ಸಂವಿಧಾನದ ಆಶಯ ಮತ್ತು ಧ್ಯೇಯೋದ್ದೇಶಗಳಿಗೆ ಯಾರೂ ವಿರುದ್ಧವಾಗಿ ಕಾರ್ಯನಿರ್ವಹಿಸಬಾರದು. ಅಂತಹ ಶಕ್ತಿಗಳು ಬೆಳೆಯಲು ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು, ಮೊಳಕೆಯಲ್ಲೇ ಚಿವುಟಿ ಹಾಕಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಶುಕ್ರವಾರ ಜಿಲ್ಲಾಧಿಕಾರಿಗಳು ಮತ್ತು ಸಿಇಒಗಳ ಜೊತೆ ಸಭೆ ನಡೆಸಿದ ಸಿಎಂ, ಸಂವಿಧಾನ ವಿರೋಧಿ ಶಕ್ತಿಗಳನ್ನು ಮಟ್ಟ ಹಾಕುವುದು ಡಿಸಿ, ಸಿಇಒಗಳ ಜವಾಬ್ದಾರಿ ತಾನೇ? ಎಂದು ಅಧಿಕಾರಿಗಳನ್ನು ಖಾರವಾಗಿ ಪ್ರಶ್ನಿಸಿದರು.
ಹಿಂದಿನ ಸಭೆಯಲ್ಲಿ ನೀಡಿದ ಸೂಚನೆಗಳು, ತೆಗೆದುಕೊಂಡ ನಿರ್ಣಯಗಳಿಗೆ ಸಂಬಂಧಪಟ್ಟಂತೆ ಕೆಲವು ಇಲಾಖೆಗಳು ಶೇಕಡ 100ರಷ್ಟು ಪ್ರಗತಿ ತೋರಿಸಿಲ್ಲ. ಇದನ್ನು ಸಹಿಸಲು ಸಾಧ್ಯವಿಲ್ಲ. ಈ ವಿಚಾರದಲ್ಲಿ ರಾಜಿಯಿಲ್ಲ. ಜನರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ಮೇಲೆ ನಿಷ್ಠುರವಾಗಿ ಕ್ರಮ ಕೈಗೊಳ್ಳುವುದು ನಮಗೆ ಅನಿವಾರ್ಯ ಆಗುತ್ತದೆ ಎಂದು ಸಿಎಂ ಹೇಳಿದರು.
ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿಗಳು ಮತ್ತು ಸಿಇಒಗಳು ತಮ್ಮ ಅಹಂ ಬದಿಗೊತ್ತಿ ಸಮನ್ವಯದಿಂದ ಕೆಲಸ ಮಾಡಿದರೆ ಮಾತ್ರ ರಾಜ್ಯದ ಸಮಗ್ರ ಅಭಿವೃದ್ಧಿ ಸಾಧ್ಯ. ಈ ಉದ್ದೇಶಕ್ಕೇ ನೀವುಗಳು ಐಎಎಸ್ ಮಾಡಿರುವುದು. ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.
10 ಅಕ್ಟೋಬರ್ 1949 ರಂದು ಸಂವಿಧಾನ ಜಾರಿ ಸಭೆಯಲ್ಲಿ ಇಂಡಿಯನ್ ಸಿವಿಲ್ ಸರ್ವಿಸ್ ಬೇಕಾ ಎಂದು ಚರ್ಚೆ ಆಗಿ ಐಎಎಸ್ ಬೇಕು ಎನ್ನುವ ನಿರ್ಧಾರಕ್ಕೆ ಬರಲಾಗಿದೆ. ಆ ಸಭೆಯಲ್ಲಿ ವಲ್ಲಭಾಬಾಯಿ ಪಟೇಲರು “ದೇಶವನ್ನು ನೈಜ ಸ್ವಾತಂತ್ರ್ಯ ಹೋರಾಟಗಳ ಆಶಯದಲ್ಲಿ ಮುನ್ನಡೆಸಲು ಐಎಎಸ್ ಸೇವೆ ಇರಬೇಕು. ಇದರ ನೈಜ ಕಾಳಜಿಯನ್ನು ನೀವು ಅರ್ಥ ಮಾಡಿಕೊಳ್ಳಬೇಕು ಎಂದಿದ್ದರು”.
“ವಲ್ಲಭಬಾಯಿ ಅವರ ಮಾತನ್ನು ನಾವು ಅರ್ಥಮಾಡಿಕೊಳ್ಳಬೇಕು. ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಕೆಲಸ ಮಾಡುವವರ ವಿರುದ್ಧ ಮತ್ತು ಜನಪರ ಆಶಯಗಳಿಗೆ ಸ್ಪಂದಿಸದಿದ್ದರೆ ಅವರ ವಿರುದ್ಧ ನಾವು ಕ್ರಮ ಕೈಗೊಳ್ಳಬೇಕಾಗುತ್ತದೆ. ನೀವೆಲ್ಲ ಸಂವಿಧಾನ ಓದಿದ್ದೀರಿ, ಅದರ ಆಶಯಗಳಿಗೆ, ಧ್ಯೇಯೋದ್ದೇಶಗಳಿಗೆ ಬದ್ದರಾಗಿದ್ದೀರಿ ಎಂದು ನಂಬಿದ್ದೇನೆ. ಇದನ್ನು ಕಾರ್ಯರೂಪಕ್ಕೆ ತರುವುದರಲ್ಲಿ ವಿಫಲರಾದವರ ವಿರುದ್ಧ ನಾನು ನಿರ್ಧಾಕ್ಷಣ್ಯ ಕ್ರಮ ಕೈಗೊಳ್ಳಲು ನಿರ್ಧಿರಿಸಿದ್ದೇನೆ” ಎಂದು ಸಿಎಂ ಅಧಿಕಾರಿಗಳನ್ನು ಎಚ್ಚರಿಸಿದರು.
ಸಂವಿಧಾನ ವಿರೋಧಿ, ಜನ ವಿರೋಧಿ ದುಷ್ಟ ಶಕ್ತಿಗಳು ಕೆಲವು ಕಡೆ ಬಾಲ ಬಿಚ್ಚುತ್ತಿವೆ. ಅವರು ಎಷ್ಟೇ ಪ್ರಭಾವಿಗಳು ಆಗಿರಲಿ, ಕಾನೂನು ಹಾಳು ಮಾಡಿದರೆ ಅಂಥವರ ವಿರುದ್ಧ ಕ್ರಮ ಕೈಗೊಳ್ಳಿ. ಇಲ್ಲದಿದ್ದರೆ ನಿಮ್ಮ ವಿರುದ್ಧ ನಾವು ಕ್ರಮ ಕೈಗೊಳ್ಳುತ್ತೇವೆ ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಸಿಎಂ ತಾಕೀತು ಮಾಡಿದರು.
ಕಾನೂನು ಸುವ್ಯವಸ್ಥೆ ಹದಗೆಟ್ಟರೆ ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ. ಇವೆರಡಕ್ಕೂ ನೇರಾ ನೇರಾ ಸಂಬಂಧವಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟರೆ ಅಭಿವೃದ್ಧಿ ಕುಂಟಿತವಾದಂತೆ. ಇದಕ್ಕೆ ಜಿಲ್ಲಾಧಿಕಾರಿಗಳು, ಜಿಲ್ಲಾ ರಕ್ಷಣಾಧಿಕಾರಿಗಳು ನೇರ ಹೊಣೆಯಾಗುತ್ತಾರೆ ಎಂದರು.
ನಾವು ಜನರ ತೆರಿಗೆ ದುಡ್ಡಿನಲ್ಲಿ ಆಡಳಿತ ನಡೆಸುತ್ತಿದ್ದೇವೆ. ನಾವು ಮತ್ತು ನೀವು ಎಲ್ಲಾ ಸವಲತ್ತುಗಳನ್ನು ಅನುಭವಿಸುತ್ತಿರುವುದು ಜನರ ತೆರಿಗೆ ಹಣದಿಂದ ಎನ್ನುವುದನ್ನು ಮರೆಯಬಾರದು. ಕಾರು, ಮನೆ ಸೇರಿ ಎಲ್ಲಾ ಸವಲತ್ತುಗಳನ್ನು ನಾವು ಕೊಟ್ಟಿರುವುದು ತೆರಿಗೆ ಹಣದಲ್ಲಿ. ಆದ್ದರಿಂದ ಜನಪರ ಧೋರಣೆಯಲ್ಲಿ ಕೆಲಸ ಮಾಡಬೇಕು. ಇದೇ ಪ್ರಜಾಪ್ರಭುತ್ವದ ಮೂಲ ಆಶಯ ಎಂದು ಹೇಳಿದರು.
ಜಿಲ್ಲಾ ಮಟ್ಟದ ಶಾಂತಿ ಸಮಿತಿ ಅಧ್ಯಕ್ಷರು ಜಿಲ್ಲಾಧಿಕಾರಿಗಳೇ ಆಗಿರ್ತಾರೆ. ಶಾಂತಿ ಕಾಪಾಡಲು ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು. ಅದನ್ನು ಬಿಟ್ಟು ಶಾಂತಿಭಂಗ ಆದ ಮೇಲೆ ಪೋಸ್ಟ್ ಮಾರ್ಟಂ ಮಾಡುತ್ತಾ ಕೂರಬಾರದು. ಮೊದಲೇ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲು ಏನು ಸಮಸ್ಯೆ ನಿಮಗೆ ಎಂದು ಪ್ರಶ್ನಿಸಿದರು.
ಬಾಲ್ಯ ವಿವಾಹ ಆಗುವುದು ಜಿಲ್ಲಾಧಿಕಾರಿಗಳ ಗಮನಕ್ಕೆ ಏಕೆ ಬರುವುದಿಲ್ಲ? ನಿಮ್ಮ ಕೆಳಗಿನವರು ನಿಮಗೆ ವರದಿ ಮಾಡುವುದಿಲ್ಲವೇ? ಕೆಳಗಿನವರು ನಿಮಗೆ ಹೇಳದಿದ್ದರೆ ನಿಮಗೆ ದಕ್ಷತೆ ಇಲ್ಲ ಎಂದು ಅರ್ಥ. ನಿಮಗೆ ಅಧಿಕಾರಿಗಳ ಮೇಲೆ ನಿಯಂತ್ರಣ ಇಲ್ಲ, ನಿಮ್ಮ ಬಗ್ಗೆ ಅವರಿಗೆ ಭಯ ಇಲ್ಲ ಎಂದೇ ಅರ್ಥ ಎಂದು ತರಾಟೆಗೆ ತೆಗೆದುಕೊಂಡರು.
ಈ ವರ್ಷ 700 ಬಾಲ್ಯ ವಿವಾಹ ನಡೆದಿದೆ. ಬಾಲ್ಯದಲ್ಲೇ ತಾಯಂದಿರಾದ ಘಟನೆಗಳೂ ವರದಿಗಳಾಗಿವೆ. ಈ ಬಗ್ಗೆ ಹಲವು ಕಡೆ ಎಫ್‌ಐಆರ್ ಕೂಡ ದಾಖಲಾಗಿಲ್ಲ ಎನ್ನುವುದು ನನ್ನ ಗಮನಕ್ಕೆ ಬಂದಿದೆ. ಸ್ವಾತಂತ್ರ್ಯ ಬಂದು ಇಷ್ಟ ವರ್ಷಗಳಾದರೂ 7೦೦ ಬಾಲ್ಯ ವಿವಾಹ ನಡೆಯುತ್ತಿದೆ ಎಂದರೆ ಹೇಗೆ? ಬಾಲ್ಯವಿವಾಹ ತಡೆಗೆ ಕಾಯ್ದೆ, ಕಾನೂನುಗಳಿವೆ. ಆದರೂ ಇದನ್ನು ಪರಿಣಾಮಕಾರಿಯಾಗಿ ಕೆಲವು ಕಡೆ ಬಳಸಿಲ್ಲ. ಇದು ತಪ್ಪಲ್ಲವೇ ಎಂದು ಸಿಎಂ ಅಧಿಕಾರಿಗಳನ್ನು ಖಾರವಾಗಿ ಪ್ರಶ್ನಿಸಿದರು.


