ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತ (ಕೆಎಂವಿಎಸ್‌ಟಿಡಿಸಿಎಲ್) ಅಧಿಕಾರಿ ಚಂದ್ರಶೇಖರನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳ (ಎಸ್‌ಐಟಿ) 300 ಪುಟಗಳ ಆರೋಪ ಪಟ್ಟಿಯನ್ನು ಶಿವಮೊಗ್ಗದ ಜಿಲ್ಲಾ ನ್ಯಾಯಾಲಯಕ್ಕೆ ಗುರುವಾರ ಸಲ್ಲಿಸಿದೆ ಎಂದು ವರದಿಯಾಗಿದೆ.
ಪ್ರಕರಣದಲ್ಲಿ ಕೆಎಂವಿಎಸ್‌ಟಿಡಿಸಿಎಲ್ ಹಿಂದಿನ ವ್ಯವಸ್ಥಾಪಕ ಜೆ.ಜಿ ಪದ್ಮನಾಭ ಮತ್ತು ಪರಶುರಾಮ ದುರ್ಗಣ್ಣನವರ್ ಅವರನ್ನು ಆರೋಪಿಗಳನ್ನಾಗಿಸಲಾಗಿದೆ. ಈ ಇಬ್ಬರೂ ಅಧಿಕಾರಿಗಳನ್ನು ಸರ್ಕಾರ ಅಮಾನತುಗೊಳಿಸಿದೆ. ಚಂದ್ರಶೇಖರನ್ ಪತ್ನಿ ಕವಿತಾ ಅವರು ನೀಡಿದ ದೂರಿನನ್ವಯ ಶಿವಮೊಗ್ಗದ ವಿನೋಬನಗರ ಠಾಣೆಯಲ್ಲಿ ಐಪಿಸಿ ಸೆಕ್ಷನ್ 306 ಮತ್ತು 34ರ ಅಡಿ ಪ್ರಕರಣ ದಾಖಲಾಗಿತ್ತು.
ಪ್ರಕರಣದಲ್ಲಿ ಪ್ರಮುಖವಾಗಿ ಹೆಸರು ಕೇಳಿ ಬಂದಿದ್ದ ಮಾಜಿ ಸಚಿವ ಬಿ. ನಾಗೇಂದ್ರ ಮತ್ತು ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಹಾಗೂ ಇನ್ನಿತರರ ಹೆಸರು ಆರೋಪಪಟ್ಟಿಯಲ್ಲಿ ಇಲ್ಲ ಎಂದು ತಿಳಿದು ಬಂದಿದೆ.
ಚಂದ್ರಶೇಖರನ್ ಅವರ ಆತ್ಮಹತ್ಯೆ ಪ್ರಕರಣ ರಾಜ್ಯದಲ್ಲಿ ದೊಡ್ಡ ಮಟ್ಟದಲ್ಲಿ ಸುದ್ದಿಯಾದ ಬಳಿಕ, ರಾಜ್ಯ ಸರ್ಕಾರ ಮೇ 31,2023ರಂದು ಸಿಐಡಿಯ ಎಸ್‌ಐಟಿಗೆ ಪ್ರಕರಣದ ತನಿಖೆ ವರ್ಗಾಯಿಸಿತ್ತು. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಒಟ್ಟು 8 ಪ್ರಕರಣಗಳು ದಾಖಲಾಗಿದ್ದು, ಎಲ್ಲವನ್ನೂ ಎಸ್‌ಐಟಿ ತನಿಖೆ ನಡೆಸುತ್ತಿದೆ.
ಶಿವಮೊಗ್ಗದ ವಿನೋಬನಗರದ ತಮ್ಮ ಮನೆಯಲ್ಲಿ 2024ರ ಮೇ 26 ರಂದು ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಸಂಬಂಧ ದಾಖಲಾಗಿದ್ದ ಪ್ರಕರಣದಲ್ಲಿ ಎಸ್‌ಐಟಿ ಅಧಿಕಾರಿಗಳು ಪ್ರಾಥಮಿಕ ಹಂತದ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ತನಿಖೆ ಮಾಡಬೇಕಾಗಿದ್ದು, ಸಂಪೂರ್ಣ ದೋಷರೋಪ ಪಟ್ಟಿ ಸಲ್ಲಿಸಲು ಹೆಚ್ಚಿನ ಕಾಲಾವಕಾಶ ನೀಡುವಂತೆ ಎಸ್‌ಐಟಿ ಅಧಿಕಾರಿಗಳು ನ್ಯಾಯಾಲಯವನ್ನು ಕೋರಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ : ಮಾಸಿಕ ₹6 ಲಕ್ಷ ಜೀವನಾಂಶ ಕೋರಿದ ಮಹಿಳೆ : ‘ದುಡಿದು ಸಂಪಾದಿಸಿ’ ಎಂದ ಹೈಕೋರ್ಟ್


