ಮುಸ್ಲಿಮರನ್ನು ಗುರಿಯಾಗಿಸಿ ಅವಹೇಳನಕಾರಿ ಪೋಸ್ಟ್ ಹಾಕಿದ್ದರ ವಿರುದ್ದ ಪ್ರತಿಭಟಿಸುವಾಗ ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿದ ಆರೋಪದಲ್ಲಿ ಬಂಧಿತರ ಸಂಖ್ಯೆ 16ಕ್ಕೆ ಏರಿದ್ದು, 1000ಕ್ಕೂ ಅಧಿಕ ಜನರ ಮೇಲೆ ಪ್ರಕರಣ ದಾಖಲಾಗಿದೆ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.
ಆರೋಪಿಗಳ ಗುರುತು ಮತ್ತು ಸ್ಥಳದ ಮೇಲೆ ನಿಗಾ ಇಡಲಾಗುತ್ತಿದ್ದು, ಇನ್ನೂ ಹಲವರನ್ನು ಬಂಧಿಸುವ ಸಾಧ್ಯತೆಯಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆರೋಪಿಗಳು ತಮ್ಮ ಮೊಬೈಲ್ ಫೋನ್‌ಗಳನ್ನು ಮನೆಗಳಲ್ಲಿಯೇ ಬಿಟ್ಟು ನಾಪತ್ತೆಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ವರದಿ ಹೇಳಿದೆ.
ಸಿಸಿಟಿವಿ ದೃಶ್ಯಗಳ ಮೂಲಕ ಪೊಲೀಸರು 100ಕ್ಕೂ ಹೆಚ್ಚು ಆರೋಪಿಗಳನ್ನು ಗುರುತಿಸಿದ್ದು, ಅವರಿಗಾಗಿ ಹುಡುಕಾಟ ಆರಂಭಿಸಿದ್ದಾರೆ.
ಹಿಂಸಾಚಾರ ಮತ್ತು ಗಲಭೆಗೆ ಕಾರಣವಾದ ವಿವಾದಾತ್ಮಕ ಪೋಸ್ಟ್ ಅನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಾಕಿದ ಆರೋಪಿ ಸತೀಶ್ ಅಲಿಯಾಸ್ ಪಾಂಡುರಂಗ ಸಲ್ಲಿಸಿರುವ ಜಾಮೀನು ಅರ್ಜಿಯನ್ನು ಸ್ಥಳೀಯ ನ್ಯಾಯಾಲಯ ಇಂದು ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ.
ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುವ ಆರೋಪಿಯನ್ನು ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸುವಂತೆ ನ್ಯಾಯಾಲಯವು ಅಧಿಕಾರಿಗಳಿಗೆ ಸೂಚಿಸಿದೆ.
ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ಸೋಲನ್ನು ಸಂಭ್ರಮಿಸುವಾಗ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿ ಆರೋಪಿ ಸತೀಶ್ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ. ಇದನ್ನು ಖಂಡಿಸಿ ಪ್ರತಿಭಟಿಸುವ ವೇಳೆ ಹಿಂಸಾಚಾರ ಉಂಟಾಗಿತ್ತು. ಮೈಸೂರಿನ ಕಲ್ಯಾಣನಗರ ನಿವಾಸಿಯಾದ ಸತೀಶ್ ಅಲಿಯಾಸ್ ಪಾಂಡುರಂಗನನ್ನು ಪೊಲೀಸರು ಬಂಧಿಸಿದ್ದರು.
ಈ ಪ್ರಕರಣದಲ್ಲಿ ಹಿಂಸಾಚಾರಕ್ಕೆ ಕಾರಣರಾದವರ ವಿರುದ್ಧ ನಿರ್ದಯ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಜಿ. ಪರಮೇಶ್ವರ ಗುರುವಾರ ಪುನರುಚ್ಚರಿಸಿದ್ದರು.
ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಇಂಟರ್ನ್‌ಶಿಪ್ ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರ


