ಆರಾಧನಾ ಸ್ಥಳಗಳ (ವಿಶೇಷ ನಿಬಂಧನೆಗಳು) ಕಾಯ್ದೆ-1991ರ ಪರಿಣಾಮಕಾರಿ ಅನುಷ್ಠಾನ ಕೋರಿ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್-ಮುಸ್ಲಿಮೀನ್ (ಎಐಎಂಐಎಂ) ಪಕ್ಷದ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಗುರುವಾರ (ಜ.2) ಒಪ್ಪಿದೆ.
ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಪಿವಿ ಸಂಜಯ್ ಕುಮಾರ್ ಅವರ ಪೀಠವು ಜಮಿಯತ್ ಉಲಮಾ-ಎ-ಹಿಂದ್ ಸಲ್ಲಿಸಿರುವ ಅರ್ಜಿಯೊಂದಿಗೆ ಈ ಅರ್ಜಿಯನ್ನು ಸೇರಿಸಲು ಆದೇಶಿಸಿದೆ.
ಓವೈಸಿ ಪರ ವಕೀಲ ನಿಝಾಮುದ್ದೀನ್ ಪಾಷಾ ವಾದ ಮಂಡಿಸಿದ್ದು, ಪ್ರಕರಣದ ಮುಂದಿನ ವಿಚಾರಣೆ ಫೆಬ್ರವರಿ 17ರಂದು ನಡೆಯಲಿದೆ.
ಆರಾಧನಾ ಸ್ಥಳಗಳ ಕಾಯ್ದೆ-1991ರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಬಿಜೆಪಿ ನಾಯಕ ಮತ್ತು ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ (ಪಿಐಎಲ್) ಕಕ್ಷಿದಾರರಾಗಿ ಸೇರ್ಪಡೆಗೊಳಿಸುವಂತೆ ಕೋರಿ ಜಮಿಯತ್ ಉಲಮಾ-ಎ-ಹಿಂದ್ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು.
ಡಿಸೆಂಬರ್ 12ರಂದು ಮಧ್ಯಂತರ ಆದೇಶ ನೀಡಿರುವ ಸುಪ್ರೀಂ ಕೋರ್ಟ್ ಮುಂದಿನ ಆದೇಶದವರೆಗೆ ಮಸೀದಿಗಳ ಸಮೀಕ್ಷೆಗೆ ಸಂಬಂಧಿಸಿದಂತೆ ಯಾವುದೇ ಮಧ್ಯಂತರ ಅಥವಾ ಅಂತಿಮ ಆದೇಶಗಳನ್ನು ನೀಡದಂತೆ ದೇಶದ ಎಲ್ಲಾ ನ್ಯಾಯಾಲಯಗಳಿಗೆ ಸೂಚಿಸಿದೆ.
ಆರಾಧನಾ ಸ್ಥಳಗಳ ಕಾಯ್ದೆಯು 1947ರ ನಂತರ ಆರಾಧನಾ ಸ್ಥಳಗಳ ಸ್ವರೂಪ ಬದಲಾವಣೆಯನ್ನು ಸ್ಪಷ್ಟವಾಗಿ ನಿಷೇಧಿಸಿದೆ ಎಂಬುವುದನ್ನು ಸುಪ್ರೀಂ ಕೋರ್ಟ್ ಗಮನಿಸಿದೆ.
ಡಿಸೆಂಬರ್ 12ರ ಮಧ್ಯಂತರ ಆದೇಶವು ದೇಶದಾದ್ಯಂತ ಧಾರ್ಮಿಕ ಕೇಂದ್ರಗಳಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ಸುಮಾರು 18 ಪ್ರಕರಣಗಳ ಮೇಲೆ ಪರಿಣಾಮ ಬೀರಿದೆ. ಈ ಎಲ್ಲಾ ಪ್ರಕರಣಗಳು ಮಸೀದಿಗಳನ್ನು ದೇವಸ್ಥಾನಗಳ ಜಾಗಗಳಲ್ಲಿ ಕಟ್ಟಲಾಗಿದೆ. ಅವುಗಳನ್ನು ಹಿಂದೂಗಳಿಗೆ ಹಿಂದಿರುಗಿಸುವಂತೆ ಕೋರಿ ಹಿಂದುತ್ವ ಸಂಘಟನೆಗಳು ಮತ್ತು ವ್ಯಕ್ತಿಗಳು ಸಲ್ಲಿಸಿರುವ ಅರ್ಜಿಗಳಿಗೆ ಸಂಬಂಧಿಸಿವೆ.
ಇದನ್ನೂ ಓದಿ : ಕ್ರೈಸ್ತರನ್ನು ಗುರಿಯಾಗಿಸಿ ಹಿಂಸಾಚಾರ : ರಾಷ್ಟ್ರಪತಿ, ಪ್ರಧಾನಿಗೆ ಪತ್ರ ಬರೆದ 400ಕ್ಕೂ ಹೆಚ್ಚು ಕ್ರಿಶ್ಚಿಯನ್ ನಾಯಕರು


