ಮದುವೆ ಸಮಾರಂಭದಲ್ಲಿ ಪಾರ್ಕಿಂಗ್ ವಿಚಾರವಾಗಿ ನಡೆದ ಗಲಾಟೆ ಹಿಂಸಾಚಾರಕ್ಕೆ ತಿರುಗಿದ್ದು, ಇಬ್ಬರು ಗುಂಡೇಟಿಗೆ ಬಲಿಯಾಗಿರುವ ಘಟನೆ ಬಿಹಾರದ ಭೋಜ್‌ಪುರ ಜಿಲ್ಲೆಯಲ್ಲಿ ನಡೆದಿದೆ. ಗಲಾಟೆಯಲ್ಲಿ ಐದು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಭಾನುವಾರ ರಾತ್ರಿ 9.30 ರ ಸುಮಾರಿಗೆ ಗರ್ಹಾನಿ ಪೊಲೀಸ್ ಠಾಣೆ ಪ್ರದೇಶದ ಲಹರ್ಪಾ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ.
ಮದುವೆ ಸಮಾರಂಭದಲ್ಲಿ ವಾಹನಗಳನ್ನು ನಿಲ್ಲಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ತೀವ್ರ ವಾಗ್ವಾದ ನಡೆದು, ಗುಂಡು ಹಾರಿಸಲಾಗಿದೆ ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
“ಒಬ್ಬ ವ್ಯಕ್ತಿ ಸ್ಥಳದಲ್ಲೇ ಗುಂಡೇಟಿನಿಂದ ಸಾವನ್ನಪ್ಪಿದ್ದರೆ, ಮತ್ತೊಬ್ಬ ವ್ಯಕ್ತಿಯನ್ನು ಆಸ್ಪತ್ರೆಯಲ್ಲಿ ವೈದ್ಯರು ಮೃತಪಟ್ಟಿದ್ದಾನೆ ಎಂದು ಘೋಷಿಸಿದ್ದಾರೆ” ಎಂದು ಅವರು ತಿಳಿಸಿದ್ದಾರೆ. ಮೃತರನ್ನು ಲುವ್‌ಕುಶ್ ಮತ್ತು ರಾಹುಲ್ ಎಂದು ಗುರುತಿಸಲಾಗಿದೆ.
ಇತರ ಐದು ಮಂದಿಗೆ ಗುಂಡೇಟಿನ ಗಾಯಗಳಾಗಿದ್ದು, ಭೋಜ್‌ಪುರದ ಜಿಲ್ಲಾ ಕೇಂದ್ರವಾದ ಅರಾದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
“ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ. ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ” ಎಂದು ಹೇಳಿಕೆ ತಿಳಿಸಿದೆ.
ಗುಂಡಿನ ದಾಳಿಯಲ್ಲಿ ಭಾಗಿಯಾಗಿರುವ ಆರೋಪಿಗಳ ಗುರುತುಗಳನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.
ಗುಜರಾತ್: ಈಸ್ಟರ್ ಪ್ರಾರ್ಥನಾ ಸಭೆಗೆ ನುಗ್ಗಿ ವಿಎಚ್‌ಪಿ, ಬಜರಂಗದಳ ದುಷ್ಕರ್ಮಿಗಳಿಂದ ದಾಂಧಲೆ


