ಅಸ್ಸಾಂನಲ್ಲಿ ತೆರವು ಕಾರ್ಯಾಚರಣೆ ಗುರುವಾರ ಹಿಂಸಾಚಾರಕ್ಕೆ ತಿರುಗಿದ್ದು, ಪ್ರತಿಭಟನಾಕಾರರನ್ನು ಹಿಮ್ಮೆಟ್ಟಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿ, ಗುಂಡು ಹಾರಿಸಿದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ.
ಕಮ್ರೂಪ್ (ಮೆಟ್ರೋಪಾಲಿಟನ್) ಜಿಲ್ಲೆಯಲ್ಲಿ ಆಪಾದಿತ ಅತಿಕ್ರಮಣ ತೆರವು ಕಾರ್ಯಾಚರಣೆ ವೇಳೆ ಈ ಘಟನೆ ಸಂಭವಿಸಿದೆ. ಜಿಲ್ಲೆಯ ಕೊಚುತೊಲಿ ಗ್ರಾಮದಲ್ಲಿ ಬಂಗಾಳಿ ಮಾತನಾಡುವ ಮುಸ್ಲಿಂ ಗ್ರಾಮಸ್ಥರನ್ನು ತೆರವುಗೊಳಿಸಲು ಸೋನಾಪುರ ಸರ್ಕಲ್‌ನ ಪೊಲೀಸ್ ತಂಡ ತೆರಳಿತ್ತು. ಈ ವೇಳೆ ಪೊಲೀಸರು ಮತ್ತು ಗ್ರಾಮಸ್ಥರ ನಡುವೆ ಘರ್ಷಣೆ ನಡೆದಿದೆ.
ಮಹಿಳೆಯರು ಸೇರಿದಂತೆ ಗ್ರಾಮಸ್ಥರು ಅಧಿಕಾರಿಗಳು ಮತ್ತು ಪೊಲೀಸರ ಮೇಲೆ ಹರಿತವಾದ ಆಯುಧಗಳು, ದೊಣ್ಣೆ ಮತ್ತು ಕಲ್ಲುಗಳಿಂದ ದಾಳಿ ನಡೆಸಿದ್ದು, ಪರಿಣಾಮ ಮ್ಯಾಜಿಸ್ಟ್ರೇಟ್ ಮತ್ತು 20ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿವೆ. ಘಟನೆಯಲ್ಲಿ ಪೊಲೀಸ್ ವಾಹನಕ್ಕೂ ಹಾನಿಯಾಗಿದೆ ಎಂದು ವರದಿಗಳು ಹೇಳಿವೆ.
ಸಿಎಂ ಹಿಮಂತ ಬಿಸ್ವಾ ಶರ್ಮಾ ಅವರು ಉದ್ವಿಗ್ನ ಪರಿಸ್ಥಿತಿ ಉಂಟಾಗಲು ಕಾಂಗ್ರೆಸ್ ಕಾರಣ ಎಂದು ಆರೋಪಿಸಿದ್ದಾರೆ.
“ತೆರವು ಕಾರ್ಯಾಚರಣೆ ಶಾಂತಿಯುತವಾಗಿ ನಡೆಯುತ್ತಿತ್ತು. ಕಾಂಗ್ರೆಸ್ ಕಾರ್ಯಾಚರಣೆಯನ್ನು ವಿರೋಧಿಸಲು ಆರಂಭಿಸಿದಾಗ ಪರಿಸ್ಥಿತಿ ಹದಗೆಟ್ಟಿದೆ. ಸ್ಥಳಕ್ಕೆ ತೆರಳಿದ ಪೊಲೀಸರು ಹಾಗೂ ಸರ್ಕಾರಿ ಅಧಿಕಾರಿಗಳ ತಂಡದ ಮೇಲೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ದೊಣ್ಣೆ, ಕಲ್ಲುಗಳಿಂದ ಹಲ್ಲೆ ನಡೆಸಿದ್ದಾರೆ. ಈ ವೇಳೆ ಪೊಲೀಸರು ಹಾರಿಸಿದ ಗುಂಡಿಗೆ ಇಬ್ಬರು ಬಲಿಯಾಗಿದ್ದಾರೆ ಮತ್ತು ಏಳು ಮಂದಿ ಗಾಯಗೊಂಡಿದ್ದಾರೆ” ಎಂದು ಸಿಎಂ ಶರ್ಮಾ ಹೇಳಿದ್ದಾರೆ.
ಮೃತರನ್ನು ಜುಬಾಹಿರ್ ಅಲಿ ಮತ್ತು ಹೈದರ್ ಅಲಿ ಎಂದು ಗುರುತಿಸಲಾಗಿದೆ. ಸೋನಾಪುರ ಸರ್ಕಲ್ ಅಧಿಕಾರಿ ನಿತುಲ್ ಖತಾನಿಯಾರ್, ಉಪ ಪೊಲೀಸ್ ಆಯುಕ್ತ (ಪೂರ್ವ) ಮೃಣಾಲ್ ದೇಕಾ ಮತ್ತು ಸೋನಾಪುರ ಪೊಲೀಸ್ ಠಾಣೆ ಪ್ರಭಾರಿ ಅಧಿಕಾರಿ ಹಿರಾಕ್ ಜ್ಯೋತಿ ಸೈಕಿಯಾ ಗಾಯಗೊಂಡಿದ್ದಾರೆ ಎಂದು ಸಿಎಂ ತಿಳಿಸಿದ್ದಾರೆ.
ಘಟನೆ ಬಳಿಕ ಗ್ರಾಮದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಿ ಪರಿಸ್ಥಿತಿ ಹತೋಟಿಗೆ ತರಲಾಗಿದೆ ಎಂದು ಸಿಎಂ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ : ತೆರಿಗೆಯಲ್ಲಿ ಶೇ.50ರಷ್ಟು ಪಾಲು ಕೊಡಿ : ಪ್ರತಿಪಕ್ಷಗಳ ಆಡಳಿತ ರಾಜ್ಯಗಳಿಂದ ಕೇಂದ್ರಕ್ಕೆ ಆಗ್ರಹ


