ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಅಕ್ರಮ ಕಚ್ಚಾ ಬಾಂಬ್‌ಗಳನ್ನು ತಯಾರಿಸುತ್ತಿದ್ದಾಗ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದು, ಕೆಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಸಾಗರಪಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಖೊಯೆರ್ತಲಾ ಗ್ರಾಮದಲ್ಲಿ ಭಾನುವಾರ ತಡರಾತ್ರಿ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ.
ಮೃತ ಮೂವರನ್ನು ಸಕಿರುಲ್ ಸರ್ಕಾರ್ (32), ಮಾಮನ್ ಮೊಲ್ಲಾ (30) ಮತ್ತು ಮುಸ್ತಾಕಿನ್ ಶೇಖ್ (28) ಎಂದು ಗುರುತಿಸಲಾಗಿದ್ದು, ಗಾಯಗೊಂಡವರು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
“ಕಚ್ಚಾ ಬಾಂಬ್ ತಯಾರಿಸುತ್ತಿದ್ದ ಮಾಮನ್ ಮನೆಯಲ್ಲಿ ಸ್ಫೋಟ ಸಂಭವಿಸಿದೆ. ಸ್ಫೋಟದಲ್ಲಿ ಮನೆಯ ಮೇಲ್ಛಾವಣಿ ಹಾರಿಹೋಗಿದೆ. ನಾವು ಈ ಬಗ್ಗೆ ತನಿಖೆ ನಡೆಸುತ್ತಿದ್ದೇವೆ” ಎಂದು ಪೊಲೀಸ್ ಅಧಿಕಾರಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಮೃತ ಮೂವರು ಇತ್ತೀಚೆಗೆ ಫೆನ್ಸೆಡಿಲ್ ಕಳ್ಳಸಾಗಣೆಯಲ್ಲಿ ತೊಡಗಿರುವುದು ಕಂಡುಬಂದಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಸ್ಥಳೀಯರು ಮಾಮೊನ್ ಮೊಲ್ಲಾ ಮತ್ತು ಸಕಿರುಲ್ ಸರ್ಕಾರ್ ಅವರನ್ನು ಮುರ್ಷಿದಾಬಾದ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಕರೆದೊಯ್ಯಲು ಪ್ರಯತ್ನಿಸಿದರು. ಆದರೆ, ಇಬ್ಬರೂ ದಾರಿ ಮಧ್ಯೆ ಮೃತಪಟ್ಟರು ಎಂದು ಅವರು ಹೇಳಿದರು.
ಸ್ಫೋಟದ ಸ್ಥಳದಲ್ಲಿ ಬಾಂಬ್ ಸ್ಕ್ವಾಡ್ ತನಿಖೆ ನಡೆಸುತ್ತಿರುವಾಗ ಈ ಪ್ರದೇಶದಲ್ಲಿ ಭಾರಿ ಪೊಲೀಸ್ ತಂಡವನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಇದನ್ನೂ ಓದಿ; ದೆಹಲಿಯ 40 ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ; ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಿದ ಶಿಕ್ಷಕರು


