‘ಹಿಂದಿ ದಿವಸ’ ವಾದ ಇಂದು (ಸೆ.14) ಹಿಂದಿ ಹೇರಿಕೆ ವಿರುದ್ದ ‘ಕರಾಳ ದಿನ’ ಆಚರಿಸಲು ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕರೆ ನೀಡಿದ್ದು, ಪ್ರತಿಭಟನೆಯನ್ನೂ ಹಮ್ಮಿಕೊಂಡಿದೆ.
‘ಹಿಂದಿ ದಿವಸ’ ಎಂಬುವುದು ಅನ್ಯಭಾಷಿಕರ ಮೇಲೆ ಹಿಂದಿ ಹೇರುವ ಹುನ್ನಾರವಾಗಿದೆ. ಈ ಹಿಂದಿ ಹೇರಿಕೆ ದೇಶದ ಏಕತೆ ಮತ್ತು ಸಮಗ್ರತೆಗೆ ಧಕ್ಕೆ ಉಂಟು ಮಾಡುತ್ತಿದೆ. ಆದ್ದರಿಂದ ನಾವು ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ನಡೆಸಲಿದ್ದೇವೆ ಎಂದು ಕರವೇ ರಾಜ್ಯಾಧ್ಯಕ್ಷ ಟಿ. ಎ. ನಾರಾಯಣಗೌಡ ತಿಳಿಸಿದ್ದಾರೆ.
ಇಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನ (ಫ್ರೀಡಂ ಪಾರ್ಕ್) ದಲ್ಲಿ ಕರವೇ ವತಿಯಿಂದ ಪ್ರತಿಭಟನೆ ನಡೆಯಲಿದೆ.
ಹಿಂದಿಗೆ ಅನೈತಿಕವಾಗಿ ವಿಶೇಷ ಮನ್ನಣೆ ನೀಡುವ ಸಂವಿಧಾನದ 343ರಿಂದ 351ನೇ ವಿಧಿಗಳನ್ನು ರದ್ದುಪಡಿಸಿ, ಎಲ್ಲಾ ಭಾಷೆಗಳೂ ಒಕ್ಕೂಟದ ದೃಷ್ಟಿಯಲ್ಲಿ ಸಮಾನ ಎಂದು ಸಾರಬೇಕು ಎಂದು ಕರವೇ ಆಗ್ರಹಿಸಿದೆ.
ಕೇಂದ್ರ ಸರ್ಕಾರ ಕೂಡಲೇ ಸಂವಿಧಾನಕ್ಕೆ ತಿದ್ದುಪಡಿ ತಂದು 8ನೇ ಪರಿಚ್ಚೇದದಲ್ಲಿ ಉಲ್ಲೇಖಿಸಿರುವ ಎಲ್ಲಾ 22 ಭಾಷೆಗಳನ್ನೂ ಅಧಿಕೃತ, ಆಡಳಿತ ಭಾಷೆಗಳನ್ನಾಗಿ ಮಾಡಿ ದೇಶದ ಬಹುತ್ವ, ಸಾರ್ವಭೌಮತ್ವವನ್ನು ಕಾಪಾಡಬೇಕು ಎಂದು ಕರವೇ ನಾಯಕ ನಾರಾಯಣಗೌಡ ಒತ್ತಾಯಿಸಿದ್ದಾರೆ.
ಕರ್ನಾಟಕದಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಕೇಂದ್ರ ಸರ್ಕಾರಿ ಇಲಾಖೆಗಳು, ಉದ್ಯಮಗಳಲ್ಲಿ ಕನ್ನಡವೇ ವ್ಯವಹಾರದ ಭಾಷೆಯಾಗಬೇಕು. ಎಲ್ಲಾ ಬಗೆಯ ಪತ್ರ ವ್ಯವಹಾರ ಕನ್ನಡದಲ್ಲೇ ನಡೆಯಬೇಕು ಎಂದು ಆಗ್ರಹಿಸಿದ್ದಾರೆ.
ಇದನ್ನೂ ಓದಿ : “ನಾವೂ ತಲ್ವಾರ್ ಹಿಡಿಯುತ್ತೇವೆ”: ಪ್ರಚೋದನಕಾರಿ ಹೇಳಿಕೆ ಕೊಟ್ಟ ಪ್ರತಾಪ್ ಸಿಂಹ


