ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಜಾಮೀನು ಮತ್ತು ನಿರೀಕ್ಷಣಾ ಜಾಮೀನು ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ಸೆಪ್ಟೆಂಬರ್ 5ಕ್ಕೆ ಮುಂದೂಡಿದೆ. ಅರ್ಜಿದಾರರ ಪರ ವಕೀಲರ ಕೋರಿಕೆಯಂತೆ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ವಿಚಾರಣೆಯನ್ನು ಮುಂದೂಡಿದ್ದಾರೆ.
ವಿಶೇಷ ತನಿಖಾ ತಂಡ (ಎಸ್‌ಐಟಿ) ಪರವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದ ವಿಶೇಷ ಸರ್ಕಾರಿ ಅಭಿಯೋಜಕ ಪ್ರೊ.ರವಿವರ್ಮ ಕುಮಾರ್ ಅವರು ಸಂತ್ರಸ್ತರ ಖಾಸಗಿತನ ರಕ್ಷಿಸುವ ಉದ್ದೇಶದಿಂದ ಪ್ರಜ್ವಲ್ ಜಾಮೀನು ಅರ್ಜಿಗಳನ್ನು ಗೌಪ್ಯ ವಿಚಾರಣೆ ನಡೆಸುವಂತೆ ಮನವಿ ಮಾಡಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿದ ಪೀಠ “ಮುಖ್ಯ ನ್ಯಾಯಮೂರ್ತಿಗಳು ಈ ಸಂಬಂಧ ಆದೇಶ ಮಾಡಬೇಕು. ಮುಂದಿನ ವಿಚಾರಣೆಯಲ್ಲಿ ನೋಡೋಣ”ಎಂದಿದ್ದಾರೆ.
ಪ್ರಜ್ವಲ್ ಪರವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದ ವಕೀಲ ಜಿ ಅರುಣ್ ಅವರು ಆರೋಪ ಪಟ್ಟಿ ಸಲ್ಲಿಕೆಯಾಗಿದೆ. ಹಾಗಾಗಿ, ಜಾಮೀನು ನೀಡಲು ಅವಕಾಶವಿದೆ ಎಂದು ತಿಳಿಸಲು ಪ್ರಯತ್ನಿಸಿದರು. ಆಗ ನ್ಯಾಯಾಲಯವು, ಅನುಗ್ರಹ ತೋರುವ ಪ್ರಕರಣ ಇದಲ್ಲ ಎಂದಿದೆ.
ಹಾಸನ ಜಿಲ್ಲೆ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಅತ್ಯಾಚಾರ ಪ್ರಕರಣ ಮತ್ತು ಬೆಂಗಳೂರಿನ ಸೈಬರ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣವೊಂದರಲ್ಲಿ ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಅರ್ಜಿ ಸಲ್ಲಿಸಿದ್ದರು.
ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುವ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ಮೂರು ಪ್ರಕರಣಗಳನ್ನು ಎಸ್‌ಐಟಿ ತನಿಖೆ ನಡೆಸುತ್ತಿದೆ.
ಇದನ್ನೂ ಓದಿ : ಹೆಚ್.ಡಿ ರೇವಣ್ಣ ಜಾಮೀನು ರದ್ದುಗೊಳಿಸಲು ಹೈಕೋರ್ಟ್ ನಕಾರ : ಎಸ್‌ಐಟಿ ಅರ್ಜಿ ವಜಾ


