ಮುಡಾ ಪ್ರಕರಣದಲ್ಲಿ ಏಕಸದಸ್ಯ ಪೀಠದ ತೀರ್ಪು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪ್ರತ್ಯೇಕ ಪ್ರಕರಣಗಳಲ್ಲಿ ಮತ್ತಿತರರು ಸಲ್ಲಿಸಿರುವ ಮೇಲ್ಮನವಿಗಳಿಗೆ ಸಂಬಂಧಿಸಿದಂತೆ ರಾಜ್ಯಪಾಲರು ಸೇರಿದಂತೆ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಇಂದು (ಡಿ.5) ಆದೇಶಿಸಿದೆ.
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ರಾಜ್ಯಪಾಲರು ಅನುಮತಿಸಿರುವುದನ್ನು ಎತ್ತಿ ಹಿಡಿದಿದ್ದ ಏಕಸದಸ್ಯ ಪೀಠದ ಆದೇಶದ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಮೇಲ್ಮನವಿ, ಭೂ ಮಾಲೀಕ ಜೆ ದೇವರಾಜು ಸಲ್ಲಿಸಿರುವ ಮೇಲ್ಮನವಿ ಹಾಗೂ ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಕೋರಿರುವುದಕ್ಕೆ ಆಕ್ಷೇಪಿಸಿ ಸಲ್ಲಿಸಿರುವ ಮೇಲ್ಮನವಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎನ್. ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ. ವಿ ಅರವಿಂದ್ ಅವರ ವಿಭಾಗೀಯ ಪೀಠ ಇಂದು ನಡೆಸಿದೆ. ರಾಜ್ಯಪಾಲರು ಸೇರಿದಂತೆ ಎಲ್ಲಾ ಪ್ರತಿವಾದಿಗಳಿಗೆ ಈ ಪ್ರಕರಣಗಳಲ್ಲಿ ನೋಟಿಸ್ ಜಾರಿ ಮಾಡಿದೆ.
ಆಪಾದಿತ ಮುಡಾ ನಿವೇಶನ ಹಂಚಿಕೆ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ತನಿಖೆ ನಡೆಸಲು ರಾಜ್ಯಪಾಲರು ಅನುಮತಿ ನೀಡಿರುವುದನ್ನು ಹೈಕೋರ್ಟ್ ಏಕಸದಸ್ಯ ಪೀಠ ಎತ್ತಿ ಹಿಡಿದಿತ್ತು. ಅದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿರುವ ಮೇಲ್ಮನವಿಯನ್ನು ಹೈಕೋರ್ಟ್ ಇಂದು ವಿಚಾರಣೆ ನಡೆಸಿತು.
ಸಿಎಂ ಸಿದ್ದರಾಮಯ್ಯನವರ ವಿರುದ್ಧ ತನಿಖೆಗೆ ಅನುಮತಿ ನೀಡಿದ್ದ ರಾಜ್ಯಪಾಲರ ಅಧಿಕಾರ ವ್ಯಾಪ್ತಿಯನ್ನು ರಾಜ್ಯ ಸರ್ಕಾರವು ತನ್ನ ಮೇಲ್ಮನವಿಯಲ್ಲಿ ಪ್ರಮುಖವಾಗಿ ಪ್ರಶ್ನಿಸಿದೆ.
ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಕಪಿಲ್ ಸಿಬಲ್ “ಈ ಪ್ರಕರಣದಲ್ಲಿ ತನಿಖೆಗೆ ಅನುಮತಿಸುವ ಸಕ್ಷಮ ಪ್ರಾಧಿಕಾರದ ವಿಚಾರವು ಮಹತ್ವದ ಸಾಂವಿಧಾನಿಕ ವಿಚಾರವಾಗಿದೆ. ಇದು ಯಾವುದೇ ಪಕ್ಷದ ಮುಖ್ಯಮಂತ್ರಿ, ಮಂತ್ರಿಗೆ ಸಂಬಂಧಿಸಿದ್ದಲ್ಲ. ಈ ರೀತಿ ಮುಖ್ಯಮಂತ್ರಿ, ಸಚಿವರ ವಿರುದ್ಧ ತನಿಖೆಗೆ ಅನುಮತಿಸುತ್ತಾ ಹೋದರೆ ಅರಾಜಕತೆ ಸೃಷ್ಟಿಯಾಗಲಿದೆ. ಇದು ನಮ್ಮ ದೇಶದ ರಾಜ್ಯಾಡಳಿತಕ್ಕೆ ಸಂಬಂಧಿಸಿದ್ದಾಗಿದೆ. ಇಲ್ಲಿ ಬಹುಮುಖ್ಯವಾದ ಸಾಂವಿಧಾನಿಕ ವಿಚಾರಗಳು ಅಡಕವಾಗಿವೆ. ಭ್ರಷ್ಟಾಚಾರ ಪ್ರತಿಬಂಧಕ ಕಾಯಿದೆ ಸೆಕ್ಷನ್ 17ಎ ಅಡಿ ಮುಖ್ಯಮಂತ್ರಿಯ ವಿರುದ್ಧ ತನಿಖೆಗೆ ಅನುಮತಿಸಲು ರಾಜ್ಯಪಾಲರಿಗೆ ವ್ಯಾಪ್ತಿಯೇ ಇಲ್ಲ” ಎಂದು ವಿವರಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಡಾ. ಅಭಿಷೇಕ್ ಮನು ಸಿಂಘ್ವಿ ಅವರು “ರಾಜ್ಯಪಾಲರ ಅನುಮತಿಯನ್ನು ಎತ್ತಿ ಹಿಡಿಯುವ ಮೂಲಕ ಏಕಸದಸ್ಯ ಪೀಠ ಪ್ರಮಾದ ಎಸಗಿದೆ” ಎಂದು ವಿವರಿಸಲು ಮುಂದಾದರು. ಆದರೆ ಇದಕ್ಕೆ ಪೀಠವು ಅನುಮತಿಸಲಿಲ್ಲ ಎಂದು ತಿಳಿದು ಬಂದಿದೆ.
ನ್ಯಾಯಾಲಯ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲರಾದ ಡಾ. ಅಭಿಷೇಕ ಮನುಸಿಂಘ್ವಿ ಮತ್ತು ಪ್ರೊ. ರವಿವರ್ಮ ಕುಮಾರ್, ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ವಕೀಲ ಕಪಿಲ್ ಸಿಬಲ್ ಮತ್ತು ಅಡ್ವೊಕೇಟ್ ಜನರಲ್ ಕೆ ಶಶಿಕಿರಣ್ ಶೆಟ್ಟಿ, ಜೆ ದೇವರಾಜು ಅವರನ್ನು ಪ್ರತಿನಿಧಿಸಿದ್ದ ದುಷ್ಯಂತ್ ದವೆ, ದೂರುದಾರ ಸ್ನೇಹಮಯಿ ಕೃಷ್ಣ ಅವರನ್ನು ಪ್ರತಿನಿಧಿಸಿದ್ದ ವಕೀಲರಾದ ಕೆ ಜಿ ರಾಘವನ್ ಮತ್ತು ಮಣೀಂದರ್ ಸಿಂಗ್ ಅವರ ವಾದ-ಪ್ರತಿವಾದಗಳನ್ನು ಆಲಿಸಿತು.
ಸಿಎಂ ಸಿದ್ದರಾಮಯ್ಯ ಮತ್ತು ಜೆ ದೇವರಾಜು ಅವರು ಸಲ್ಲಿಸಿರುವ ಪ್ರತ್ಯೇಕ ಮೇಲ್ಮನವಿಗಳಿಗೆ ಸಂಬಂಧಿಸಿದಂತೆ ರಾಜ್ಯಪಾಲ (ರಾಜ್ಯಪಾಲರ ವಿಶೇಷ ಕಾರ್ಯದರ್ಶಿ), ದೂರುದಾರರಾದ ಟಿ ಜೆ ಅಬ್ರಹಾಂ, ಸ್ನೇಹಮಯಿ ಕೃಷ್ಣ ಮತ್ತು ಎಸ್.ಪಿ ಪ್ರದೀಪ್ ಕುಮಾರ್ ಅವರಿಗೆ ನೋಟಿಸ್ ಜಾರಿ ಮಾಡಿತು.
ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಕೋರಿ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಅರ್ಜಿಯಲ್ಲಿ ನೋಟಿಸ್ ಆಗಿರುವುದನ್ನು ಪ್ರಶ್ನಿಸಿ ಜೆ ದೇವರಾಜು ಸಲ್ಲಿಸಿರುವ ಮತ್ತೊಂದು ಮೇಲ್ಮನವಿಯಲ್ಲಿ, ಸ್ನೇಹಮಯಿ ಕೃಷ್ಣ, ಕೇಂದ್ರ ಗೃಹ ಇಲಾಖೆ, ಸಿಬಿಐ, ಲೋಕಾಯುಕ್ತ, ರಾಜ್ಯ ಪೊಲೀಸ್ ಮಹಾನಿರ್ದೇಶಕರು, ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಬಿ.ಎಂ ಪಾರ್ವತಿ, ಸಹೋದರ ಬಿ.ಎಂ ಮಲ್ಲಿಕಾರ್ಜುನ ಸ್ವಾಮಿ ಅವರಿಗೆ ನ್ಯಾಯಾಲಯ ನೋಟಿಸ್ ಜಾರಿ ಮಾಡಿದೆ. ವಿಚಾರಣೆಯನ್ನು 2025ರ ಜನವರಿ 25ಕ್ಕೆ ಮುಂದೂಡಿದೆ.
ಇದನ್ನೂ ಓದಿ : ಮುಡಾ ಪ್ರಕರಣ | ಕಿಡಿ ಹಚ್ಚಿಸಿದ ಇಡಿ ಪತ್ರ : ಮತ್ತೆ ಶುರುವಾದ ವಾಕ್ಸಮರ


