ಮಹಿಳೆಯ ಅಪಹರಣ ಪ್ರಕರಣದಲ್ಲಿ ಶಾಸಕ ಹೆಚ್‌ಡಿ ರೇವಣ್ಣ ಅವರಿಗೆ ನೀಡಿರುವ ಜಾಮೀನು ರದ್ದುಗೊಳಿಸುವಂತೆ ಕೋರಿ ವಿಶೇಷ ತನಿಖಾ ತಂಡ (ಎಸ್‌ಐಟಿ) ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿರುವ ಹೈಕೋರ್ಟ್ ಆದೇಶ ಕಾಯ್ದಿರಿಸಿದೆ.
ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ರೇವಣ್ಣ ಮತ್ತು ಎಸ್‌ಐಟಿ ಪರ ವಾದ-ಪ್ರತಿವಾದ ಆಲಿಸಿದ ಬಳಿಕ ಆದೇಶ ಕಾಯ್ದಿರಿಸಿದೆ. ರೇವಣ್ಣ ಅವರಿಗೆ ವಿಶೇಷ ನ್ಯಾಯಾಲಯ ಮೇ 13ರಂದು ಜಾಮೀನು ನೀಡಿತ್ತು.
ವಿಚಾರಣೆ ವೇಳೆ ಎಸ್‌ಐಟಿ ಪರ ವಾದ ಮಂಡಿಸಿದ ಹಿರಿಯ ವಕೀಲ ಪ್ರೊ.ರವಿವರ್ಮ ಕುಮಾರ್, “ಪ್ರಕರಣದಲ್ಲಿ ಹೆಚ್.ಡಿ. ರೇವಣ್ಣ ವಿರುದ್ಧ ಆರೋಪ ಪಟ್ಟಿ ಸಲ್ಲಿಸಲಾಗಿದೆ. ತನಿಖೆಯ ಸಂದರ್ಭದಲ್ಲಿ ರೇವಣ್ಣ ಪ್ರಕರಣದಲ್ಲಿ ಭಾಗಿಯಾಗಿರುವುದು ಸಾಭೀತಾಗಿದೆ. ಅಲ್ಲದೆ, ಸಂತ್ರಸ್ತೆಯು ತನಿಖಾಧಿಕಾರಿಗಳು ಮತ್ತು ನ್ಯಾಯಾಲಯದಲ್ಲಿ ನೀಡಿರುವ ಹೇಳಿಕೆಯಲ್ಲಿ ರೇವಣ್ಣ ವಿರುದ್ಧ ಆರೋಪ ಮಾಡಿದ್ದಾರೆ. ಈ ಆರೋಪವನ್ನು ದಾಖಲಿಸಿಕೊಂಡ ನ್ಯಾಯಾಲಯ ಜಾಮೀನನ್ನು ಮಂಜೂರು ಮಾಡಿದೆ. ಈ ಹಿನ್ನೆಲೆಯಲ್ಲಿ ಜಾಮೀನು ರದ್ದುಪಡಿಸಬೇಕು” ಎಂದು ಮನವಿ ಮಾಡಿದರು.
ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ರೇವಣ್ಣ ಪರ ವಕೀಲ ಸಿ.ವಿ.ನಾಗೇಶ್, “ಜಾಮೀನು ಮಂಜೂರು ಮಾಡುವುದು ಮತ್ತು ರದ್ದುಪಡಿಸುವ ಪ್ರಕ್ರಿಯೆ ಸಂಪೂರ್ಣವಾಗಿ ವಿಭಿನ್ನವಾಗಿರಲಿದೆ. ಅಲ್ಲದೆ, ಇಡೀ ಪ್ರಕರಣದಲ್ಲಿ ರೇವಣ್ಣ ಅವರ ಯಾವುದೇ ಪಾತ್ರವಿಲ್ಲ. ಆದರೆ, ಸಂತ್ರಸ್ತೆಯನ್ನು ಅಪಹರಣ ಮಾಡಿದ್ದ ಸತೀಶ್ ಬಾಬಣ್ಣ ಎಂಬುವರು ರೇವಣ್ಣ ನಿಮ್ಮನ್ನು ಕರೆದುಕೊಂಡು ಬರುವುದಕ್ಕೆ ಹೇಳಿದ್ದಾರೆ ಎಂದು ತಿಳಿಸಿದ್ದಾರೆ ಎಂಬ ಆರೋಪವಿದೆ. ಇದು ಶಿಕ್ಷಾರ್ಹ ಅಪರಾಧವಲ್ಲ” ಎಂದು ತಿಳಿಸಿದರು.
ಪ್ರಜ್ವಲ್ ರೇವಣ್ಣ ವಿರುದ್ದ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದ ಬೆನ್ನಲ್ಲೇ, ಪ್ರಕರಣದ ಸಂತ್ರಸ್ತೆ ಎನ್ನಲಾದ ಮಹಿಳೆಯನ್ನು ಅಪಹರಿಸಿದ ಆರೋಪ ಶಾಸಕ ಹೆಚ್.ಡಿ ರೇವಣ್ಣ ಮೇಲಿದೆ. ಸಂತ್ರಸ್ತೆ ಪ್ರಜ್ವಲ್ ರೇವಣ್ಣ ವಿರುದ್ದ ದೂರು ನೀಡದಂತೆ ತಡೆಯಲು ಆಕೆಯನ್ನು ರೇವಣ್ಣ ಅಪಹರಣ ಮಾಡಿಸಿದ್ದರು ಎನ್ನಲಾಗಿದೆ. ಈ ಸಂಬಂಧ ಮಹಿಳೆಯ ಮಗ ದೂರು ದಾಖಲಿಸಿದ್ದರು. ಎಸ್‌ಐಟಿ ರೇವಣ್ಣ ಅವರನ್ನು ಬಂಧಿಸಿತ್ತು.
ಇದನ್ನೂ ಓದಿ : ಒಳ ಮೀಸಲಾತಿ | ದಲಿತ ಸಮುದಾಯಕ್ಕೆ ಶಾಶ್ವತ ಪರಿಹಾರ ಕಲ್ಪಿಸಲು ರಾಜ್ಯ ಸರ್ಕಾರಕ್ಕಿದು ಸುವರ್ಣಾವಕಾಶ: ಅಂಬಣ್ಣ ಅರೋಲಿಕರ್


