ಭಾರತೀಯ ಕುಸ್ತಿ ಒಕ್ಕೂಟದ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ದಾಖಲಾಗಿದ್ದ ಲೈಂಗಿಕ ಕಿರುಕುಳ ಪ್ರಕರಣವನ್ನು ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಸೋಮವಾರ (ಮೇ.26) ಮುಕ್ತಾಯಗೊಳಿಸಿದೆ ಎಂದು ವರದಿಯಾಗಿದೆ.
ಈ ಪ್ರಕರಣದಲ್ಲಿ ದೆಹಲಿ ಪೊಲೀಸರು ಜೂನ್ 15, 2023ರಂದು ಸಲ್ಲಿಸಿದ್ದ ಮುಕ್ತಾಯ ವರದಿಯನ್ನು ನ್ಯಾಯಾಲಯ ಸ್ವೀಕರಿಸಿದೆ. ಆಗಸ್ಟ್ 1, 2023ರಂದು ಆಪಾದಿತ ಸಂತ್ರಸ್ತೆ ಮತ್ತು ಆಕೆಯ ತಂದೆ ಪ್ರಕರಣ ಸಂಬಂಧ ಪೊಲೀಸ್ ವರದಿ ಮತ್ತು ಪೊಲೀಸ್ ತನಿಖೆಯ ಬಗ್ಗೆ ತೃಪ್ತಿ ವ್ಯಕ್ತಪಡಿಸಿದರು ಎಂದು ವರದಿಗಳು ಹೇಳಿವೆ.
ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಆರು ಕುಸ್ತಿಪಟುಗಳು ದಾಖಲಿಸಿರುವ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ದೆಹಲಿ ಪೊಲೀಸರು ಆರೋಪಪಟ್ಟಿ ಸಲ್ಲಿಸಿದ್ದಾರೆ. ಅಪ್ರಾಪ್ತ ಬಾಲಕಿಗೆ ಸಂಬಂಧಿಸಿದ ಪ್ರತ್ಯೇಕ ಪ್ರಕರಣದಲ್ಲಿ ಮುಕ್ತಾಯ ವರದಿ ಸಲ್ಲಿಕೆ ಮಾಡಿದ್ದಾರೆ.
ಪೋಕ್ಸೊ ಪ್ರಕರಣದಲ್ಲಿ ದೆಹಲಿ ಪೊಲೀಸರು ಸಿಆರ್‌ಪಿಸಿ ಸೆಕ್ಷನ್ 173ರ ಅಡಿಯಲ್ಲಿ ಮುಕ್ತಾಯ ವರದಿಯನ್ನು ಸಲ್ಲಿಸಿದ್ದು, ಅಪ್ರಾಪ್ತ ದೂರುದಾರೆ ಮತ್ತು ಆಕೆಯ ತಂದೆಯ ಹೇಳಿಕೆಗಳ ಆಧಾರದ ಮೇಲೆ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿದ್ದಾರೆ ಎನ್ನಲಾಗಿದೆ.
ನಂತರ ನ್ಯಾಯಾಲಯವು ಅಪ್ರಾಪ್ತ ದೂರುದಾರೆ ಮತ್ತು ಆಕೆಯ ತಂದೆಗೆ ನೋಟಿಸ್ ಜಾರಿಗೊಳಿಸಿ ಅವರ ಪ್ರತಿಕ್ರಿಯೆಯನ್ನು ಕೋರಿತ್ತು. ಆಗಸ್ಟ್ 2023ರಲ್ಲಿ, ದೂರುದಾರೆ ಮತ್ತು ಆಕೆಯ ತಂದೆ ನೋಟಿಸ್‌ಗೆ ಪ್ರತಿಕ್ರಿಯೆಯಾಗಿ ನ್ಯಾಯಾಲಯದ ಮುಂದೆ ಹಾಜರಾಗಿದ್ದರು.
ಅದರ ನಂತರ, ನ್ಯಾಯಾಲಯವು ಹಲವಾರು ಸ್ಪಷ್ಟೀಕರಣಗಳನ್ನು ಕೋರಿತ್ತು. ಹಿಂದಿನ ವಿಚಾರಣೆಯ ಸಮಯದಲ್ಲಿ ನ್ಯಾಯಾಲಯವು ದೂರುದಾರರನ್ನು ಮತ್ತೆ ತನ್ನ ಮುಂದೆ ಹಾಜರಾಗುವಂತೆ ಸೂಚಿಸಿತ್ತು. ಅಂತಿಮವಾಗಿ ಸೋಮವಾರ ಪೊಲೀಸರ ಮುಕ್ತಾಯ ವರದಿಯನ್ನು ಅಂಗೀಕರಿಸಿದೆ.
ನ್ಯೂಸ್ ಲಾಂಡ್ರಿ ಪತ್ರಕರ್ತರ ಮಾನನಷ್ಟ ಪ್ರಕರಣ: ಅಭಿಜಿತ್ ಅಯ್ಯರ್‌ಗೆ ದೆಹಲಿ ಹೈಕೋರ್ಟ್ ಸಮನ್ಸ್


