ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಇತರೆ ಆರೋಪಿಗಳಿಗೆ ನಿಯಮಿತ (ರೆಗ್ಯುಲರ್) ಜಾಮೀನು ಮಂಜೂರು ಮಾಡಿರುವ ಕರ್ನಾಟಕ ಹೈಕೋರ್ಟ್ ಆದೇಶಗಳನ್ನು ಪ್ರಶ್ನಿಸಿ ಬೆಂಗಳೂರು ಪೊಲೀಸರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.
ದರ್ಶನ್, ಪವಿತ್ರಗೌಡ, ಲಕ್ಷ್ಮಣ್, ಪ್ರದೂಶ್, ನಾಗರಾಜು, ಅನುಕುಮಾರ್ ಹಾಗೂ ಜಗದೀಶ್ ಅವರಿಗೆ ಹೈಕೋರ್ಟ್ ನಿಯಮಿತ (ರೆಗ್ಯುಲರ್) ಜಾಮೀನು ಮಂಜೂರು ಮಾಡಿತ್ತು. ಉಳಿದ ಹತ್ತು ಮಂದಿ ಆರೋಪಿಗಳಿಗೆ ವಿಚಾರಣಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. ಈ ನಿಯಮಿತ ಜಾಮೀನು ಆದೇಶಗಳನ್ನು ಪ್ರಶ್ನಿಸಿ ಪ್ರಾಸಿಕ್ಯೂಶನ್ ಪರ ಹಿರಿಯ ವಕೀಲ ಅನಿಲ್ ನಿಶಾನಿ ಅವರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ವಿಚಾರಣೆ ದಿನಾಂಕ ಇನ್ನೂ ನಿಗದಿಯಾಗಿಲ್ಲ ಎಂದು ತಿಳಿದು ಬಂದಿದೆ.
ಪ್ರಾಸಿಕ್ಯೂಷನ್ ಪರವಾಗಿ ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಂಡಿಸಲು ಬೆಂಗಳೂರು ಪೊಲೀಸರು ಹಿರಿಯ ವಕೀಲ ಸಿದ್ದಾರ್ಥ್ ಲೂಥಾ ಅವರನ್ನು ನೇಮಿಸಿದ್ದಾರೆ. ಅನಿಲ್ ಸಿ. ನಿಶಾನಿ ಹಾಗೂ ಹೈಕೋರ್ಟ್‌ನ ಪಬ್ಲಿಕ್ ಪ್ರಾಸಿಕ್ಯೂಟರ್ ಅವರಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯ ಜವಾಬ್ದಾರಿ ನೀಡಿ ಆದೇಶ ಹೊರಡಿಸಲಾಗಿತ್ತು.
ಕರ್ನಾಟಕ ಹೈಕೋರ್ಟ್‌ನ ಏಕಸದಸ್ಯ ಪೀಠ ಡಿಸೆಂಬರ್ 13ರಂದು ದರ್ಶನ್, ಪವಿತ್ರಾ ಗೌಡ ಸೇರಿದಂತೆ ಏಳು ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಈ ಜಾಮೀನು ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಅನುಮತಿ ಕೋರಿ ನಗರ ಪೊಲೀಸರು, ಗೃಹ ಇಲಾಖೆಗೆ ಪತ್ರ ಬರೆದಿದ್ದರು.
ಕಳೆದ ವಾರ ಗೃಹ ಇಲಾಖೆ ಮೇಲ್ಮನವಿ ಸಲ್ಲಿಸಲು ಅನುಮತಿ ನೀಡಿತ್ತು. ದಾಖಲೆ ಹಾಗೂ ಆರೋಪಪಟ್ಟಿಯಲ್ಲಿರುವ ಅಂಶಗಳನ್ನು ಅನುವಾದ ಮಾಡುವ ಕಾರ್ಯ ವಿಳಂಬವಾದ ಕಾರಣ ಮೇಲ್ಮನವಿ ಸಲ್ಲಿಸುವ ಕಾರ್ಯ ವಿಳಂಬವಾಗಿದೆ ಎಂದು ವರದಿಗಳು ಹೇಳಿವೆ .
ಜೂನ್ 8, 2024ರಂದು ಚಿತ್ರದುರ್ಗದ 33 ವರ್ಷದ ರೇಣುಕಾಸ್ವಾಮಿ ಅವರ ಹತ್ಯೆ ನಡೆದಿತ್ತು. ಬೆಂಗಳೂರಿನ ಮಾಗಡಿ ರಸ್ತೆಯ ಸುಮನಹಳ್ಳಿ ಬಳಿಯ ಚರಂಡಿಯಲ್ಲಿ ರೇಣುಕಾಸ್ವಾಮಿ ಶವ ಪತ್ತೆಯಾಗಿತ್ತು.
ಇದನ್ನೂ ಓದಿ : ಬೆಂಗಳೂರು ಐಐಎಂ ವಿದ್ಯಾರ್ಥಿ ಕ್ಯಾಂಪಸ್‌ನಲ್ಲಿ ಶವವಾಗಿ ಪತ್ತೆ!


