Homeಕರ್ನಾಟಕಚಂದ್ರಬಾಬು ನಾಯ್ಡು ಭಾರತದ ಅತ್ಯಂತ ಶ್ರೀಮಂತ ಸಿಎಂ : ಸಿದ್ದರಾಮಯ್ಯ ಅವರಿಗೆ ಎಷ್ಟನೇ ಸ್ಥಾನ?

ಚಂದ್ರಬಾಬು ನಾಯ್ಡು ಭಾರತದ ಅತ್ಯಂತ ಶ್ರೀಮಂತ ಸಿಎಂ : ಸಿದ್ದರಾಮಯ್ಯ ಅವರಿಗೆ ಎಷ್ಟನೇ ಸ್ಥಾನ?

- Advertisement -
- Advertisement -

ಆಂಧ್ರ ಪ್ರದೇಶದ ಎನ್. ಚಂದ್ರಬಾಬು ನಾಯ್ಡು ಅವರು 931 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಹೊಂದಿರುವ ಭಾರತದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ. ತೆಲಂಗಾಣದ ಎ.ರೇವಂತ್ ರೆಡ್ಡಿ ಅವರು ಅತಿ ಹೆಚ್ಚು ಕ್ರಿಮಿನಲ್ ಪ್ರಕರಣಗಳನ್ನು ಹೊಂದಿರುವ ಮುಖ್ಯಮಂತ್ರಿ ಎಂದು ಅಸೋಸಿಯೇಶನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಮತ್ತು ನ್ಯಾಷನಲ್ ಎಲೆಕ್ಷನ್ ವಾಚ್ (ಎನ್‌ಇಡಬ್ಲ್ಯು) ವರದಿಗಳು ಹೇಳಿವೆ.

ಸೋಮವಾರ (ಡಿ.30) ಬಿಡುಗಡೆಯಾದ ವರದಿಯಲ್ಲಿ ಭಾರತದ 31 ರಾಜ್ಯಗಳ ಹಾಲಿ ಮುಖ್ಯಮಂತ್ರಿಗಳು ಚುನಾವಣೆಗೆ ಸ್ಪರ್ಧಿಸುವ ವೇಳೆ ಅಫಿಡವಿಟ್‌ನಲ್ಲಿ ಸ್ವಯಂ ಘೋಷಿಸಿಕೊಂಡಿರುವ ಆಸ್ತಿ ವಿವರಗಳನ್ನು ವಿಶ್ಲೇಷಿಸಲಾಗಿದೆ. ಇದರಲ್ಲಿ ಮುಖ್ಯಮಂತ್ರಿಗಳ ಸಂಗಾತಿ ಮತ್ತು ಅವಲಂಬಿತರ ಹೆಸರಿನಲ್ಲಿ ಘೋಷಿಸಿರುವ ಆಸ್ತಿಗಳೂ ಸೇರಿವೆ.

ಚಂದ್ರಬಾಬು ನಾಯ್ಡು ಅವರು 931 ಕೋಟಿ ರೂ. ಘೋಷಿತ ಆಸ್ತಿಯ ಮೂಲಕ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಎನಿಸಿಕೊಂಡರೆ, ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಅವರು ಕೇವಲ 15 ಲಕ್ಷ ರೂ. ಘೋಷಿತ ಆಸ್ತಿಯೊಂದಿಗೆ ಅತಿ ಕಡಿಮೆ ಆಸ್ತಿ ಹೊಂದಿರುವ ಸಿಎಂ ಆಗಿ ಗುರುತಿಸಿಕೊಂಡಿದ್ದಾರೆ.

ಚಂದ್ರಬಾಬು ನಾಯ್ಡು ಅವರು ಘೋಷಿಸಿಕೊಂಡಿರುವ 931 ಕೋಟಿ ರೂ. ಮೌಲ್ಯದ ಆಸ್ತಿಯಲ್ಲಿ 895 ಕೋಟಿ ರೂ. ಮೌಲ್ಯದ ಆಸ್ತಿ ನಾಯ್ಡು ಅವರ ಪತ್ನಿ, ಹೆರಿಟೇಜ್ ಫುಡ್ಸ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕಿಯೂ ಆಗಿರುವ ನಾರಾ ಭುವನೇಶ್ವರಿ ಅವರ ಹೆಸರಿನಲ್ಲಿದೆ. ಹೆರಿಟೇಜ್ ಫುಡ್ಸ್ ಲಿಮಿಟೆಡ್‌ನಲ್ಲಿ ಭುವನೇಶ್ವರಿ ಅವರದ್ದು 764 ಕೋಟಿ ರೂ. ಮೌಲ್ಯದ ಷೇರುಗಳಿವೆ. ಇನ್ನುಳಿದಂತೆ ಸೆರಿಲಿಂಗಂಪಲ್ಲಿಯಲ್ಲಿ ಅವರು 55 ಕೋಟಿ ರೂ. ಮೌಲ್ಯದ ಕೃಷಿ ಭೂಮಿಯನ್ನು ಹೊಂದಿದ್ದಾರೆ.

ಅರುಣಾಚಲ ಪ್ರದೇಶದ ಸಿಎಂ ಹಾಗೂ ಬಿಜೆಪಿ ನಾಯಕ ಪೆಮಾ ಖಂಡು ಅವರು 332 ಕೋಟಿ ರೂ. ಮೌಲ್ಯದ ಘೋಷಿತ ಆಸ್ತಿಯೊಂದಿಗೆ ಶ್ರೀಮಂತ ಸಿಎಂಗಳ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಚಂದ್ರಬಾಬು ನಾಯ್ಡು ಮತ್ತು ಪೆಮಾ ಖಂಡು ಮಾತ್ರ ಈ ಪಟ್ಟಿಯಲ್ಲಿರುವ ಬಿಲಿಯನೇರ್ ಸಿಎಂಗಳಾಗಿದ್ದಾರೆ.

ಕರ್ನಾಟಕದ ಸಿಎಂ ಸಿದ್ದರಾಮಯ್ಯ ಅವರು 51 ಕೋಟಿ ರೂ. ಮೌಲ್ಯದ ಘೋಷಿತ ಆಸ್ತಿಯೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ. ತೆಲಂಗಾಣ ಸಿಎಂ ರೇವಂತ್ ರೆಡ್ಡಿ 30 ಕೋಟಿ ರೂ. ಮೌಲ್ಯದ ಆಸ್ತಿಯೊಂದಿಗೆ ಏಳನೇ ಶ್ರೀಮಂತರಾಗಿದ್ದಾರೆ. ಕೇವಲ 8 ಕೋಟಿ ರೂ. ಘೋಷಿತ ಆಸ್ತಿಯೊಂದಿಗೆ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ 14ನೇ ಸ್ಥಾನ ಪಡೆದಿದ್ದಾರೆ. ಕೇರಳ ಸಿಎಂ ಪಿಣರಾಯಿ ವಿಜಯನ್‌ ಸುಮಾರು 1 ಕೋಟಿ ರೂ. ಮೌಲ್ಯದ ಘೋಷಿತ ಆಸ್ತಿಯೊಂದಿಗೆ ಪಟ್ಟಿಯಲ್ಲಿ ಕೆಳಗಡೆಯಿಂದ ಮೂರನೇ ಸ್ಥಾನದಲ್ಲಿದ್ದಾರೆ.

31 ಮುಖ್ಯಮಂತ್ರಿಗಳ ಒಟ್ಟು ಘೋಷಿತ ಆಸ್ತಿ ಮೌಲ್ಯ 1,630 ಕೋಟಿ ರೂ. ಇದ್ದು, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳ ಸರಾಸರಿ ಆಸ್ತಿ ಮೌಲ್ಯ 52.59 ಕೋಟಿ ರೂ. ಇದೆ.

2023-2024ರಲ್ಲಿ ಭಾರತದ ತಲಾ ನಿವ್ವಳ ರಾಷ್ಟ್ರೀಯ ಆದಾಯ ಅಥವಾ ಎನ್‌ಎನ್‌ಐ ಸರಿ ಸುಮಾರು ರೂ 1,85,854 ಆಗಿದ್ದರೆ, ಮುಖ್ಯಮಂತ್ರಿಗಳ ಸರಾಸರಿ ಸ್ವಯಂ ಆದಾಯವು ರೂ. 13,64,310 ಆಗಿದೆ. ಇದು ಭಾರತದ ಸರಾಸರಿ ತಲಾ ಆದಾಯದ 7.3 ಪಟ್ಟು ಹೆಚ್ಚು ಎಂದು ವರದಿ ಹೇಳಿದೆ.

ಅರುಣಾಚಲ ಸಿಎಂ ಪೆಮಾ ಖಂಡು ಅವರು ಅತಿ ಹೆಚ್ಚು ಸಾಲ ಹೊಂದಿರುವ ಮುಖ್ಯಮಂತ್ರಿ ಎನಿಸಿಕೊಂಡಿದ್ದಾರೆ. ಅವರ ಸಾಲದ ಮೊತ್ತ 180 ಕೋಟಿ ರೂ. ಇದೆ. ಖಂಡು ಬಳಿಕ 23 ಕೋಟಿ ರೂ. ಸಾಲದೊಂದಿಗೆ ಸಿದ್ದರಾಮಯ್ಯ ಎರಡನೇ ಸ್ಥಾನದಲ್ಲಿದ್ದು, ಚಂದ್ರಬಾಬು ನಾಯ್ಡು ಅವರು 10 ಕೋಟಿ ರೂ. ಸಾಲದಲ್ಲಿದ್ದಾರೆ.

ರೂ. 55 ಲಕ್ಷ ಮೌಲ್ಯದ ಘೋಷಿತ ಆಸ್ತಿ ಹೊಂದಿರುವ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಉಮರ್ ಅಬ್ದುಲ್ಲಾ ಶ್ರೀಮಂತ ಸಿಎಂಗಳ ಪಟ್ಟಿಯಲ್ಲಿ ಕೊನೆಯಿಂದ ಎರಡನೇ ಸ್ಥಾನದಲ್ಲಿದ್ದಾರೆ.

ವರದಿಯ ಪ್ರಕಾರ, 31 ಮುಖ್ಯಮಂತ್ರಿಗಳ ಪೈಕಿ 13 ಮಂದಿ ತಮ್ಮ ವಿರುದ್ಧದ ಕ್ರಿಮಿನಲ್ ಪ್ರಕರಣಗಳನ್ನು ಘೋಷಿಸಿದ್ದಾರೆ. ಈ ಪೈಕಿ 10 ಸಿಎಂಗಳು ಕೊಲೆಯತ್ನ, ಅಪಹರಣ, ಲಂಚ, ಕ್ರಿಮಿನಲ್ ಬೆದರಿಕೆ ಇತ್ಯಾದಿ ಸೇರಿದಂತೆ ಗಂಭೀರ ಕ್ರಿಮಿನಲ್ ಪ್ರಕರಣಗಳನ್ನು ಘೋಷಿಸಿದ್ದಾರೆ.

ತೆಲಂಗಾಣದ ಸಿಎಂ ರೇವಂತ್ ರೆಡ್ಡಿ ವಿರುದ್ಧ ಬರೋಬ್ಬರಿ 89 ಪ್ರಕರಣಗಳಿವೆ. ವರದಿಯ ಪ್ರಕಾರ, ಈ ಪೈಕಿ 72 ಪ್ರಕರಣಗಳು ಗಂಭೀರ ಸ್ವರೂಪದ್ದಾಗಿವೆ.

ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಅವರು 11 ಗಂಭೀರ ಐಪಿಸಿ ಪ್ರಕರಣಗಳು ಸೇರಿದಂತೆ 47 ಪ್ರಕರಣಗಳೊಂದಿಗೆ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಚಂದ್ರಬಾಬು ನಾಯ್ಡು ಅವರ ವಿರುದ್ಧ 19 ಕ್ರಿಮಿನಲ್ ಪ್ರಕರಣಗಳಿವೆ.

31 ಮುಖ್ಯಮಂತ್ರಿಗಳ ಪಟ್ಟಿಯಲ್ಲಿ ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಮತ್ತು ದೆಹಲಿಯ ಅತಿಶಿ ಇವರಿಬ್ಬರು ಮಾತ್ರ ಮಹಿಳೆಯರು.

ವಯೋಮಾನದ ಆಧಾರದಲ್ಲಿ ಮಾಡಿದ ವಿಶ್ಲೇಷಣೆ ಪ್ರಕಾರ, 12 ಮುಖ್ಯಮಂತ್ರಿಗಳು 51-60 ವಯಸ್ಸಿನವರಿದ್ದಾರೆ. ಏಳು ಮಂದಿ 41 ರಿಂದ 50 ವರ್ಷದೊಳಗಿನವರು. ಆರು ಮಂದಿ 71-80ರ ವಯೋಮಾನದವರು ಮತ್ತು ಐವರು 61-70ರ ವಯೋಮಾನದವರು. ಒಬ್ಬರು ಮಾತ್ರ 31-40 ವಯೋಮಾನದವರಿದ್ದಾರೆ.

ಶಿಕ್ಷಣದ ಆಧಾರದಲ್ಲಿ ಮಾಡಿದ ವಿಶ್ಲೇಷಣೆ ಪ್ರಕಾರ, 10 ಮುಖ್ಯಮಂತ್ರಿಗಳು ಪದವೀಧರರು ಮತ್ತು ಒಂಬತ್ತು ಮಂದಿ ಸ್ನಾತಕೋತ್ತರ ಪದವೀಧರಿದ್ದಾರೆ. ಒಬ್ಬರು ಸಿಎಂ 10ನೇ ತರಗತಿ ಪಾಸಾಗಿದ್ದರೆ, ಮೂವರು 12ನೇ ತರಗತಿ ಪಾಸ್ ಆದವರಿದ್ದಾರೆ.

ಇದನ್ನೂ ಓದಿ : ಮಧ್ಯಪ್ರದೇಶ ಪೊಲೀಸ್ ಠಾಣೆಯಲ್ಲಿ ದಲಿತ ಯುವಕ ಸಾವು – ಬಿಜೆಪಿ ಸರ್ಕಾರದ ವಿರುದ್ಧ ರಾಹುಲ್, ಪ್ರಿಯಾಂಕಾ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...