ಮೋಸ ಮಾಡಿಲ್ಲ. ಅವ್ಯವಹಾರದಲ್ಲಿ ಭಾಗಿ ಆಗಿಲ್ಲ ಎಂದು ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದ್ದರು.
ಪ್ರಕರಣದ ಕುರಿತು ಪ್ರತಿಕ್ರಿಯಿಸಿರುವ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ, ಪ್ರಕರಣಕ್ಕೆ ಸಂಬಂಧಿಸಿ ಕೆಎಂವಿಎಸ್‌ಟಿಡಿಸಿ ವ್ಯವಸ್ಥಾಪಕ ನಿರ್ದೇಶಕ ಜೆ.ಜೆ ಪದ್ಮನಾಭ, ಲೆಕ್ಕಾಧಿಕಾರಿ ಪರಶುರಾಮ್ ಮತ್ತು ಬ್ಯಾಂಕ್ ವ್ಯವಸ್ಥಾಪಕಿ ಸುಚಿಸ್ಮಿತಾ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಇದರಲ್ಲಿ ಯಾರೇ ಭಾಗಿಯಾಗಿದ್ದರೂ ಮತ್ತು ಅವರು ಎಷ್ಟೇ ಪ್ರಭಾವಶಾಲಿಯಾಗಿದ್ದರೂ ನಾವು ಬಿಡುವುದಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ ಎಂದು ಹೇಳಿದ್ದರು.
ಇದನ್ನು ಓದಿ: ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ: ಬಂಧನ ಸಾಧ್ಯತೆ


