ಕೇಂದ್ರ ಸರ್ಕಾರದ ನೀತಿಗಳಿಂದಾಗಿ ನಬಾರ್ಡ್ ಸಾಲದ ಮೊತ್ತವನ್ನು ಕಡಿಮೆ ಮಾಡಲಾಗಿದೆ. ಇದು ಖಂಡನೀಯ. ರಾಜ್ಯ ಸರ್ಕಾರ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ನೀಡುವ ಕೃಷಿ ಸಾಲವನ್ನು ಯಾವುದೇ ಕಾರಣಕ್ಕೂ ಕಡಿಮೆ ಮಾಡದೇ ಮುಂದುವರಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಆಗ್ರಹಿಸಿದರು.
ರೈತರಿಗೆ ನೀಡುವ ಸಾಲದ ಪ್ರಮಾಣ ಕಡಿತ ಮಾಡಿರುವ ನಬಾರ್ಡ್ ನೀತಿ ಖಂಡಿಸಿ ಹಾಗೂ ಮೈಕ್ರೋ ಫೈನಾನ್ಸ್ ಕಂಪನಿಗಳ ಹಾವಳಿ ತಡೆಗಟ್ಟುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬುಧವಾರ (ಜ.29) ಆಯೋಜಿಸಿದ್ದ ರೈತರ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ನಬಾರ್ಡ್ ರೈತರಿಗೆ ನೀಡುತ್ತಿದ್ದ ಸಾಲದ ಮೊತ್ತವನ್ನು ಕಡಿಮೆ ಮಾಡಲಾಗಿದೆ. ಕೇಂದ್ರ ಸರ್ಕಾರ ಈ ಸಾಲಿನಲ್ಲಿ ಕರ್ನಾಟಕಕ್ಕೆ ನೀಡುತ್ತಿದ್ದ ಸಾಲವನ್ನು ಶೇ.58ರಷ್ಟು ಕಡಿತಗೊಳಿಸಿದೆ. ಈ ಮೂಲಕ ಇಡೀ ಕೃಷಿ ವ್ಯವಸ್ಥೆಯನ್ನೇ ನಾಶ ಮಾಡಿ ಕೃಷಿ ಕ್ಷೇತ್ರವನ್ನು ಸಂಪೂರ್ಣ ಕಾರ್ಪೋರೇಟ್ ಕಂಪನಿಗಳ ವಶಕ್ಕೆ ನೀಡಲು ಮೋದಿ ಸರ್ಕಾರ ಹುನ್ನಾರ ನಡೆಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಹಕಾರಿ ಸಂಸ್ಥೆಗಳು ದೇಶದ ಬೆನ್ನೆಲುಬಾಗಿದೆ. ಗ್ರಾಮೀಣ ಪ್ರದೇಶದ ಆರ್ಥಿಕತೆಯನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ. ಹಾಲಿನ ಡೈರಿಗಳು, ಪ್ರಾಥಮಿಕ ಕೃಷಿ ಪತ್ತಿನ ಸಂಘಗಳು. ಡಿಸಿಸಿ ಬ್ಯಾಂಕ್‌ಗಳ ಸಹಕಾರವೂ ಮಹತ್ವದ್ದಾಗಿದೆ. ಆದರೆ, ಕೇಂದ್ರ ಸರ್ಕಾರ ಕೃಷಿ ಕ್ಷೇತ್ರಕ್ಕೆ ನೀಡಲಾಗುವ ಎಲ್ಲಾ ಸೌಲಭ್ಯಗಳನ್ನೂ ಕಸಿದುಕೊಳ್ಳುತ್ತಿದೆ ಎಂದು ಆರೋಪಿಸಿದರು.

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿಯಿಂದ ಜನರಿಗೆ ಸಮಸ್ಯೆ ಆಗುತ್ತಿದೆ. ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಗ್ರಾಮೀಣ ಪ್ರದೇಶದ ಮಹಿಳೆಯರು, ಕಾರ್ಮಿಕರು ಸಂಕಷ್ಟಕ್ಕೀಡಾಗಿದ್ದಾರೆ. ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಎಸಗುವ ದೌರ್ಜನ್ಯಕ್ಕೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದರು.
ಕಾಂಗ್ರೆಸ್ ಸರ್ಕಾರ ತನ್ನ ಪ್ರಣಾಳಿಕೆಯಲ್ಲಿ ಹೇಳಿದಂತೆ ಭೂ-ಸುಧಾರಣಾ ಕಾಯ್ದೆಯ ತಿದ್ದುಪಡಿಯನ್ನು ಹಿಂಪಡೆಯಬೇಕು. ಎಪಿಎಂಸಿ ಕಾಯ್ದೆಯನ್ನು ರೈತ ಸ್ನೇಹಿಯಾಗಿ ಮತ್ತಷ್ಟು ಬಲಪಡಿಸಬೇಕು. ಜಾನುವಾರು ಹತ್ಯೆ ನಿಷೇಧ ಸಂರಕ್ಷಣಾ ಕಾಯ್ದೆಯನ್ನು ರೈತರ ಹಿತದೃಷ್ಠಿಯಿಂದ ವಾಪಸ್ ಪಡೆಯಬೇಕು. ಕೃಷಿ ಪಂಪ್‌ಸೆಟ್ ವಿದ್ಯುತ್ ಸಂಪರ್ಕ ಉಚಿತವಾಗಿರಬೇಕು. ಅಕ್ರಮ-ಸಕ್ರಮ ಹಾಗೂ ಹೊಸ ವಿದ್ಯುತ್ ಸಂಪರ್ಕಗಳಿಗೆ ರೈತರೇ ಪೂರ್ಣ ವೆಚ್ಚ ಭರಿಸುವ ನಿಯಮ ಜಾರಿಗೆ ಬಂದಿದೆ. ಅದನ್ನು ವಾಪಸ್ ಪಡೆದು ಕೃಷಿ ಪಂಪ್‌ಸೆಟ್‌ಗಳಿಗೆ ಉಚಿತ ಸಂಪರ್ಕ ಕೊಡಬೇಕು ಎಂದು ಒತ್ತಾಯಿಸಿದರು.
ರಾಜ್ಯದ ವಿವಿಧ ಜಿಲ್ಲೆಗಳಿಂದ ಬಂದಿದ್ದ ರೈತ ಸಂಘದ ಸದಸ್ಯರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನಾ ಸ್ಥಳಕ್ಕೆ ಬಂದ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ ಮಹದೇವಪ್ಪ ಅವರು ಪ್ರತಿಭಟನಾಕಾರರ ಮನವಿ ಪತ್ರ ಸ್ವೀಕರಿಸಿದರು.

ಪ್ರತಿಭಟನೆಯಲ್ಲಿ ಕೈಗೊಂಡ ನಿರ್ಣಯಗಳು
- ರೈತರಿಗೆ ಸಾಲ ಮಂಜೂರಾತಿಗೆ ಸಿಬಿಲ್ ಅಂಕಗಳನ್ನು ಮಾನದಂಡವಾಗಿ ಪರಿಗಣಿಸುವುದನ್ನು ಕೈಬಿಡಬೇಕು.
- ಕೇಂದ್ರ ಸಚಿವರು ಹಾಗೂ ಸಂಸದರು ನಬಾರ್ಡ್ ಮೂಲಕ ನೀಡುತ್ತಿದ್ದ ಸಾಲದ ಮೊತ್ತವನ್ನು ಕಡಿತಗೊಳಿಸಿರುವುದರ ವಿರುದ್ದ ಸಂಸತ್‌ನಲ್ಲಿ ಧ್ವನಿ ಎತ್ತಬೇಕು.
- ಮೈಕ್ರೋ ಫೈನಾನ್ಸ್ ಕಂಪನಿಗಳ ಹಾವಳಿ, ಕಿರುಕುಳ ನಿಯಂತ್ರಿಸಲು ಕಾನೂನು ರೂಪಿಸಿದರೆ ಸಾಲದು. ರಾಜ್ಯ ಸರ್ಕಾರ ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು. ಸಾಲ ವಸೂಲಿ ಹೆಸರಿನಲ್ಲಿ ನೀಡುವ ಕಿರುಕುಳ ತಪ್ಪಿಸಲು ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಹಾಯವಾಣಿ ಪ್ರಾರಂಭಿಸಬೇಕು.
- ಋಣಮುಕ್ತ ಕಾಯ್ದೆಗೆ ಜೀವತುಂಬಿ ಕೇರಳ ಮಾದರಿಯಲ್ಲಿ ಜನಸ್ನೇಹಿ ಸರಳ ಸಾಲದ ನೀತಿಯನ್ನು ರೂಪಿಸಬೇಕು.
ಶಾಸಕ ದರ್ಶನ್ ಪುಟ್ಟಣ್ಣಯ್ಯ, ರೈತ ಸಂಘದ ಗೌರವಾಧ್ಯಕ್ಷ ಚಾಮರಸ ಮಾಲೀಪಾಟಿಲ ಕಾರ್ಯಾಧ್ಯಕ್ಷ ಜಿ.ಎಂ ವೀರಸಂಗಯ್ಯ, ಎ.ಎಂ ಮಹೇಶ್ ಪ್ರಭು, ಪ್ರಧಾನ ಕಾರ್ಯದರ್ಶಿ ಎನ್.ವಸಂತಕುಮಾರ್, ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಸಂಚಾಲಕ ಮಾವಳ್ಳಿ ಶಂಕರ್, ಕರ್ನಾಟಕ ಜನಶಕ್ತಿಯ ಅಧ್ಯಕ್ಷ ನೂರ್ ಶ್ರೀಧರ್, ಹಿರಿಯ ಪತ್ರಕರ್ತ, ಹೋರಾಟಗಾರ ಇಂದೂಧರ ಹೊನ್ನಾಪುರ, ಶಾಸಕ ಬಿ.ಆರ್ ಪಾಟೀಲ್ ಸೇರಿದಂತೆ ಪ್ರಮುಖರು ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು.
ಅಂತರ್ಜಲ ಮಟ್ಟ ಭಾರೀ ಕುಸಿತ; ಶೀಘ್ರದಲ್ಲೇ ನೀರಿನ ಬಿಕ್ಕಟ್ಟು ಎದುರಿಸಲಿದೆ ಬೆಂಗಳೂರು


