ಭಯೋತ್ಪಾದಕರಿಗೆ ಆರ್ಥಿಕ ಸಹಾಯ ಒದಗಿಸಿದ ಪ್ರಕರಣದಲ್ಲಿ ಬಂಧಿತರಾಗಿರುವ ಜಮ್ಮು ಕಾಶ್ಮೀರದ ಬಾರಾಮುಲ್ಲಾ ಕ್ಷೇತ್ರದ ಸಂಸದ ಶೇಖ್ ರಶೀದ್ ಅಲಿಯಾಸ್ ಇಂಜಿನಿಯರ್ ರಶೀದ್ ಅವರಿಗೆ ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಅಕ್ಟೋಬರ್ 2ರವರೆಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಭಯೋತ್ಪಾದಕರಿಗೆ ಧನ ಸಹಾಯ ಮಾಡಿದ ಆರೋಪದ ಮೇಲೆ ಕಠಿಣ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ(ಯುಎಪಿಎ) ಅಡಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ರಶೀದ್ ಅವರನ್ನು 2017 ರಲ್ಲಿ ಬಂಧಿಸಿತ್ತು. ನಂತರ 2019 ರಿಂದ ಅವರು ದೆಹಲಿಯ ತಿಹಾರ್ ಜೈಲಿನಲ್ಲಿದ್ದಾರೆ.
ಕಾಶ್ಮೀರದಲ್ಲಿ ಭಯೋತ್ಪಾದಕ ಗುಂಪುಗಳು ಮತ್ತು ಪ್ರತ್ಯೇಕತಾವಾದಿಗಳಿಗೆ ಧನಸಹಾಯ ಒದಗಿಸಿದ ಆರೋಪದಲ್ಲಿ ಎನ್‌ಐಎಯಿಂದ ಬಂಧಿಸಲ್ಪಟ್ಟ ಕಾಶ್ಮೀರಿ ಉದ್ಯಮಿ ಜಹೂರ್ ವಾತಾಲಿ ಅವರ ವಿಚಾರಣೆ ವೇಳೆ ರಶೀದ್ ಅವರ ಹೆಸರು ಕೇಳಿ ಬಂದಿತ್ತು.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್, ಲಷ್ಕರ್-ಎ-ತೊಯ್ಬಾ ಸಂಸ್ಥಾಪಕ ಹಫೀಜ್ ಸಯೀದ್ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಮುಖ್ಯಸ್ಥ ಸೈಯದ್ ಸಲಾವುದ್ದೀನ್ ಸೇರಿದಂತೆ ಹಲವರ ವಿರುದ್ಧ ಎನ್‌ಐಎ ಆರೋಪಪಟ್ಟಿ ಸಲ್ಲಿಸಿತ್ತು. 2022ರಲ್ಲಿ ಯಾಸಿನ್ ಮಲಿಕ್‌ಗೆ ವಿಚಾರಣಾ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.
ಸೆಪ್ಟೆಂಬರ್ 18, 25 ಮತ್ತು ಅಕ್ಟೋಬರ್ 1 ರಂದು ಮೂರು ಹಂತಗಳಲ್ಲಿ ನಡೆಯಲಿರುವ ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣೆಗೆ ಪ್ರಚಾರ ಮಾಡಲು ಮಧ್ಯಂತರ ಜಾಮೀನು ಕೋರಿ ರಶೀದ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ನ್ಯಾಯಾಲಯ ಮಾನ್ಯ ಮಾಡಿದೆ.
ಜೈಲಿನಲ್ಲಿದ್ದುಕೊಂಡೇ ಸಂಸದರಾದ ರಶೀದ್ :
ಈ ಬಾರಿಯ ಲೋಕಸಭಾ ಚುನಾವಣೆಗೆ ಜೈಲಿನಿಂದಲೇ ಸ್ಪರ್ಧಿಸಿದ್ದ ರಶೀದ್ ಅವರು ಬಾರಾಮುಲ್ಲಾ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಮತ್ತು ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಅವರನ್ನು ಸೋಲಿಸಿ ಸಂಸದರಾಗಿದ್ದಾರೆ.
ಕಳೆದ ಜುಲೈ 5ರಂದು ಕೇವಲ ಎರಡು ಗಂಟೆಗಳ ಪೆರೋಲ್ ಮೇಲೆ ಜೈಲಿನಿಂದ ಹೊರಬಂದ ರಶೀದ್ ಅವರು ಲೋಕಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.
ರಶೀದ್ 2008 ಮತ್ತು 2014ರ ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣೆಗಳಲ್ಲಿ ಲ್ಯಾಂಗೇಟ್ ಕ್ಷೇತ್ರದಿಂದ ಗೆದ್ದು ಶಾಸಕರಾಗಿದ್ದರು. 2019ರ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದ ಅವರು ಸೋಲನುಭವಿಸಿದ್ದರು. ರಶೀದ್ ಅವಾಮಿ ಇತ್ತೆಹಾದ್ ಪಕ್ಷವನ್ನು ಮುನ್ನಡೆಸುತ್ತಿದ್ದಾರೆ. ಆದರೆ, ಚುನಾವಣೆಗಳಿಗೆ ಅವರು ಸ್ವತಂತ್ರವಾಗಿ ಸ್ಪರ್ಧಿಸಿದ್ದರು.
ಇದನ್ನೂ ಓದಿ : ವೆಂಟಿಲೇಟರ್‌ನಲ್ಲಿ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ; ಚಿಂತಾಜನಕ ಸ್ಥಿತಿಯಲ್ಲಿ ಹಿರಿಯ ಕಮ್ಯುನಿಸ್ಟ್ ನಾಯಕ


