ಮುಂಬರುವ ದೆಹಲಿ ವಿಧಾನಸಭೆ ಚುನಾವಣೆಗೆ ಮುಖ್ಯಮಂತ್ರಿ ಅತಿಶಿ ಮರ್ಲೆನಾ ಅವರ ವಿರುದ್ಧ ಮಹಿಳಾ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷೆ ಅಲ್ಕಾ ಲಂಬಾ ಅವರನ್ನು ಕಾಂಗ್ರೆಸ್ ಪಕ್ಷ ಕಣಕ್ಕಿಳಿಸಿದೆ.
ದಕ್ಷಿಣ ದೆಹಲಿಯ ಕಲ್ಕಾಜಿ ವಿಧಾನಸಭಾ ಕ್ಷೇತ್ರದಿಂದ ಅಲ್ಕಾ ಲಂಬಾ ಅವರು ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಮುಖ್ಯಮಂತ್ರಿ ಅತಿಶಿ ಮರ್ಲೆನಾ ಅವರು ಪ್ರಸ್ತುತ ಈ ಕ್ಷೇತ್ರದ ಶಾಸಕರಾಗಿದ್ದಾರೆ. ಮುಂಬರುವ ಚುನಾವಣೆಯಲ್ಲೂ ಕಲ್ಕಾಜಿ ಕ್ಷೇತ್ರದಿಂದ ಅತಿಶಿ ಅವರೇ ಸ್ಪರ್ಧಿಸುವ ಸಾಧ್ಯತೆ ಇದೆ.
ಪತ್ರಿಕಾ ಪ್ರಕಟಣೆ ಹೊರಡಿಸಿರುವ ಕಾಂಗ್ರೆಸ್, “ಪಕ್ಷದ ಕೇಂದ್ರ ಚುನಾವಣಾ ಸಮಿತಿ ಮುಂಬರುವ ದೆಹಲಿ ವಿಧಾನಸಭೆ ಚುನಾವಣೆಗೆ ಕಲ್ಕಾಜಿ ಕ್ಷೇತ್ರದ ಅಭ್ಯರ್ಥಿಯಾಗಿ ಅಲ್ಕಾ ಲಂಬಾ ಅವರನ್ನು ಆಯ್ಕೆ ಮಾಡಿದೆ” ಎಂದು ತಿಳಿಸಿದೆ.
The Central Election Committee has approved the candidature of Ms. @LambaAlka as Congress candidate to contest the forthcoming general election to the Legislative Assembly of Delhi from 51 – Kalkaji constituency. pic.twitter.com/GcNwTjtwvG
— Congress (@INCIndia) January 3, 2025
“ನಾನು ಮುಖ್ಯಮಂತ್ರಿ ವಿರುದ್ಧ ಸ್ಪರ್ಧಿಸುತ್ತಿದ್ದೇನೆ ಎಂದು ಭಾವಿಸುವುದಿಲ್ಲ. ಅರವಿಂದ್ ಕೇಜ್ರಿವಾಲ್ ಅವರೇ ಅತಿಶಿವರನ್ನು ತಾತ್ಕಾಲಿಕ ಸಿಎಂ ಎಂದು ಕರೆದಿದ್ದಾರೆ. ಆದ್ದರಿಂದ ಅವರು ಕೇವಲ ಇನ್ನು ಒಂದು ತಿಂಗಳು ಮಾತ್ರ ಸಿಎಂ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ. ಕೇಜ್ರಿವಾಲ್ ಅವರು ಸಾಂವಿಧಾನಿಕ ಹುದ್ದೆಯಲ್ಲಿರುವ ಮಹಿಳೆಗೆ ಅಗೌರವ ತೋರುತ್ತಿದ್ದಾರೆ. ಕೇಜ್ರಿವಾಲ್ ಅವರು ತಾತ್ಕಾಲಿಕ ಸಿಎಂ ಎಂದು ಕರೆದಿರುವ ಬಗ್ಗೆ ಅತಿಶಿ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕು” ಎಂದು ಕಲ್ಕಾಜಿ ಕ್ಷೇತ್ರದ ಅಭ್ಯರ್ಥಿಯಾಗಿ ಘೋಷಣೆಯಾದ ಬಳಿಕ ಅಲ್ಕಾ ಲಾಂಬಾ ಹೇಳಿದ್ದಾರೆ.
2020ರ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಅತಿಶಿ ಮರ್ಲೆನಾ ಅವರು 55,000ಕ್ಕೂ ಹೆಚ್ಚು ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿಯಾಗಿದ್ದ ಧರಂಬೀರ್ ಅವರನ್ನು ಸೋಲಿಸಿದ್ದರು. ಆಗ ಅತಿಶಿಯವರ ಪ್ರತಿಸ್ಪರ್ಧಿಯಾಗಿದ್ದ ಕಾಂಗ್ರೆಸ್ ಅಭ್ಯರ್ಥಿ ಶಿವಾನಿ ಚೋಪ್ರಾ ಅವರು 5,000ಕ್ಕಿಂತ ಕಡಿಮೆ ಮತಗಳನ್ನು ಗಳಿಸಿದ್ದರು. ಸ್ಪರ್ಧೆಯಲ್ಲಿ ಮೂರನೇ ಸ್ಥಾನ ಪಡೆದಿದ್ದರು.
ಅಲ್ಕಾ ಲಂಬಾ ಯಾರು?
ಪ್ರಸ್ತುತ ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿರುವ ಅಲ್ಕಾ ಲಂಬಾ ಅವರು, ಕಾಂಗ್ರೆಸ್ ಪಕ್ಷದಲ್ಲಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದಾರೆ. ಸುಮಾರು 20 ವರ್ಷಗಳ ಕಾಲ ಕಾಂಗ್ರೆಸ್‌ನಲ್ಲಿ ಕಾರ್ಯನಿರ್ವಹಿಸಿದ ಬಳಿಕ ಪಕ್ಷವನ್ನು ತೊರೆದ ಅವರು, 26 ಡಿಸೆಂಬರ್ 2014ರಂದು ಆಮ್ ಆದ್ಮಿ ಪಕ್ಷ (ಎಎಪಿ) ಸೇರಿದರು. ಬಳಿಕ ಫೆಬ್ರವರಿ 2015ರಲ್ಲಿ ಚಾಂದ್‌ನಿ ಚೌಕ್ ಕ್ಷೇತ್ರದಿಂದ ದೆಹಲಿ ವಿಧಾನಸಭೆಗೆ ಆಯ್ಕೆಯಾಗಿದ್ದರು. ಬಳಿಕ, ಪಕ್ಷದಲ್ಲಿ ಕಡೆಗಣಿಸಲಾಗುತ್ತಿದೆ ಎಂದು ಆರೋಪಿಸಿ ಸೆಪ್ಟೆಂಬರ್ 2019ರಲ್ಲಿ ಎಎಪಿ ತೊರೆದರು. ಸೆಪ್ಟಂಬರ್ 6 , 2019ರಂದು ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಹಿಂದಿರುಗಿದರು. ಈ ವೇಳೆ ಅವರನ್ನು ಪಕ್ಷಾಂತರ ನಿಷೇಧ ಕಾಯ್ದೆಯಡಿ ದೆಹಲಿ ಸ್ಪೀಕರ್ ಶಾಸಕಿ ಸ್ಥಾನದಿಂದ ಅಮಾನತುಗೊಳಿಸಿದ್ದರು.
ಕಾಲೇಜು ಹಂತದಲ್ಲಿ ಅಲ್ಕಾ ಲಂಬಾ ಅವರು ವಿದ್ಯಾರ್ಥಿ ನಾಯಕರಾಗಿದ್ದರು. ದೆಹಲಿ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ನಂತರ ಕಾಂಗ್ರೆಸ್‌ನ ವಿದ್ಯಾರ್ಥಿ ಸಂಘಟನೆ ಎನ್‌ಎಸ್‌ಯುಐನ ರಾಷ್ಟ್ರೀಯ ಅಧ್ಯಕ್ಷರಾಗಿದ್ದರು. ದೆಹಲಿ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ, ಕಾಂಗ್ರೆಸ್ ರಾಷ್ಟ್ರೀಯ ಸಮಿತಿಯ ಕಾರ್ಯದರ್ಶಿಯಾಗಿ ಅಲ್ಕಾ ಲಂಬಾ ಕಾರ್ಯನಿರ್ವಹಿಸಿದ್ದಾರೆ. ಪ್ರಸ್ತುತ ಗೋ ಇಂಡಿಯಾ ಫೌಂಡೇಶನ್ ಎಂಬ ಎನ್‌ಜಿಒ ಅಧ್ಯಕ್ಷೆ ಹಾಗೂ ಮಹಿಳಾ ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷೆಯಾಗಿದ್ದಾರೆ.
ಇದನ್ನೂ ಓದಿ : ಉತ್ತರ ಪ್ರದೇಶ| ಜನವರಿ 18 ರಿಂದ ಅಖಿಲ ಭಾರತ ಕಿಸಾನ್ ಕಾಂಗ್ರೆಸ್‌ನಿಂದ ‘ನ್ಯಾಯ ಯಾತ್ರೆ’ ರ‍್ಯಾಲಿ


