ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ (ಮುಡಾ) ದಲ್ಲಿ ನಡೆದಿದೆ ಎನ್ನಲಾದ ಅಕ್ರಮ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಮತ್ತು ಇತರರ ವಿರುದ್ದ ಲೋಕಾಯುಕ್ತ ತನಿಖೆ ನಡೆಯುತ್ತಿರುವ ನಡುವೆ, ಮುಡಾ ಅಧ್ಯಕ್ಷ ಸ್ಥಾನಕ್ಕೆ ಕೆ.ಮರೀಗೌಡ ರಾಜೀನಾಮೆ ನೀಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ವಿಕಾಸಸೌಧದಲ್ಲಿ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ದೀಪಾ ಚೋಳನ್ಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.
“ಆರೋಗ್ಯ ಸರಿಯಿಲ್ಲದ ಕಾರಣ ರಾಜೀನಾಮೆ”
ರಾಜೀನಾಮೆ ನೀಡಿದ ಬಳಿಕ ಮಾತನಾಡಿದ ಮರೀಗೌಡ ಅವರು, “ಆರೋಗ್ಯ ಸರಿಯಿಲ್ಲದ ಕಾರಣ ಸಿಎಂ ಸೂಚನೆ ಮೇರೆಗೆ ರಾಜೀನಾಮೆ ನೀಡಿದ್ದೇನೆ. ಮುಡಾ ಅಕ್ರಮದ ಬಗ್ಗೆ ತನಿಖೆ ನಡೆಯುತ್ತಿದೆ. ಅಕ್ರಮ ಆಗಿರುವ ಬಗ್ಗೆ ತನಿಖೆಯಲ್ಲಿ ಗೊತ್ತಾಗುತ್ತದೆ” ಎಂದು ಹೇಳಿದ್ದಾರೆ.
“ಸಿಎಂ ಸೇರಿದಂತೆ ಯಾವುದೇ ನಾಯಕರು ನನಗೆ ಒತ್ತಡ ಹಾಕಿಲ್ಲ. ಆರೋಗ್ಯ ಸರಿಯಿಲ್ಲದ ಕಾರಣ ರಾಜೀನಾಮೆ ನೀಡಿದ್ದೇನೆ. ಸಿದ್ದರಾಮಯ್ಯ ಜೊತೆ 40 ವರ್ಷಗಳಿಂದ ಇದ್ದೇನೆ. ನಾನೇ ಸ್ವಇಚ್ಛೆಯಿಂದ ರಾಜೀನಾಮೆ ನೀಡಿದ್ದೇನೆ” ಎಂದಿದ್ದಾರೆ.
ಇದನ್ನೂ ಓದಿ : ಮಸೀದಿ ಬಳಿ ‘ಜೈ ಶ್ರೀರಾಮ್’ ಘೋಷಣೆ ಕೂಗುವುದರಿಂದ ಧಾರ್ಮಿಕ ಭಾವನೆಗಳಿಗೆ ಘಾಸಿಯಾಗುವುದಿಲ್ಲ: ಕರ್ನಾಟಕ ಹೈಕೋರ್ಟ್


