ಕೇಂದ್ರ ಬಜೆಟ್‌ನಲ್ಲಿ ಇಂಡಿಯಾ ಒಕ್ಕೂಟದ ಪಕ್ಷಗಳು ಆಡಳಿತ ನಡೆಸುತ್ತಿರುವ ರಾಜ್ಯಗಳನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಇದೇ ಶನಿವಾರ (ಜು.27) ನಡೆಯಲಿರುವ ನೀತಿ ಆಯೋಗದ ಆಡಳಿತ ಮಂಡಳಿ ಸಭೆ ಬಹಿಷ್ಕರಿಸಲು ನಿರ್ಧರಿಸಿದ್ದಾರೆ.
ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ಮೊದಲಿಗೆ ಸಭೆ ಬಹಿಷ್ಕರಿಸುವುದಾಗಿ ಚೆನ್ನೈನಲ್ಲಿ ಘೋಷಿಸಿದರು. ಆ ಬಳಿಕ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ, ತೆಲಂಗಾಣದ ಎ.ರೇವಂತ್ ರೆಡ್ಡಿ. ಹಿಮಾಚಲ ಪ್ರದೇಶದ ಸುಖವೀಂದರ್ ಸಿಂಗ್ ಸುಖು ಅವರು ಕೂಡ ಸಭೆ ಬಹಿಷ್ಕರಿಸುವುದಾಗಿ ತಿಳಿಸಿದರು.
“ರಾಜ್ಯದ ಅಗತ್ಯಗಳೇನು ಎಂಬುವುದನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್ ಅವರಿಗೆ ಮನವರಿಕೆ ಮಾಡಿ ಕೊಡಲಾಗಿತ್ತು. ಆದರೂ ಕೇಂದ್ರ ಬಜೆಟ್‌ನಲ್ಲಿ ರಾಜ್ಯವನ್ನು ಕಡೆಗಣಿಸಲಾಗಿದೆ. ಈ ಉದ್ದೇಶಪೂರ್ವಕ ನಿರ್ಲಕ್ಷ್ಯ ಮತ್ತು ತಾರತಮ್ಯವನ್ನು ಖಂಡಿಸುತ್ತೇವೆ. ಪ್ರತಿಭಟನಾರ್ಥಕವಾಗಿ ಇದೇ 27ರಂದು ಪ್ರಧಾನಿ ನೇತೃತ್ವದಲ್ಲಿ ನಡೆಯಲಿರುವ ನೀತಿ ಆಯೋಗದ ಸಭೆಯನ್ನು ಬಹಿಷ್ಕರಿಸುತ್ತೇವೆ” ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮಂಗಳವಾರ (ಜು.22) ಎಕ್ಸ್ ಪೋಸ್ಟ್‌ನಲ್ಲಿ ಪ್ರತಿಕ್ರಿಯಿಸಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ “ಇಂದು ಕೇಂದ್ರ ಸರ್ಕಾರ ಮಂಡಿಸಿರುವ ಬಜೆಟ್ ಸಂಪೂರ್ಣ ತಾರತಮ್ಯದಿಂದ ಕೂಡಿದ್ದು, ಅಪಾಯಕಾರಿಯಾಗಿದೆ. ಇದು ಕೇಂದ್ರ ಸರ್ಕಾರ ಅನುಸರಿಸಬೇಕಿದ್ದ ಒಕ್ಕೂಟ ವ್ಯವಸ್ಥೆ ಮತ್ತು ನ್ಯಾಯಸಮ್ಮತತೆಯ ತತ್ವಗಳಿಗೆ ವಿರುದ್ದವಾಗಿದೆ. ಸರ್ಕಾರದ ಧೋರಣೆ ಸಂಪೂರ್ಣವಾಗಿ ಸಾಂವಿಧಾನಿಕ ತತ್ವಗಳಿಗೆ ವಿರುದ್ಧವಾಗಿದೆ. ಇದನ್ನು ವಿರೋಧಿಸಿ ಕಾಂಗ್ರೆಸ್ ಸಿಎಂಗಳು ನೀತಿ ಆಯೋಗದ ಸಭೆಯನ್ನು ಬಹಿಷ್ಕರಿಸಲಿದ್ದಾರೆ” ಎಂದು ತಿಳಿಸಿದ್ದಾರೆ.
ಆಪಾದಿತ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸಭೆಯಲ್ಲಿ ಭಾಗವಹಿಸುವುದು ಅಸಾಧ್ಯವಾಗಿದೆ. ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್, ಕೇರಳದ ಪಿಣರಾಯಿ ವಿಜಯನ್ ಕೂಡ ಸಭೆಗೆ ಹಾಜರಾಗುವ ಸಾಧ್ಯತೆ ಕಡಿಮೆಯಿದೆ.
ಇಂಡಿಯಾ ಒಕ್ಕೂಟದ ಪಕ್ಷಗಳು ಆಡಳಿತ ನಡೆಸುವ ಇತರ ರಾಜ್ಯಗಳ ಮುಖ್ಯಮಂತ್ರಿಗಳು ಕೂಡ ನೀತಿ ಆಯೋಗದ ಸಭೆ ಬಹಿಷ್ಕರಿಸುವಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್ ಕರೆ ನೀಡಿದ್ದಾರೆ.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ರಾಜ್ಯ ಸಭೆಯಲ್ಲಿ ಟಿಎಂಸಿ ನಾಯಕ ಡೆರೆಕ್ ಒಬ್ರಿಯನ್ ತಿಳಿಸಿದ್ದಾರೆ.
ಇದನ್ನೂ ಓದಿ : ‘ಕುರ್ಚಿ ಉಳಿಸಿಕೊಳ್ಳುವ ಬಜೆಟ್..’; ಕೇಂದ್ರ ಸರ್ಕಾರದ ವಿರುದ್ಧ ಇಂಡಿಯಾ ಬ್ಲಾಕ್ ವಾಗ್ದಾಳಿ


