ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿಯನ್ನು ಬೆಂಗಳೂರಿನ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.
ಹಾಸನ ಜಿಲ್ಲೆ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಧೀಶ ಸಂತೋಷ್ ಗಜಾನನ ಭಟ್, ತೀರ್ಪು ಕಾಯ್ದಿರಿಸಿದ್ದರು. ಇಂದು (ಜೂನ್ 26) ಅರ್ಜಿ ವಜಾಗೊಳಿಸಿ ಆದೇಶಿಸಿದ್ದಾರೆ.
ಹೊಳೆನರಸೀಪುರದಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಬಂಧಿಸಿರುವ ಎಸ್‌ಐಟಿ ಪೊಲೀಸರು ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ. ಹಾಗಾಗಿ, ಜಾಮೀನು ಕೋರಿ ಪ್ರಜ್ವಲ್ ಅರ್ಜಿ ಸಲ್ಲಿಸಿದ್ದರು.
ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ 42ನೇ ಎಸಿಎಂಎಂ ನ್ಯಾಯಾಲಯ, ಪ್ರಜ್ವಲ್ ರೇವಣ್ಣ ಅವರನ್ನು ಜೂನ್ 29ರವರೆಗೆ ಎಸ್‌ಐಟಿ ಕಸ್ಟಡಿಗೆ ನೀಡಿದೆ. ಹೀಗಾಗಿ ಪ್ರಜ್ವಲ್ ರೇವಣ್ಣ ಅವರು ಇನ್ನೂ ಮೂರು ದಿನಗಳ ಕಾಲ ಎಸ್ಐಡಿ ಕಸ್ಟಡಿಯಲ್ಲಿ ವಿಚಾರಣೆ ಎದುರಿಸಲಿದ್ದಾರೆ.
ಇದನ್ನೂ ಓದಿ : ಪವರ್ ಟಿವಿ ಪ್ರಸಾರ ಸ್ಥಗಿತಕ್ಕೆ ಹೈಕೋರ್ಟ್ ಆದೇಶ


