ಠಾಣೆಗೆ ನುಗ್ಗಿ ಪೊಲೀಸರಿಗೆ ಬೆದರಿಕೆ ಹಾಕಿದ್ದಲ್ಲದೆ ಅವರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ದ ದಾಖಲಾಗಿರುವ ಪ್ರಕರಣವನ್ನು ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.
ಪ್ರಕರಣ ರದ್ದುಪಡಿಸುವಂತೆ ಕೋರಿ ಹರೀಶ್ ಪೂಂಜಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರ ಏಕಸದಸ್ಯ ಪೀಠ, ಈ ಸಂಬಂಧ ವಿಚಾರಣಾಧೀನ ನ್ಯಾಯಾಲಯದಲ್ಲೇ ಅರ್ಜಿ ಸಲ್ಲಿಸಿ ಸೂಕ್ತ ಪರಿಹಾರ ಕಂಡುಕೊಳ್ಳಬಹುದು ಎಂದು ಸೂಚಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಪೂಂಜಾ ವಿರುದ್ಧ ಪೊಲೀಸರು ಈಗಾಗಲೇ ವಿಚಾರಣಾಧೀನ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದಾರೆ. ಹೀಗಾಗಿ, ಆರೋಪಗಳನ್ನು ಕೈ ಬಿಡುವಂತೆ ಕೋರಿ ಅರ್ಜಿದಾರರು ವಿಚಾರಣಾಧೀನ ನ್ಯಾಯಾಲಯದಲ್ಲೇ ಅರ್ಜಿ ಸಲ್ಲಿಸಬೇಕು. ನ್ಯಾಯಾಲಯ ಎಂಟು ವಾರಗಳಲ್ಲಿ ಆ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿ ತೀರ್ಮಾನ ಕೈಗೊಳ್ಳಬೇಕು. ಅಲ್ಲಿಯವರೆಗೆ ವಿಚಾರಣೆಗೆ ಹಾಜರಾಗುವಂತೆ ಅರ್ಜಿದಾರರಿಗೆ ನ್ಯಾಯಾಲಯ ಸೂಚಿಸಬಾರದು ಎಂದು ಹೈಕೋರ್ಟ್ ಹೇಳಿದೆ.
ಪ್ರಕರಣದ ಹಿನ್ನೆಲೆ : ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದ್ದ ಆರೋಪದಡಿ ಶಶಿರಾಜ್ ಶೆಟ್ಟಿ ಎಂಬವರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದರು. ಈ ಬೆನ್ನಲ್ಲೇ ಬೆಳ್ತಂಗಡಿ ಪೊಲೀಸ್ ಠಾಣೆಗೆ ನುಗ್ಗಿದ್ದ ಶಾಸಕ ಹರೀಶ್ ಪೂಂಜಾ, ಪೊಲೀಸ್ ಅಧಿಕಾರಿಗಳನ್ನು ನಿಂದಿಸಿ, ಬೆದರಿಕೆ ಒಡ್ಡಿದ್ದಾರೆ. ಸರ್ಕಾರಿ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿ ಪ್ರತಿಭಟನೆ ನಡೆಸಿದ್ದಾರೆ ಎಂದು ಆರೋಪಿಸಿ ಪೊಲೀಸರು ಎರಡು ಎಫ್‌ಐಆರ್ ದಾಖಲಿಸಿದ್ದಾರೆ.
ಇದನ್ನು ಪ್ರಶ್ನಿಸಿ ಹರೀಶ್ ಪೂಂಜಾ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ಹಂತದಲ್ಲಿರುವಾಗಲೇ ಪೊಲೀಸರು ಹರೀಶ್ ಪೂಂಜಾ ಹಾಗೂ ಇತರ ಆರೋಪಿಗಳ ವಿರುದ್ಧ ವಿಚಾರಣಾಧೀನ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದಾರೆ.
ಇದನ್ನೂ ಓದಿ : ಪೋಕ್ಸೋ ಪ್ರಕರಣ : ಮಾಜಿ ಸಿಎಂ ಯಡಿಯೂರಪ್ಪಗೆ ನ್ಯಾಯಾಲಯದಿಂದ ಸಮನ್ಸ್


