ಥಾಣೆ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಖಾಸಗಿ ಶಾಲೆಯೊಂದರಲ್ಲಿ ಅಪರಿಚಿತ ವ್ಯಕ್ತಿಯೊಬ್ಬ 10 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಕುರಿತು ಪೊಲೀಸರಿಗೆ ಮಾಹಿತಿ ನೀಡದ ಆರೋಪದ ಮೇಲೆ ಶಾಲೆಯ ಮುಖ್ಯೋಪಾಧ್ಯಾಯಿನಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮುಂಬ್ರಾ ಪ್ರದೇಶದ ಶಾಲೆಯಲ್ಲಿ ಈ ಘಟನೆ ನಡೆದಿದೆ . 5 ನೇ ತರಗತಿಯ ಸಂತ್ರಸ್ತ ವಿದ್ಯಾರ್ಥಿನಿಯು ತನ್ನ ತರಗತಿಯಲ್ಲಿ ಒಬ್ಬಂಟಿಯಾಗಿದ್ದಾಗ, ನೀಲಿ ಟಿ-ಶರ್ಟ್ ಧರಿಸಿದ್ದ ವ್ಯಕ್ತಿ ಅಲ್ಲಿಗೆ ಬಂದು ಬಾಲಕಿಗೆ ಕಿರುಕುಳ ನೀಡಿದ್ದಾನೆ ಎಂದು ಮುಂಬ್ರಾ ಪೊಲೀಸ್ ಠಾಣೆಯ ಅಧಿಕಾರಿ ಮಾಹಿತಿ ನೀಡಿದ್ದಾರೆ.
ಬಾಲಕಿಯು ಭಯದಿಂದ ಕೂಗಿದಾಗ ಆ ವ್ಯಕ್ತಿಯು ಅಲ್ಲಿಂದ ಹೊರಟು ಹೋದನು. ಈ ಕುರಿತು ಗದ್ದಲವಾದಾಗ ಮುಖ್ಯೋಪಾಧ್ಯಾಯಿನಿಯು ಅಲ್ಲಿಗೆ ಬಂದು ಘಟನೆ ಕುರಿತು ಸಂತ್ರಸ್ತ ವಿದ್ಯಾರ್ಥಿನಿಯನ್ನು ವಿಚಾರಿಸಿದರು ಎಂದು ಪೊಲೀಸರು ಹೇಳಿದ್ದಾರೆ.
ಈ ಕುರಿತು ಬಾಲಕಿಯು ತನ್ನ ಹೆತ್ತವರಿಗೆ ಮಾಹಿತಿ ನೀಡಿದಾಗ, ಅವರು ದುಷ್ಕರ್ಮಿ ಮತ್ತು ಮುಖ್ಯೋಪಾಧ್ಯಾಯಿನಿ ವಿರುದ್ಧ ಪೊಲೀಸ್ ದೂರು ನೀಡಿದರು. ಈ ಘಟನೆ ಬಗ್ಗೆ ವರದಿ ನೀಡದ ಮುಖ್ಯೋಪಾಧ್ಯಾಯಿನಿಯನ್ನು ಈ ದೂರಿನ ಆಧಾರದ ಮೇಲೆ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


