ಮಂಗಳೂರು ನಗರದ ಹೊರವಲಯ ಕುಡುಪು ಎಂಬಲ್ಲಿ ಕಳೆದ ಭಾನುವಾರ (ಏಪ್ರಿಲ್ 27) ನಡೆದ ಕೇರಳ ಮೂಲದ ವ್ಯಕ್ತಿಯ ಗುಂಪು ಹತ್ಯೆ ಸಂಬಂಧ ಮೂವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ ಎಂದು ವರದಿಯಾಗಿದೆ.
ಮಂಗಳೂರು ಗ್ರಾಮಾಂತರ ಠಾಣೆಯ ಇನ್ಸ್‌ಪೆಕ್ಟರ್ ಶಿವಕುಮಾರ್ ಕೆ.ಆರ್, ಹೆಡ್ ಕಾನ್‌ಸ್ಟೇಬಲ್ ಚಂದ್ರ ಪಿ ಹಾಗೂ ಕಾನ್‌ಸ್ಟೇಬಲ್ ಯಲ್ಲಾಲಿಂಗ ಅಮಾನತುಗೊಂಡವರು ಎಂದು ತಿಳಿದು ಬಂದಿದೆ.
ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ ಎಂದು ವರದಿಗಳು ಹೇಳಿವೆ.
ಪೊಲೀಸರು ಕರ್ತವ್ಯ ಲೋಪ ಎಸಗಿದ್ದಾರೆ ಎಂದು ಮಂಗಳೂರು ಉತ್ತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪುರುಷೋತ್ತಮ ಚಿತ್ರಾಪುರ ಅವರು ಆರೋಪಿಸಿದ್ದರು. ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದರು.
ಕುಡುಪು ಬಳಿಯ ಮೈದಾನದಲ್ಲಿ ಏ.27ರಂದು ಕ್ರಿಕೆಟ್ ಪಂದ್ಯಾಟ ಆಯೋಜಿಸಲಾಗಿತ್ತು. ಅದನ್ನು ವೀಕ್ಷಿಸಲು ಹೋಗಿದ್ದ ಕೇರಳದ ವಯನಾಡ್ ಜಿಲ್ಲೆಯ ಅಶ್ರಫ್ ಅವರನ್ನು ಥಳಿಸಿ ಹತ್ಯೆ ಮಾಡಲಾಗಿತ್ತು.
ಪೊಲೀಸರು ಆರಂಭದಲ್ಲಿ ಸಂಶಯಾಸ್ಪದ ಸಾವು ಎಂದು ಪ್ರಕರಣ ದಾಖಲಿಸಿ, ಗುಂಪು ಹತ್ಯೆಯನ್ನು ಮುಚ್ಚಿ ಹಾಕುವ ಪ್ರಯತ್ನ ಮಾಡಿದ್ದರು ಎಂಬ ಆರೋಪ ಕೇಳಿ ಬಂದಿದೆ.
ಗುಂಪು ಹಲ್ಲೆ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಯ ಇನ್‌ಸ್ಪೆಕ್ಟರ್ ಮತ್ತು ಸಿಬ್ಬಂದಿಗೆ ಮಾಹಿತಿ ಇದ್ದರೂ ಮೇಲಾಧಿಕಾರಿಗಳ ಗಮನಕ್ಕೆ ತಂದಿಲ್ಲ. ಹಾಗಾಗಿ, ಇನ್ಸ್‌ಪೆಕ್ಟರ್ ಸೇರಿದಂತೆ ಮೂವರನ್ನು ಅಮಾನತು ಮಾಡಲಾಗಿದೆ ಎಂದು ಆದೇಶದಲ್ಲಿ ಹೇಳಿರುವುದಾಗಿ ವರದಿಯಾಗಿದೆ.
ಸುಮಾರು 30 ಅಧಿಕ ಜನರು ಸೇರಿಕೊಂಡು ಅಶ್ರಫ್ ಅವರನ್ನು ಥಳಿಸಿ ಹತ್ಯೆಗೈದಿದ್ದಾರೆ. ಈಗಾಗಲೇ 20 ಜನ ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ(ಬಿಎನ್‌ಎಸ್) ಸೆಕ್ಷನ್ 103 (2) ಗುಂಪು ಹಲ್ಲೆ ಮಾಡಿ ಹತ್ಯೆ ಸೇರಿದಂತೆ ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸರು ಆಯುಕ್ತ ಅನುಪಮ್ ಅಗ್ರವಾಲ್ ತಿಳಿಸಿದ್ದಾರೆ.
ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆಗೆ ಅನುಮತಿಸುವುದಿಲ್ಲ: ಹೈಕೋರ್ಟ್‌ಗೆ ರಾಜ್ಯ ಸರ್ಕಾರ ವಾಗ್ದಾನ; ವರದಿ


