ಮಣಿಪುರದ ಜಿರಿಬಾಮ್ ಜಿಲ್ಲೆಯಲ್ಲಿ ಶನಿವಾರ ಬೆಳಿಗ್ಗೆ ಎರಡು ಗುಂಪುಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಆರು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಗಳು ಹೇಳಿವೆ.
ಗಲಭೆ ಪೀಡಿತ ಪ್ರದೇಶಗಳಲ್ಲಿ ಸೇನಾ ಹೆಲಿಕಾಫ್ಟರ್ ಮೂಲಕ ಕಣ್ಗಾವಲಿಡಲು ಮತ್ತು ಡ್ರೋನ್ ಪತ್ತೆ ವ್ಯವಸ್ಥೆಯೊಂದಿಗೆ ಬೃಹತ್ ಕೂಂಬಿಂಗ್ ಕಾರ್ಯಾಚರಣೆ ನಡೆಸಲು ಭದ್ರತಾ ಪಡೆಗಳನ್ನು ನಿಯೋಜಿಸಲು ಸರ್ಕಾರ ನಿರ್ಧರಿಸಿದೆ.
ಶುಕ್ರವಾರ ಬಿಶನ್‌ಪುರ ಜಿಲ್ಲೆಯ ಮೊಯಿರಾಂಗ್ ಪಟ್ಟಣದಲ್ಲಿ ಶಂಕಿತ ಬಂಡುಕೋರರು ನಡೆಸಿದ್ದ ರಾಕೆಟ್ ದಾಳಿಯಲ್ಲಿ ಒಬ್ಬರು ಪಾದ್ರಿ ಸಾವನ್ನಪ್ಪಿದ್ದರು ಮತ್ತು ಐವರು ಗಾಯಗೊಂಡಿದ್ದರು. ಈ ಬೆನ್ನಲ್ಲೇ ಶನಿವಾರ ಬೆಳಿಗ್ಗೆ ಅಸ್ಸಾಂಗೆ ಹೊಂದಿಕೊಂಡಿರುವ ಜಿರಿಬಾಮ್ ಜಿಲ್ಲೆಯಲ್ಲಿ ಗುಂಡಿ ಕಾಳಗ ನಡೆದಿದೆ. ಈ ಘಟನೆಯಲ್ಲಿ ಮೃತರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ ಎಂದು ಭದ್ರತಾ ಪಡೆಗಳು ಹೇಳಿದೆ.
ಮುಖ್ಯಮಂತ್ರಿ ಎನ್.ಬಿರೇನ್ ಸಿಂಗ್ ಅವರು ಪಕ್ಷದ ಮತ್ತು ಆಡಳಿತಾರೂಢ ಮೈತ್ರಿಕೂಟದ ಘಟಕ ಪಕ್ಷಗಳಾದ ನಾಗಾ ಪೀಪಲ್ಸ್ ಫ್ರಂಟ್ ಮತ್ತು ನ್ಯಾಷನಲ್ ಪೀಪಲ್ಸ್ ಪಾರ್ಟಿ ಶಾಸಕರ ಜೊತೆ ಶನಿವಾರ ರಾತ್ರಿ ತುರ್ತು ಸಭೆ ನಡೆಸಿದ್ದಾರೆ. ಅಲ್ಲದೆ, ರಾಜಭವನಕ್ಕೆ ತೆರಳಿ ರಾಜ್ಯಪಾಲ ಎಲ್.ಆಚಾರ್ಯ ಅವರನ್ನು ಭೇಟಿ ಮಾಡಿ ಪರಿಸ್ಥಿತಿಯನ್ನು ವಿವರಿಸಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ : ಕೇರಳ ಭೂಕುಸಿತ ದುರಂತ ಮತ್ತು ಮಾಧವ ಗಾಡ್ಗಿಲ್ ವರದಿ


