ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ತಮ್ಮ ವಿರುದ್ದ ಸಿಬಿಐ ಎಫ್‌ಐಆರ್ ದಾಖಲಿಸಿರುವುದನ್ನು ಪ್ರಶ್ನಿಸಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು (ಜುಲೈ 15) ವಜಾಗೊಳಿಸಿದೆ.
ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಹಾಗೂ ಸತೀಶ್ ಚಂದ್ರ ಶರ್ಮಾ ಅವರಿದ್ದ ಪೀಠ ಡಿಕೆಶಿ ಅರ್ಜಿಯನ್ನು ವಜಾಗೊಳಿಸಿದೆ. ಕರ್ನಾಟಕ ಹೈಕೋರ್ಟ್ ಆದೇಶದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ನ್ಯಾಯಪೀಠ ಹೇಳಿದೆ.
ಅಕ್ಟೋಬರ್ 19, 2023 ರಂದು ಕರ್ನಾಟಕ ಹೈಕೋರ್ಟ್ ತನ್ನ ಮನವಿಯನ್ನು ತಿರಸ್ಕರಿಸಿರುವುದರ ವಿರುದ್ದ ವಿರುದ್ಧ ಡಿ.ಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತು.
ಮೂರು ತಿಂಗಳೊಳಗೆ ತನಿಖೆ ಮುಗಿಸಿ ವರದಿ ಸಲ್ಲಿಸುವಂತೆ ಸಿಬಿಐಗೆ ಹೈಕೋರ್ಟ್ ಸೂಚಿಸಿದೆ. ಡಿ.ಕೆ ಶಿವಕುಮಾರ್ ಅವರು 2013 ಮತ್ತು 2018 ರ ನಡುವೆ ಆದಾಯದ ಮೀರಿ ಆಸ್ತಿ ಗಳಿಸಿದ್ದಾರೆ ಎಂದು ಸಿಬಿಐ ಆರೋಪಿಸಿದೆ. ಈ ಅವಧಿಯಲ್ಲಿ ಅವರು ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿದ್ದರು.
ಸೆಪ್ಟೆಂಬರ್ 3,2020 ರಂದು ಡಿಕೆಶಿ ವಿರುದ್ದ ಸಿಬಿಐ ಎಫ್‌ಐಆರ್ ದಾಖಲಿಸಿತ್ತು. ಡಿ.ಕೆ ಶಿವಕುಮಾರ್ 2021ರಲ್ಲಿ ಹೈಕೋರ್ಟ್‌ನಲ್ಲಿ ಎಫ್‌ಐಆರ್ ಅನ್ನು ಪ್ರಶ್ನಿಸಿದ್ದರು.
ಇನ್ನು, ಡಿ.ಕೆ ಶಿವಕುಮಾರ್ ವಿರುದ್ದ ಹಣ ಅಕ್ರಮ ವರ್ಗಾವಣೆ ಆರೋಪದ ಮೇಲೆ 2018ರಲ್ಲಿ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣವನ್ನು ಜೂನ್ 10ರಂದು ಸುಪ್ರೀಂ ಕೋರ್ಟ್ ರದ್ದುಪಡಿಸಿದೆ.
ಇದನ್ನೂ ಓದಿ : ವಾಲ್ಮೀಕಿ ನಿಗಮದ ಅವ್ಯವಹಾರ ಪ್ರಕರಣ: ಶಾಸಕ ಬಿ.ನಾಗೇಂದ್ರ ಆರು ದಿನ ಇಡಿ ಕಸ್ಟಡಿಗೆ


