ಕೊಡಗು ಜಿಲ್ಲೆಯ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ಹಾಗೂ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತನ್ನೀರಾ ಮೈನಾ ವಿರುದ್ದ ಬೆಂಗಳೂರಿನ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಮೃತನ ಸಹೋದರ ಜೀವನ್ ನೀಡಿದ ದೂರಿನ ಮೇರೆಗೆ ತನ್ನೀರಾ ಮೈನಾ ವಿರುದ್ದ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಸೆಕ್ಷನ್ 108 (ಆತ್ಮಹತ್ಯೆಗೆ ಪ್ರಚೋದನೆ), 3(5) (ಅಪರಾಧಿಕ ಒಳಸಂಚು), 351 (2) (ಬೆದರಿಕೆ), 352 (ಉದ್ದೇಶಪೂರ್ವ ಅವಮಾನ) ಅಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
“ಮೃತ ವಿನಯ್ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಅವರಿಗೆ ಪತ್ನಿ ಹಾಗೂ ಒಂದು ಹೆಣ್ಣು ಮಗುವಿದೆ. ಸದಾ ಸಾಮಾಜಿಕ ಚಟುವಟಿಕೆಯಲ್ಲಿ ಕ್ರಿಯಾಶೀಲರಾಗಿದ್ದರು. ಇದಕ್ಕಾಗಿ ‘ಕೊಡಗಿನ ಸಮಸ್ಯೆಗಳು ಹಾಗೂ ಪರಿಹಾರಗಳು’ ಎಂಬ ಹೆಸರಿನಲ್ಲಿ ವಾಟ್ಸಾಪ್ ಗ್ರೂಪ್ ರಚಿಸಿದ್ದರು. ಈ ಗ್ರೂಪ್‌ಗೆ ವಿನಯ್ ಸಹ ಅಡ್ಮಿನ್ ಆಗಿದ್ದರು. ಕಳೆದ ಫೆಬ್ರವರಿಯಲ್ಲಿ ತನ್ನಿರಾ ಮೈನಾ ಅವರು ಗ್ರೂಪ್ ಅಡ್ಮಿನ್ ಆದ ತನ್ನ ಮೇಲೆ ಸುಳ್ಳು ಪ್ರಕರಣ ದಾಖಲಿಸಿದ್ದಾರೆ. ಈ ಪ್ರಕರಣಕ್ಕೆ ಹೈಕೋರ್ಟ್‌ನಿಂದ ತಡೆಯಾಜ್ಞೆ ತಂದಿರುವುದಾಗಿ ವಿನಯ್ ತನಗೆ ಕರೆ ಮಾಡಿ ಹೇಳಿದ್ದ” ಎಂದು ಸಹೋದರ ಜೀವನ್ ತಿಳಿಸಿದ್ದಾರೆ.
“ನ್ಯಾಯಾಲಯದಿಂದ ತಡೆಯಾಜ್ಞೆ ತಂದರೂ ತನ್ನೀರಾ ಅವರು ಪೊಲೀಸರ ಸಹಾಯದಿಂದ ಕುಟುಂಬಸ್ಥರು ಹಾಗೂ ಸ್ನೇಹಿತರ ಬಳಿ ವಿನಯ್ ಬಗ್ಗೆ ವಿಚಾರಿಸಿ ರೌಡಿ ಪಟ್ಟಿಯಲ್ಲಿ ಹಾಕುವುದಾಗಿ ಬೆದರಿಸಿದ್ದರು” ಎಂದು ದೂರಿನಲ್ಲಿ ಜೀವನ್ ಆರೋಪಿಸಿದ್ದಾರೆ.
ಎಫ್‌ಐಆರ್‌ನಲ್ಲಿ ಹೆಸರು ಕೈಬಿಟ್ಟಿದ್ದಕ್ಕೆ ಆಕ್ರೋಶ
ಸಹೋದರ ಸಾವಿಗೆ ಕಾಂಗ್ರೆಸ್ ಶಾಸಕರಾದ ಎ.ಎಸ್ ಪೊನ್ನಣ್ಣ ಹಾಗೂ ಮಂಥರ್‌ಗೌಡ ಕಾರಣರಾಗಿದ್ದಾರೆ. ಹೀಗಿದ್ದರೂ ಎಫ್‌ಐಆರ್‌ನಲ್ಲಿ ಅವರ ಹೆಸರುಗಳನ್ನು ಕೈ ಬಿಡಲಾಗಿದೆ. ಪೊಲೀಸರು ಒತ್ತಡದಿಂದ ಶಾಸಕರ ಹೆಸರನ್ನು ಎಫ್‌ಐಆರ್‌ನಲ್ಲಿ ನಮೂದಿಸಿಲ್ಲ. ಅವರ ಹೆಸರುಗಳನ್ನೂ ಎಫ್‌ಐಆರ್‌ನಲ್ಲಿ ಸೇರಿಸುವವರೆಗೂ ಸಹೋದರನ ಮೃತದೇಹ ಕೊಂಡೊಯ್ಯುದಿಲ್ಲ” ಎಂದು ಜೀವನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತನ್ನೀರಾ ಮೈನಾಗೆ ನೋಟಿಸ್ ನೀಡಲು ಸಿದ್ದತೆ
ವಿನಯ್ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಬೆಂಗಳೂರು ಪೂರ್ವ ವಿಭಾಗದ ಪೊಲೀಸರು ಆರಂಭಿಸಿದ್ದಾರೆ. ತನ್ನೀರಾ ಮೈನಾಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗೆ ಕರೆಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಪ್ರಕರಣದ ಕುರಿತು ಪ್ರಾಥಮಿಕ ಮಾಹಿತಿ ಕಲೆ ಹಾಕಲಾಗಿದೆ. ವಿನಯ್ ಅವರ ಮೊಬೈಲ್, ಲ್ಯಾಪ್‌ಟಾಪ್ ಹಾಗೂ ಅವರು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಿದ್ದ ಬರಹವನ್ನು ಎಫ್‌ಎಸ್‌ಎಲ್‌ಗೆ ರವಾನೆ ಮಾಡಲಾಗಿದೆ ಎಂದು ವರದಿಗಳು ಹೇಳಿವೆ.
ವಿನಯ್ ಅವರು ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಯಾರ ಜೊತೆ ಮೊಬೈಲ್‌ನಲ್ಲಿ ಮಾತನಾಡಿದ್ದರು. ಅವರ ಮೊಬೈಲ್‌ನಲ್ಲಿ ಏನೆಲ್ಲಾ ದಾಖಲೆಗಳಿವೆ ಎಂಬುದನ್ನೂ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾಗಿ ವರದಿ ತಿಳಿಸಿದೆ.
ಕಾನೂನು ತಜ್ಞರ ಮೊರೆ ಹೋದ ಪೊಲೀಸರು
ವಿನಯ್ ಸಾವಿಗೆ ಸಂಬಂಧಿಸಿದಂತೆ ವಿರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಹಾಗೂ ಮಡಿಕೇರಿ ಶಾಸಕ ಡಾ.ಮಂಥರ್‌ಗೌಡ ವಿರುದ್ಧವೂ ಎಫ್‌ಐಆರ್ ದಾಖಲಿಸುವಂತೆ ಬಿಜೆಪಿ ಹಾಗೂ ವಿನಯ್ ಕುಟುಂಬದ ಸದಸ್ಯರು ಆಗ್ರಹಿಸಿ ಎರಡನೇ ಬಾರಿಗೆ ದೂರು ನೀಡಿದ್ದು, ಹೆಣ್ಣೂರು ಪೊಲೀಸರು ಕಾನೂನು ತಜ್ಞರ ಮೊರೆ ಹೋಗಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ವರದಿಗಳು ಹೇಳಿವೆ.
ನೆನಪಿಡಿ : ಯಾವುದೇ ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ. ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡಿ. ತುರ್ತು ಪರಿಸ್ಥಿತಿಯಿದ್ದರೆ ಕರೆ ಮಾಡಿ ವೈದ್ಯರೊಂದಿಗೆ ಮಾತನಾಡಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104
ಸೌಜನ್ಯ ಪ್ರಕರಣ | ಧರ್ಮಸ್ಥಳದಲ್ಲಿ ನಡೆಯಬೇಕಿದ್ದ ಪ್ರತಿಭಟನೆಗೆ ತಾತ್ಕಾಲಿಕ ತಡೆ ನೀಡಿದ ಹೈಕೋರ್ಟ್


