ಉತ್ತರ ಪ್ರದೇಶದ ಝಾನ್ಸಿಯ ಮಹಾರಾಣಿ ಲಕ್ಷ್ಮೀಬಾಯಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಶುಕ್ರವಾರ (ನ.15) ತಡರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ 10 ನವಜಾತ ಶಿಶುಗಳು ಸಜೀವ ದಹನವಾಗಿದ್ದು, 16 ಶಿಶುಗಳು ಗಂಭೀರ ಸ್ಥಿತಿಯಲ್ಲಿವೆ ಎಂದು ವರದಿಯಾಗಿದೆ.
ರಾತ್ರಿ 10.45ರ ಸುಮಾರಿಗೆ ನವಜಾತ ಶಿಶುಗಳ ತೀವ್ರ ನಿಗಾ ಘಟಕ (ಎನ್‌ಐಸಿಯು) ದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ದುರಂತದ ವೇಳೆ 37 ಶಿಶುಗಳನ್ನು ರಕ್ಷಿಸಲಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಜಿಲ್ಲಾಧಿಕಾರಿ ಅವಿನಾಶ್ ಕುಮಾರ್ ಹೇಳಿದ್ದಾರೆ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದೆ. ಈ ಕುರಿತು ತನಿಖೆ ನಡೆಸಲು ಸಮಿತಿ ರಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಇಂದು (ನ.16) ಮುಂಜಾನೆ ಮಾಧ್ಯಮಗಳ ಜೊತೆ ಮಾತನಾಡಿರುವ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಸುಧಾ ಸಿಂಗ್, “ಗಾಯಗೊಂಡಿರುವ 16 ಮಕ್ಕಳ ಜೀವ ಉಳಿಸುವ ಪ್ರಯತ್ನ ನಡೆಯುತ್ತಿದೆ. ಎಲ್ಲಾ ತಜ್ಞ ವೈದ್ಯರು ಅತ್ಯಗತ್ಯ ವೈದ್ಯಕೀಯ ಸೌಲಭ್ಯಗಳೊಂದಿಗೆ ಮಕ್ಕಳ ಶುಶ್ರೂಷೆಯಲ್ಲಿ ತೊಡಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಬೆಂಕಿ ಅವಘಡದಲ್ಲಿ ಮಕ್ಕಳನ್ನು ಕಳೆದುಕೊಂಡಿರುವ ಪೋಷಕರಿಗೆ ಪ್ರಧಾನಿ ನರೇಂದ್ರ ಮೋದಿ ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ಸಾಂತ್ವನ ಹೇಳಿದ್ದಾರೆ. ಮೃತ ಮಕ್ಕಳ ಕುಟುಂಬಕ್ಕೆ ಕೇಂದ್ರ ಸರ್ಕಾರದಿಂದ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ರಾಜ್ಯ ಸರ್ಕಾರದ ಮೇಲ್ವಿಚಾರಣೆಯಲ್ಲಿ ಸ್ಥಳೀಯ ಆಡಳಿತವು ಪರಿಹಾರ ಮತ್ತು ರಕ್ಷಣೆಗಾಗಿ ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಹೇಳಿದ್ದಾರೆ.
हृदयविदारक! उत्तर प्रदेश में झांसी के मेडिकल कॉलेज में आग लगने से हुआ हादसा मन को व्यथित करने वाला है। इसमें जिन्होंने अपने मासूम बच्चों को खो दिया है, उनके प्रति मेरी गहरी शोक-संवेदनाएं। ईश्वर से प्रार्थना है कि उन्हें इस अपार दुख को सहने की शक्ति प्रदान करे। राज्य सरकार की…
— PMO India (@PMOIndia) November 16, 2024
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್ ಅವರು ಕೂಡ ಮಕ್ಕಳ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ದುರಂತದಲ್ಲಿ ಸಾವನ್ನಪ್ಪಿದ ನವಜಾತ ಶಿಶುಗಳ ಪೋಷಕರಿಗೆ ತಲಾ 5 ಲಕ್ಷ ರೂಪಾಯಿ ಹಾಗೂ ಗಾಯಗೊಂಡ ಮಕ್ಕಳ ಕುಟುಂಬಕ್ಕೆ ತಲಾ 50 ಸಾವಿರ ರೂ. ಪರಿಹಾರವನ್ನು ಸಿಎಂ ಪರಿಹಾರ ನಿಧಿಯಿಂದ ಘೋಷಣೆ ಮಾಡಲಾಗಿದೆ.
जनपद झांसी स्थित मेडिकल कॉलेज के NICU में घटित एक दुर्घटना में हुई बच्चों की मृत्यु अत्यंत दुःखद एवं हृदयविदारक है।
जिला प्रशासन तथा संबंधित अधिकारियों को युद्ध स्तर पर राहत एवं बचाव कार्यों को संचालित कराने के निर्देश दिए हैं।
प्रभु श्री राम से प्रार्थना है कि दिवंगत आत्माओं…
— Yogi Adityanath (@myogiadityanath) November 15, 2024
ಘಟನೆ ಕುರಿತು 12 ಗಂಟೆಗಳ ಒಳಗೆ ವರದಿ ಸಲ್ಲಿಸುವಂತೆ ಝಾನ್ಸಿಯ ವಿಭಾಗೀಯ ಆಯುಕ್ತ ಮತ್ತು ಡಿಐಜಿಗೆ ಮುಖ್ಯಮಂತ್ರಿ ಸೂಚಿಸಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ : ಮಣಿಪುರದಲ್ಲಿ ತೀವ್ರಗೊಂಡ ಹಿಂಸಾಚಾರ | ಆರು ಮಂದಿಯ ಅಪಹರಣ : ಮೂವರ ಶವ ಪತ್ತೆ


