ಬೆಂಗಳೂರಿನ ಬಾಬು ಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು 8 ಮಂದಿ ಸಾವನ್ನಪ್ಪಿದ ಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು (ಅ.24) ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತರ ಕುಟುಂಬಸ್ಥರಿಗೆ ಪರಿಹಾರ ಘೋಷಣೆ ಮಾಡಿದ್ದಾರೆ.
ವರದಿಗಳ ಪ್ರಕಾರ, ಮೃತಪಟ್ಟವರ ಕುಟುಂಬದವರಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಸಿಎಂ ಘೋಷಿಸಿದ್ದಾರೆ. ಕಾರ್ಮಿಕ ಇಲಾಖೆಯಿಂದ ತಲಾ 3 ಲಕ್ಷ ರೂ., ಬಿಬಿಎಂಪಿಯಿಂದ ತಲಾ 2 ಲಕ್ಷ ರೂ. ಪರಿಹಾರವನ್ನು ಮೃತರ ಕುಟುಂಬಸ್ಥರಿಗೆ ನೀಡಲಾಗುವುದು. ಗಾಯಗೊಂಡವರ ಚಿಕಿತ್ಸೆ ವೆಚ್ಚವನ್ನು ಸಂಪೂರ್ಣವಾಗಿ ಇಲಾಖೆಗಳಿಂದಲೇ ಭರಿಸಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.
ಈ ಕುರಿತು ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು “ನಿಯಮಬಾಹಿರವಾಗಿ, ಸೂಕ್ತ ಪರವಾನಗಿ ಪಡೆಯದೆ ಕಟ್ಟಡ ನಿರ್ಮಾಣಕ್ಕೆ ಮುಂದಾಗುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ವಿಭಾಗೀಯ ಅಧಿಕಾರಿಗೂ ನೋಟಿಸ್ ನೀಡಿ ಕ್ರಮ ಕೈಗೊಳ್ಳಬೇಕು. ಅನಧಿಕೃತ ಕಟ್ಟಡ ನಿರ್ಮಾಣ ನಿಲ್ಲಿಸುವಂತೆ ನೋಟಿಸ್ ನೀಡಿದ್ದರೂ ಕೆಲಸ ಮುಂದುವರೆಸಿದ ಮಾಲೀಕರು, ಗುತ್ತಿಗೆದಾರ, ಇಂಜಿನಿಯರ್ ಎಲ್ಲರ ವಿರುದ್ಧವೂ ಕಠಿಣ ಕಾನೂನು ಕ್ರಮ ಆಗಬೇಕು ಎಂದು ಬಿಬಿಎಂಪಿ ಆಯುಕ್ತರಾದ ತುಷಾರ ಗಿರಿನಾಥ್ ಅವರಿಗೆ ಸೂಚನೆ ನೀಡಿದ್ದೇನೆ” ಎಂದಿದ್ದಾರೆ.
ಮುಖ್ಯಮಂತ್ರಿ @siddaramaiah ಅವರು ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಕುಸಿತಗೊಂಡು ಹಲವು ಕಾರ್ಮಿಕರು ಸಾವಿಗೀಡಾದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಘಟನೆಯಲ್ಲಿ ಮಡಿದವರ ಕುಟುಂಬಕ್ಕೆ ಸಾಂತ್ವನ ಹೇಳಿದರು.
ನಿಯಮಬಾಹಿರವಾಗಿ, ಸೂಕ್ತ ಪರವಾನಗಿ ಪಡೆಯದೆ ಕಟ್ಟಡ ನಿರ್ಮಾಣಕ್ಕೆ ಮುಂದಾಗುವವರ ವಿರುದ್ಧ… pic.twitter.com/zSDMZTZOdl
— CM of Karnataka (@CMofKarnataka) October 24, 2024
“ಮುಂದೆ ಇಂತಹ ದುರ್ಘಟನೆಗಳು ನಡೆಯದ ರೀತಿಯಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದೇನೆ” ಎಂದು ಹೇಳಿದ್ದಾರೆ.
ದುರ್ಘಟನೆಯಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಭೇಟಿಮಾಡಿ ಸಿಎಂ ಆರೋಗ್ಯ ವಿಚಾರಿಸಿದ್ದಾರೆ. ಅಗತ್ಯ ಇರುವ ಎಲ್ಲಾ ಆಧುನಿಕ ವ್ಯವಸ್ಥೆ ಬಳಸಿ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚನೆ ನೀಡಿದ್ದೇನೆ ಎಂದಿದ್ದಾರೆ.
ಇದನ್ನೂ ಓದಿ : “ಪೇಜಾವರ ಶ್ರೀ ಜಾತ್ಯತೀತತೆ ಬಗ್ಗೆ ಮಾತಾಡುವುದು ಭೂತದ ಬಾಯಲ್ಲಿ ಭಗವದ್ಗೀತೆ ಕೇಳಿದಂತಿದೆ” : ಬಿ.ಕೆ ಹರಿಪ್ರಸಾದ್


