ಮಂಡ್ಯ ಜಿಲ್ಲೆಯಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಇನ್ನೂ ಮೂವರನ್ನು ಬಂಧಿಸಲಾಗಿದ್ದು, ಕರ್ತವ್ಯ ಲೋಪವೆಸಗಿದ್ದಕ್ಕಾಗಿ ಪೊಲೀಸ್ ಇನ್ಸ್‌ಪೆಕ್ಟರ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು ವರದಿಯಾಗಿದೆ. ಬುಧವಾರ ರಾತ್ರಿ ಜಿಲ್ಲೆಯ ನಾಗಮಂಗಲ ಪಟ್ಟಣದಲ್ಲಿ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಯಲ್ಲಿ ಹಲವಾರು ಅಂಗಡಿಗಳು ಮತ್ತು ವಾಹನಗಳನ್ನು ಸುಟ್ಟುಹಾಕಲಾಗಿದೆ. ಸಧ್ಯಕ್ಕೆ ನಗರದಲ್ಲಿ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಪರಿಸ್ಥಿತಿ ಶಾಂತಿಯುತವಾಗಿದ್ದರೂ, ನಗರದಲ್ಲಿ ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಸೆಪ್ಟೆಂಬರ್ 14 ರವರೆಗೆ ನಾಲ್ಕಕ್ಕಿಂತ ಹೆಚ್ಚು ಜನರ ಗುಂಪನ್ನು ನಿಷೇಧಿಸುವ ನಿಷೇಧಾಜ್ಞೆಗಳನ್ನು ವಿಧಿಸಲಾಗಿದೆ. ಹೊಸಾಗಿ ಮೂವರ ಬಂಧನಗಳೊಂದಿಗೆ, ಪ್ರಕರಣದಲ್ಲಿ ಬಂಧಿತರಾಗಿರುವ ಒಟ್ಟು ಜನರ ಸಂಖ್ಯೆ ಈಗ 55ಕ್ಕೆ ಏರಿಕೆಯಾಗಿದೆ. ಆರಂಭದಲ್ಲಿ ಬಂಧಿತರಾದ 52 ಜನರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ವಿಧಿ ವಿಜ್ಞಾನ ಪ್ರಯೋಗಾಲಯದ ತಜ್ಞರ ತಂಡ ಗುರುವಾರ ಸ್ಥಳಕ್ಕೆ ಭೇಟಿ ನೀಡಿ ಸಾಕ್ಷ್ಯ ಸಂಗ್ರಹಿಸಿದೆ. ಅಲ್ಲದೆ, ಮೆರವಣಿಗೆ ವೇಳೆ ಉಂಟಾದ ಘರ್ಷಣೆಗೆ ಸಂಬಂಧಿಸಿದಂತೆ ಕರ್ತವ್ಯ ಲೋಪವೆಸಗಿದ ಹಿನ್ನೆಲೆಯಲ್ಲಿ ನಾಗಮಂಗಲ ಪಟ್ಟಣ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಅಶೋಕ್ ಕುಮಾರ್ ಅವರನ್ನು ಗುರುವಾರ ಸಂಜೆ ಅಮಾನತು ಮಾಡಲಾಗಿದೆ ಎಂದು ಮಂಡ್ಯ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದ್ದಾರೆ.
ಇದನ್ನೂಓದಿ: ಮುಡಾ ಪ್ರಕರಣ| ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ ಅಂತ್ಯ : ಆದೇಶ ಕಾಯ್ದಿರಿಸಿದ ಹೈಕೋರ್ಟ್
“ಇಲ್ಲಿ ಪರಿಸ್ಥಿತಿ ಶಾಂತಿಯುತವಾಗಿದೆ ಮತ್ತು ಈಗಾಗಲೇ ಬಂಧಿಸಲಾಗಿರುವ 52 ಜನರನ್ನು ಹೊರತುಪಡಿಸಿ, ಘಟನೆಗೆ ಸಂಬಂಧಿಸಿದಂತೆ ನಾವು ಇನ್ನೂ ಮೂವರನ್ನು ಬಂಧಿಸಿದ್ದೇವೆ. ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜಿಸಿದ್ದು, ಸೆಪ್ಟೆಂಬರ್ 14 ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ” ಎಂದು ಅವರು ಹೇಳಿದ್ದಾರೆ.
ಮಂಡ್ಯ ಲೋಕಸಭಾ ಸದಸ್ಯರಾಗಿರುವ ಜೆಡಿಎಸ್ ಮುಖಂಡ ಹಾಗೂ ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್ ಡಿ ಕುಮಾರಸ್ವಾಮಿ ಶುಕ್ರವಾರ ಪಟ್ಟಣಕ್ಕೆ ಭೇಟಿ ನೀಡಿದ್ದಾರೆ. ಗುರುವಾರ ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಪ್ರತಿಕ್ರಿಯಿಸಿದ್ದ ಕುಮಾರಸ್ವಾಮಿ ಅವರು ಹಿಂಸಾತ್ಮಕ ಘಟನೆಗಳನ್ನು ತೀವ್ರವಾಗಿ ಖಂಡಿಸಿದ್ದಾರೆ.
ಗಣಪತಿ ದೇವರ ಮೆರವಣಿಗೆಯಲ್ಲಿ ಶಾಂತಿಯುತವಾಗಿ ಸಾಗುತ್ತಿದ್ದ ಭಕ್ತರನ್ನು ಗುರಿಯಾಗಿಸಿಕೊಂಡು ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿ ಗಲಾಟೆ ಎಬ್ಬಿಸಿದ್ದಾರೆ. ಸಾರ್ವಜನಿಕರು ಮತ್ತು ಪೊಲೀಸರ ಮೇಲೆ ಕಲ್ಲು, ಚಪ್ಪಲಿ ಎಸೆದಿರುವುದು, ಪೆಟ್ರೋಲ್ ಬಾಂಬ್‌ಗಳನ್ನು ಸ್ಫೋಟಿಸಿ ಮತ್ತು ಕತ್ತಿಗಳನ್ನು ಝಳಪಿಸಿರುವುದು ಪಟ್ಟಣದಲ್ಲಿ ‘ಕಾನೂನು ಸುವ್ಯವಸ್ಥೆಯ ವೈಫಲ್ಯ’ಕ್ಕೆ ಸಾಕ್ಷಿಯಾಗಿದೆ ಎಂದು ಅವರು ಆರೋಪಿಸಿದ್ದರು.
ಇದನ್ನೂಓದಿ:ಫುಲೆ v/s ತಿಲಕ್ | ಶಿವಾಜಿ ಸಮಾಧಿ ಇತಿಹಾಸ ತಿರುಚಿದ ಆರೆಸ್ಸೆಸ್‌ನ ಭಾಗವತ್; ತೀವ್ರ ವಿವಾದ
ಕಾನೂನುಬಾಹಿರ ಸಭೆ, ಕೊಲೆ ಯತ್ನ, ಸಾರ್ವಜನಿಕ ಸೇವಕರಿಗೆ ಅಡ್ಡಿಪಡಿಸುವುದು, ಸಾರ್ವಜನಿಕ ಆಸ್ತಿ ನಾಶ ಮತ್ತು ಭಾರತೀಯ ನ್ಯಾಯ ಸಂಹಿತೆಯ ಇತರ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬುಧವಾರ ರಾತ್ರಿ ನಡೆದ ಕಲ್ಲು ತೂರಾಟದಲ್ಲಿ ಇಬ್ಬರು ಪೊಲೀಸರು ಸೇರಿದಂತೆ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಬುಧವಾರ ಬದರಿಕೊಪ್ಪಲು ಗ್ರಾಮದ ಗಣೇಶ ಮೂರ್ತಿ ಮೆರವಣಿಗೆ ಪೂಜಾ ಸ್ಥಳಕ್ಕೆ ತಲುಪಿದಾಗ ಎರಡು ಗುಂಪುಗಳ ನಡುವೆ ವಾಗ್ವಾದ ನಡೆದಿದ್ದು, ಕೆಲ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದು, ಪರಿಸ್ಥಿತಿ ವಿಕೋಪಕ್ಕೆ ಕಾರಣವಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಎರಡು ಗುಂಪುಗಳ ನಡುವಿನ ಘರ್ಷಣೆಯ ನಂತರ, ಬುಧವಾರ ರಾತ್ರಿ ಕೆಲವು ಅಂಗಡಿಗಳನ್ನು ಧ್ವಂಸಗೊಳಿಸಲಾಗಿದ್ದು, ಸರಕುಗಳನ್ನು ಸುಟ್ಟುಹಾಕಲಾಯಿತು ಮತ್ತು ವಾಹನಗಳಿಗೆ ಬೆಂಕಿ ಹಚ್ಚಲಾಯಿತು ಎಂದು ಅವರು ಹೇಳಿದ್ದಾರೆ.
ವಿಡಿಯೊ ನೋಡಿ: ಒಕ್ಕೂಟ ವ್ಯವಸ್ಥೆ ಮಣ್ಣು ಮುಕ್ಕಿದೆ: ಗೌರಿ ನೆನಪು ಕಾರ್ಯಕ್ರಮದಲ್ಲಿ ಮೀನಾಕ್ಷಿ ಬಾಳಿ ಮಾತುಗಳು


