ಬೇಲೇಕೇರಿ ಬಂದರಿನಿಂದ ಅದಿರು ನಾಪತ್ತೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಮತ್ತು ಇತರರಿಗೆ ಜನಪ್ರತಿನಿಧಿಗಳ ನ್ಯಾಯಾಲಯ ವಿಧಿಸಿದ್ದ ಜೈಲು ಶಿಕ್ಷೆಯನ್ನು ಹೈಕೋರ್ಟ್ ಅಮಾನತಿನಲ್ಲಿಟ್ಟಿದ್ದು, ಜಾಮೀನು ಮಂಜೂರು ಮಾಡಿದೆ.
ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅಕ್ಟೋಬರ್ 26ರಂದು ವಿಧಿಸಿದ್ದ 7 ವರ್ಷಗಳ ಜೈಲು ಶಿಕ್ಷೆಯನ್ನು ಅಮಾನತಿನಲ್ಲಿಡಲು ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ ಇಂದು (ನ.13) ಆದೇಶ ನೀಡಿದೆ.
ಅಲ್ಲದೆ, ದಂಡದ ಮೊತ್ತದಲ್ಲಿ ಶೇ.25ರಷ್ಟು ಕೋರ್ಟ್‌ನಲ್ಲಿ ಠೇವಣಿ ಇಡುವಂತೆ ಷರತ್ತು ವಿಧಿಸಿರುವ ಹೈಕೋರ್ಟ್, 6 ವಾರದಲ್ಲಿ ಠೇವಣಿ ಇಡುವಂತೆ ಸೂಚಿಸಿದೆ. ನಾಳೆ ಅಪರಾಧಿಗಳು ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.
ಬೇಲೆಕೇರಿ ಬಂದರಿನಲ್ಲಿದ್ದ ಅದಿರು ನಾಪತ್ತೆ ಪ್ರಕರಣದ ವಿಚಾರಣೆ ನಡೆಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಒಟ್ಟು ಆರು ಪ್ರಕರಣಗಳಲ್ಲಿ ಶಿಕ್ಷೆ ಘೋಷಣೆ ಮಾಡಿತ್ತು. ಅಲ್ಲದೆ, 44 ಕೋಟಿ ರೂಪಾಯಿಗೂ ಅಧಿಕ ದಂಡ ವಿಧಿಸಿತ್ತು.
ಇದರ ವಿರುದ್ದ ಸತೀಶ್ ಸೈಲ್ ಮತ್ತು ಇತರರು ಹೈಕೋರ್ಟ್ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಎಲ್ಲರಿಗೂ ಜಾಮೀನು ಮಂಜೂರು ಮಾಡಿ, ಶಿಕ್ಷೆ ಅಮಾನತ್ತಿನಲ್ಲಿಟ್ಟಿದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ | ವಾಲ್ಮೀಕಿ ನಿಗಮ ಹಗರಣ : ಸಿಬಿಐ ತನಿಖೆಗೆ ಕೋರಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್


