ಲೋಕಸಭೆ ಚುನಾವಣೆಯ ವೇಳೆ ಭಾರತೀಯರ ಬಣ್ಣದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿ, ರಾಜೀನಾಮೆ ನೀಡಿದ್ದ ಸ್ಯಾಮ್ ಪಿತ್ರೋಡಾ ಅವರನ್ನು ಮತ್ತೆ ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಎಐಸಿಸಿ ನೇಮಕ ಮಾಡಿದೆ.
“ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಸ್ಯಾಮ್ ಪಿತ್ರೋಡಾ ಅವರನ್ನು ಮರು ನೇಮಕ ಮಾಡಿ ಎಐಸಿಸಿ ಅಧ್ಯಕ್ಷರು ಆದೇಶ ಹೊರಡಿಸಿದ್ದಾರೆ. ತಕ್ಷಣದಿಂದಲೇ ಅವರು ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ” ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
“ಅಮೆರಿಕದಲ್ಲಿರುವಂತೆ ಪಿತ್ರಾರ್ಜಿತ ಆಸ್ತಿಯ ಮೇಲೆ ತೆರಿಗೆ ಹಾಕುವ ಪದ್ಧತಿಯನ್ನು ಭಾರತದಲ್ಲೂ ಜಾರಿಗೆ ತರಬೇಕು. ದಕ್ಷಿಣ ಭಾರತೀಯರು ನೋಡಲು ಆಫ್ರಿಕನ್ನರಂತೆ ಇದ್ದಾರೆ” ಎಂದು ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಸ್ಯಾಮ್ ಪಿತ್ರೋಡಾ ಹೇಳಿಕೆ ನೀಡಿದ್ದರು. ಇದು ಭಾರೀ ವಿವಾದಕ್ಕೆ ಎಡೆಮಾಡಿಕೊಟ್ಟಿತ್ತು.
ಚುನಾವಣಾ ಭಾಷಣಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಂದ ಹಿಡಿದು ಬಿಜೆಪಿಯ ಹಲವು ನಾಯಕರು ಸ್ಯಾಮ್ ಪಿತ್ರೋಡಾ ಹೇಳಿಕೆಯನ್ನು ಖಂಡಿಸಿದ್ದರು. ಈ ಹಿನ್ನೆಲೆಯಲ್ಲಿ ಸ್ಯಾಮ್ ಪಿತ್ರೋಡಾ ಅವರು ಮೇ 8ರಂದು ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದಿದ್ದರು.
“ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲು ಸ್ಯಾಮ್ ಪಿತ್ರೋಡಾ ನಿರ್ಧರಿಸಿದ್ದಾರೆ. ಇದು ಅವರು ಸ್ವ-ಇಚ್ಛೆಯಿಂದ ತೆಗೆದುಕೊಂಡಿರುವ ತೀರ್ಮಾನವಾಗಿದೆ. ಅವರ ನಿರ್ಧಾರವನ್ನು ಕಾಂಗ್ರೆಸ್ ಅಧ್ಯಕ್ಷರು ಸ್ವಾಗತಿಸಿದ್ದಾರೆ” ಎಂದು ಅವರ ರಾಜೀನಾಮೆಯನ್ನು ಅಂಗೀಕರಿಸುತ್ತಾ ಕಾಂಗ್ರೆಸ್‌ನ ಹಿರಿಯ ನಾಯಕ ಜೈರಾಮ್ ರಮೇಶ್ ಹೇಳಿದ್ದರು.
ಇದನ್ನೂ ಓದಿ : ಪ್ಯಾರಸಿಟಮಲ್ ಸೇರಿದಂತೆ 52 ಔಷಧಿಗಳು ಗುಣಮಟ್ಟ ಪರೀಕ್ಷೆಯಲ್ಲಿ ವಿಫಲ


