ಚುನಾವಣೆ ಪೂರ್ವದಲ್ಲಿ ನಾವು ಕೊಟ್ಟಿದ್ದ ಪೈಕಿ ಐದು ಗ್ಯಾರಂಟಿಗಳ ಜೊತೆಗೆ 142 ಭರವಸೆಗಳನ್ನು ಎರಡು ವರ್ಷಗಳಲ್ಲಿ ಈಡೇರಿಸಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ ಭರವಸೆಗಳನ್ನು ಈಡೇರಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಸರ್ಕಾರ ಎರಡು ವರ್ಷ ಪೂರೈಸಿರುವ ಹಿನ್ನೆಲೆ ಹೊಸಪೇಟೆಯಲ್ಲಿ ಕಂದಾಯ ಇಲಾಖೆ ಆಯೋಜಿಸಿದ್ದ ‘ಸಮರ್ಪಣೆ ಸಂಕಲ್ಪ’ ಸಮಾವೇಶದಲ್ಲಿ 1,11,111 ಮಂದಿಗೆ ಹಕ್ಕುಪತ್ರ ವಿತರಣೆ ಮಾಡಿ, ಮಾಜಿ ಪ್ರಧಾನಿ ಇಂದಿರಾಗಾಂಧಿಯವರ ಪ್ರತಿಮೆ ಲೋಕಾರ್ಪಣೆಗೊಳಿಸಿ ಸಿಎಂ ಮಾತನಾಡಿದರು.
ಮೊದಲ ಬಾರಿ ನಾನು ಮುಖ್ಯಮಂತ್ರಿಯಾಗಿದ್ದಾಗ ನೀಡಿದ್ದ 165 ಭರವಸೆಗಳ ಪೈಕಿ 158 ಭರವಸೆಗಳನ್ನು ಈಡೇರಿಸಿದ್ದಲ್ಲದೆ, ಪ್ರಣಾಳಿಕೆಯಲ್ಲಿ ಘೋಷಿಸದ 30 ಹೊಸ ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೊಳಿಸಿದ್ದೇವೆ. ಬಿಜೆಪಿಯವರು ತಾವು ಕೊಟ್ಟಿದ್ದ ಭರವಸೆಗಳನ್ನು ಈಡೇರಿಸದೆ ಜನರ ಮುಂದೆ ಸುಳ್ಳು ಹೇಳಿಕೊಂಡು ಏಕೆ ತಿರುಗುತ್ತಿದ್ದಾರೆ ಎಂದು ಸಿಎಂ ಪ್ರಶ್ನಿಸಿದರು.

ಸರ್ವ ಜನಾಂಗದ ಶಾಂತಿಯ ತೋಟ
ನಮ್ಮ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟ. ಸರ್ವರನ್ನೂ ಸಮಾನವಾಗಿ ಗೌರವಿಸುವ ರಾಜ್ಯ. ಸಂವಿಧಾನದ ಅಡಿಯಲ್ಲಿ ಸರ್ವ ಧರ್ಮಗಳನ್ನೂ ಸಮಾನವಾಗಿ ಕಾಣಬೇಕು. ನಾವು ಇದೇ ಮೌಲ್ಯವನ್ನು ಪಾಲಿಸುತ್ತಿದ್ದೇವೆ ಎಂದು ಸಿಎಂ ಸಿದ್ದಾರಾಮಯ್ಯ ಹೇಳಿದರು.
ಕೇಂದ್ರ ಸರ್ಕಾರದಿಂದ ಪ್ರತಿ ವರ್ಷ ನಮಗೆ ನಷ್ಟ ಆಗುತ್ತಿದೆ. ನಾವು ಪ್ರತಿ ವರ್ಷ 4.5 ಲಕ್ಷ ಕೋಟಿ ರೂಪಾಯಿ ತೆರಿಗೆ ರೂಪದಲ್ಲಿ ಕೊಟ್ಟರೆ ನಮಗೆ ವಾಪಾಸ್ ಬರುವುದು ಒಂದು ರೂಪಾಯಿಗೆ 14 ಪೈಸೆ ಮಾತ್ರ. ಇದರಿಂದ ಒಕ್ಕೂಟ ವ್ಯವಸ್ಥೆಯ ಘನತೆ ಹಾಳು ಮಾಡುತ್ತಿದ್ದಾರೆ ಎಂದರು.
ಕೇಂದ್ರ ಪ್ರಾಯೋಜಿತ ಯೋಜನೆಗಳಿಗೂ ಕೇಂದ್ರದಿಂದ ಪೂರ್ತಿ ಅನುದಾನ ಬಂದೇ ಇಲ್ಲ. ಕೇಂದ್ರದ ಯೋಜನೆಗಳಿಗೆ ರಾಜ್ಯ ಸರ್ಕಾರ ರಾಜ್ಯದ ಪಾಲನ್ನು ಪೂರ್ತಿ ಕೊಟ್ಟಿದೆ. ಆದರೆ, ಕೇಂದ್ರ ಸರ್ಕಾರ ತಮ್ನ ಪಾಲನ್ನು ಕೊಡದೆ ಉಳಿಸಿಕೊಂಡು ಅನ್ಯಾಯ ಮಾಡುತ್ತಿದೆ. 15ನೇ ಹಣಕಾಸು ಯೋಜನೆಯಲ್ಲಿ ರಾಜ್ಯಕ್ಕೆ ಕೇಂದ್ರ ಮಾಡಿರುವ ಅನ್ಯಾಯ ನಿಮಗೆಲ್ಲಾ ಗೊತ್ತೇ ಇದೆ. ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಿದ್ದ 5,300 ಕೋಟಿ ರೂಪಾಯಿ ಹಣದಲ್ಲಿ ಬಿಡಿಗಾಸನ್ನೂ ಬಿಡುಗಡೆ ಮಾಡಿಲ್ಲ. ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸುವುದಾಗಿ ಭರವಸೆ ನೀಡಿದ್ದರು. ಅದನ್ನೂ ಈಡೇರಿಸಲಿಲ್ಲ ಎಂದು ಟೀಕಿಸಿದರು.
ಬಿಜೆಪಿ ಸ್ವಂತ ಶಕ್ತಿಯಿಂದ ಅಧಿಕಾರಕ್ಕೆ ಬಂದೇ ಇಲ್ಲ
ಈಗ ಜೆಡಿಎಸ್ ಮತ್ತು ಬಿಜೆಪಿ ಒಂದಾಗಿದೆ. ಬಿಜೆಪಿ ಇದುವರೆಗೂ ಸ್ವಂತ ಶಕ್ತಿಯಿಂದ ಅಧಿಕಾರಕ್ಕೆ ಬಂದೇ ಇಲ್ಲ. ಆಪರೇಷನ್ ಕಮಲ ಮಾಡಿ ಅಧಿಕಾರಕ್ಕೆ ಬಂದದ್ದು ಬಿಟ್ಟರೆ ರಾಜ್ಯದಲ್ಲಿ ಬಿಜೆಪಿ ಇವತ್ತಿನವರೆಗೂ ಜನರಿಂದ ಆಯ್ಕೆಯೇ ಆಗಿಲ್ಲ ಎಂದರು.
ಬಿಜೆಪಿಯ ಕಮಿಷನ್ ಭ್ರಷ್ಟಾಚಾರ ಸಾಬೀತಾಗಿದೆ: ಸಿಎಂ
ಹಿಂದಿನ ಬಿಜೆಪಿ ಸರ್ಕಾರದ ಮೇಲೆ 40% ಕಮಿಷನ್ ಆರೋಪ ಇತ್ತು. ನಾವು ಅದರ ವಿರುದ್ಧ ಹೋರಾಟ ಮಾಡಿದೆವು, ಅಧಿಕಾರಕ್ಕೆ ಬಂದ ಬಳಿಕ ತನಿಖೆಗೆ ನಾಗಮೋಹನ್ ದಾಸ್ ಸಮಿತಿ ರಚಿಸಿದೆವು. ಸಮಿತಿ ಕೊಟ್ಟಿರುವ ವರದಿಯಲ್ಲಿ ಕಮಿಷನ್ ವ್ಯವಹಾರ ಸಾಬೀತಾಗಿದೆ ಎಂದು ಸಿಎಂ ಹೇಳಿದರು.
1.22 ಕೋಟಿ ಕುಟುಂಬಗಳ ಯಜಮಾನಿಯರಿಗೆ ಗೃಹಲಕ್ಷ್ಮಿ ಯೋಜನೆಯಡಿ ಮಾಸಿಕ 2000 ರೂಪಾಯಿ ಕೊಡುತ್ತಿದ್ದೇವೆ. 1.30 ಕೋಟಿ ಕುಟುಂಬಗಳಿಗೆ ಗೃಹ ಜ್ಯೋತಿ ಯೋಜನೆಯಡಿ ಅನುಕೂಲ ಒದಗಿಸಿದ್ದೇವೆ. ಜೊತೆಗೆ ಇಡೀ ರಾಜ್ಯದ ಮಹಿಳೆಯರಿಗೆ ಶಕ್ತಿ ಯೋಜನೆಯಡಿ ಉಚಿತ ಪ್ರಯಾಣದ ವ್ಯವಸ್ಥೆ ಮಾಡಿದ್ದೇವೆ ಎಂದರು.
ಚಿನ್ನದ ಬೆಲೆ ಈಗ ಎಷ್ಟಿದೆ?
2014ರಲ್ಲಿ 10,000 ಇದ್ದ ಚಿನ್ನದ ಬೆಲೆ ಈಗ ಲಕ್ಷ ಆಗಿದೆ. ಗ್ಯಾಸ್ ಬೆಲೆ 400 ಇದ್ದದ್ದು ಈಗ 850 ಆಗಿದೆ. ಡೀಸೆಲ್, ಪೆಟ್ರೋಲ್, ಎಣ್ಣೆ, ಕಾಳು, ಬೇಳೆ, ರಸಗೊಬ್ಬರ ಎಲ್ಲದರ ಬೆಲೆಯನ್ನೂ ಆಕಾಶಕ್ಕೆ ಏರಿಸಿರುವ ಕೇಂದ್ರದ ಮೋದಿಯವರ ಸರ್ಕಾರದ ವಿರುದ್ಧ ಜನಾಕ್ರೋಶ ಇದೆ. ನಮ್ಮ ಸರ್ಕಾರದ ಪರ ಜನಾಭಿಪ್ರಾಯ ಇದೆ. ಹೀಗಾಗಿ ಬಿಜೆಪಿ ಹಮ್ಮಿಕೊಂಡಿರುವ ಜನಾಕ್ರೋಶ ಕಾರ್ಯಕ್ರಮವೇ ನಕಲಿ ಎಂದರು.
ರಾಜ್ಯದ ಜನತೆ ನಮ್ಮ ಮಾಲೀಕರು. ನಮ್ಮ ಮಾಲೀಕರಿಗೆ ನಾವು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ. ನಿಮ್ಮ ಆಶೀರ್ವಾದ ಇರುವವರೆಗೂ ಬಿಜೆಪಿಯ ಸುಳ್ಳಿನ ರಾಶಿಗೆ ನಾವು ಹೆದರುವ, ಅಂಜುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಬೆಂಗಳೂರಿಗೆ ಆರೆಂಜ್, ರಾಜ್ಯದ ವಿವಿಧೆಡೆ ಎಲ್ಲೋ ಅಲರ್ಟ್ ನೀಡಿದ ಹವಾಮಾನ ಇಲಾಖೆ


