ಜಮ್ಮು ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಮತ್ತು ಅಂತಾರಾಷ್ಟ್ರೀಯ ಗಡಿಗಳಲ್ಲಿ ಪಾಕಿಸ್ತಾನ ಸೇನೆ ನಡೆಸಿದ ಗುಂಡಿನ ದಾಳಿಯಲ್ಲಿ ಮಹಿಳೆ ಮತ್ತು ಇಬ್ಬರು ಮಕ್ಕಳು ಸೇರಿದಂತೆ ಏಳು ಮಂದಿ ಭಾರತೀಯ ನಾಗರಿಕರು ಸಾವನ್ನಪ್ಪಿದ್ದು, 38 ಜನರು ಗಾಯಗೊಂಡಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.
ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ ಒಂಬತ್ತು ಭಯೋತ್ಪಾದಕ ತಾಣಗಳ ಮೇಲೆ ಭಾರತ ಕ್ಷಿಪಣಿ ದಾಳಿ ನಡೆಸಿದ ಬೆನ್ನಲ್ಲೇ, ಪಾಕಿಸ್ತಾನದ ಪಡೆಗಳು ಕದನ ವಿರಾಮ ಉಲ್ಲಂಘಿಸಿ ಭಾರತೀಯ ನಾಗರಿಕ ಮೇಲೆ ದಾಳಿ ಮಾಡಿವೆ.
ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಏಳು ಮಂದಿ ಸಾವನ್ನಪ್ಪಿದ್ದು, 25 ಜನರು ಗಾಯಗೊಂಡಿದ್ದಾರೆ. ಬಾರಾಮುಲ್ಲಾ ಜಿಲ್ಲೆಯ ಉರಿ ಸೆಕ್ಟರ್‌ನಲ್ಲಿ ಹತ್ತು ಜನರು ಗಾಯಗೊಂಡಿದ್ದಾರೆ ಮತ್ತು ರಾಜೌರಿ ಜಿಲ್ಲೆಯಲ್ಲಿ ಮೂವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
“2025ರ ಮೇ 6-7ರ ರಾತ್ರಿ, ಪಾಕಿಸ್ತಾನ ಸೇನೆಯು ಗಡಿ ನಿಯಂತ್ರಣ ರೇಖೆಯಾದ್ಯಂತ ಮತ್ತು ಜಮ್ಮು ಮತ್ತು ಕಾಶ್ಮೀರದ ಐಬಿ ಪೋಸ್ಟ್‌ಗಳಿಂದ ಫಿರಂಗಿ ಶೆಲ್ ಸೇರಿದಂತೆ ಅನಿಯಂತ್ರಿತ ಗುಂಡಿನ ದಾಳಿ ನಡೆಸಿದೆ” ಎಂದು ಭಾರತೀಯ ಸೇನೆ ತಿಳಿಸಿದೆ.
“ಅನಿಯಂತ್ರಿತ ಗುಂಡಿನ ದಾಳಿ ಮತ್ತು ಶೆಲ್ ದಾಳಿಯಲ್ಲಿ ಮೂವರು ಅಮಾಯಕ ನಾಗರಿಕರು ಪ್ರಾಣ ಕಳೆದುಕೊಂಡಿದ್ದಾರೆ” ಎಂದು ಸೇನೆಯ ಅಧಿಕಾರಿಗಳು ಹೇಳಿದ್ದಾರೆ.
ಭಾರತೀಯ ಸೇನೆ ಬುಧವಾರ ಬೆಳಗಿನ ಜಾವ ‘ಆಪರೇಷನ್ ಸಿಂಧೂರ್’ ಎಂಬ ಹೆಸರಿನಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಒಂಬತ್ತು ಭಯೋತ್ಪಾದಕ ತಾಣಗಳ ಮೇಲೆ ವಾಯು ದಾಳಿ ನಡೆಸಿದೆ. ಭಯೋತ್ಪಾದಕ ತಾಣಗಳ ಮೇಲಿನ ಈ ನಿಖರವಾದ ದಾಳಿಗೆ ‘ಕ್ಷಿಪಣಿ’ಗಳನ್ನು ಬಳಸಲಾಗಿದೆ ಎಂದು ಸೇನೆ ಹೇಳಿದೆ.
ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಬಹವಾಲ್ಪುರ, ಜೈಶ್-ಎ-ಮೊಹಮ್ಮದ್ ಭಯೋತ್ಪಾದಕ ಕೇಂದ್ರ ಮತ್ತು ಲಷ್ಕರ್-ಎ-ತೈಬಾದ ಪ್ರಧಾನ ಕಚೇರಿ ಮುರಿಡ್ಕೆ ಸೇರಿದಂತೆ ಆರು ಸ್ಥಳಗಳನ್ನು ಗುರಿಯಾಗಿರಿಸಿ ಭಾರತ ದಾಳಿ ನಡೆಸಿದೆ ಎಂದು ಪಾಕಿಸ್ತಾನ ಸೇನೆ ತಿಳಿಸಿದೆ.
ಭಾರತವು ಪಾಕ್ ಮೇಲೆ ದಾಳಿ ಮಾಡಿದರೆ, ಚೀನಾದೊಂದಿಗೆ ಸೇರಿ ಈಶಾನ್ಯ ರಾಜ್ಯಗಳನ್ನು ಆಕ್ರಮಿಸಿಕೊಳ್ಳುತ್ತೇವೆ: ಬಾಂಗ್ಲಾದೇಶ


