ಕಾಳೇಶ್ವರಂ ಏತ ನೀರಾವರಿ ಯೋಜನೆಯ ಭಾಗವಾಗಿ ಮೇಡಿಗಡ್ಡ ಬ್ಯಾರೇಜ್ ನಿರ್ಮಾಣದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಮತ್ತು ಇತರರ ವಿರುದ್ಧ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದ ವ್ಯಕ್ತಿಯೊಬ್ಬರು ಬುಧವಾರ (ಫೆ.19) ಜಯಶಂಕರ್ ಭೂಪಾಲಪಲ್ಲಿ ಪಟ್ಟಣದಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.
ಸಾವಿಗೀಡಾದ ವ್ಯಕ್ತಿ 50 ವರ್ಷ ವಯಸ್ಸಿನ ರಾಜಲಿಂಗಮೂರ್ತಿ ಎಂದು ತಿಳಿದು ಬಂದಿದೆ. ಸಾವಿನ ಹಿಂದೆ ರಾಜಕೀಯ ಕಾರಣವಿಲ್ಲ ಎಂದಿರುವ ಪೊಲೀಸರು, ಭೂ ವಿವಾದದ ಹಿನ್ನೆಲೆ ಇಬ್ಬರು ಅಪರಿಚಿತ ವ್ಯಕ್ತಿಗಳು ರಾಜಲಿಂಗಮೂರ್ತಿ ಅವರನ್ನು ಇರಿದು ಕೊಂದಿದ್ದಾರೆ ಎಂದು ಹೇಳಿದ್ದಾರೆ.
ಬುಧವಾರ ಸಂಜೆ 7.30 ರ ಸುಮಾರಿಗೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ರಾಜಲಿಂಗಮೂರ್ತಿ ಅವರನ್ನು ಇಬ್ಬರು ವ್ಯಕ್ತಿಗಳು ಅಡ್ಡಗಟ್ಟಿ ಚೂರಿಯಿಂದ ಇರಿದಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಅವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾಗಿ ಎನ್‌ಡಿ ಟಿವಿ ವರದಿ ಮಾಡಿದೆ.
ಘಟನೆ ಸಂಬಂಧ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
ಮೇಡಿಗಡ್ಡ ಬ್ಯಾರೇಜ್‌ನ ಕೆಲವು ಕಂಬಗಳು ಮುಳುಗಿದ ನಂತರ ಕೆಸಿಆರ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋರಿ ರಾಜಲಿಂಗಮೂರ್ತಿ ಅವರು ಅಕ್ಟೋಬರ್ 2023ರಲ್ಲಿ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು.
ಇದನ್ನು ಪ್ರಶ್ನಿಸಿ ಕೆಸಿಆರ್, ಅವರ ಸೋದರಳಿಯ ಹಾಗೂ ಮಾಜಿ ಸಚಿವ ಟಿ ಹರೀಶ್ ರಾವ್ ತೆಲಂಗಾಣ ಹೈಕೋರ್ಟ್ ಮೊರೆ ಹೋಗಿದ್ದರು. ಕಳೆದ ವರ್ಷ ಡಿಸೆಂಬರ್‌ನಲ್ಲಿ, ಜಯಶಂಕರ್ ಭೂಪಾಲಪಲ್ಲಿಯ ಪ್ರಧಾನ ಜಿಲ್ಲಾ ಸೆಷನ್ಸ್ ನ್ಯಾಯಾಧೀಶರು ಕೆಸಿಆರ್ ಮತ್ತು ಹರೀಶ್ ರಾವ್ ವಿರುದ್ಧ ಅರ್ಜಿ ಸಲ್ಲಿಸಲು ಅನುಮತಿ ನೀಡಿ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿತ್ತು.
ಮುಸ್ಲಿಂ ವ್ಯಕ್ತಿಯ ಶವ ಸುಟ್ಟ ರೀತಿಯಲ್ಲಿ ಪತ್ತೆ : ತನಿಖೆ ವೇಳೆ ಆಘಾತಕಾರಿ ಮಾಹಿತಿ ಬಯಲು


