Homeಕರ್ನಾಟಕಕಾಲ್ತುಳಿತ ದುರಂತ: ಉನ್ನತ ಅಧಿಕಾರಿಗಳ ಎತ್ತಂಗಡಿಯಿಂದ ಸಿಎಂ ಅತ್ಯಾಪ್ತರ ತಲೆದಂಡದವರೆಗಿನ ಬೆಳವಣಿಗೆ

ಕಾಲ್ತುಳಿತ ದುರಂತ: ಉನ್ನತ ಅಧಿಕಾರಿಗಳ ಎತ್ತಂಗಡಿಯಿಂದ ಸಿಎಂ ಅತ್ಯಾಪ್ತರ ತಲೆದಂಡದವರೆಗಿನ ಬೆಳವಣಿಗೆ

- Advertisement -
- Advertisement -

ಜೂನ್ 4ರಂದು ಬುಧವಾರ ಆರ್‌ಸಿಬಿ ತಂಡದ ಗೆಲುವಿನ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಉಂಟಾದ ಕಾಲ್ತುಳಿತ ದುರಂತ ಸರ್ಕಾರದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ.

13 ವಸ್ಸಿನಿಂದ 40 ವರ್ಷದೊಳಗಿನ 11 ಯುವಜನರು ಸಾವನ್ನಪ್ಪಿದ್ದು, ಸುಮಾರು 47 ಜನರು ಗಾಯಗೊಂಡಿರುವ ಘಟನೆಯಿಂದ ರಾಜ್ಯ ಸರ್ಕಾರಕ್ಕೆ ರಾಷ್ಟ್ರಮಟ್ಟದಲ್ಲಿ ಮುಜುಗರ ಉಂಟಾಗಿದೆ. ಇದರಿಂದ ತಪ್ಪಿಸಿಕೊಳ್ಳಲು ಸಿಎಂ ಸಿದ್ದರಾಮಯ್ಯ ಹಲವು ಕ್ರಮಗಳನ್ನು ಕೈಗೊಂಡಿದ್ದಾರೆ.

ಅವಘಡ ನಡೆದ ದಿನವೇ ಸಂಜೆ ತುರ್ತು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದ ಸಿಎಂ, ನಿರೀಕ್ಷೆಗೂ ಮೀರಿ ಜನರು ಬಂದಿದ್ದರಿಂದ ದುರ್ಘಟನೆ ಆಗಿದೆ. ಸರ್ಕಾರದ ವತಿಯಿಂದ ವಿಧಾನಸೌಧದ ಮುಂಭಾಗದಲ್ಲಿ ಮಾತ್ರ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅಲ್ಲಿ ಸುಮಾರು 1 ಲಕ್ಷ ಜನರು ಸೇರಿದ್ದರು. ಆದರೆ, ಯಾವುದೇ ಅವಘಡ ಆಗಿಲ್ಲ. ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸರ್ಕಾರ ಕಾರ್ಯಕ್ರಮ ಆಯೋಜಿಸಿರಲಿಲ್ಲ. ಅದು ಕ್ರಿಕೆಟ್ ಅಸೋಸಿಯೇಷನ್ ಮತ್ತು ಆರ್‌ಸಿಬಿಯ ಕಾರ್ಯಕ್ರಮ ಎಂದು ಹೇಳಿದ್ದರು.

ಜೊತೆಗೆ, ಮೃತ 11 ಜನರ ಕುಟುಂಬಗಳಿಗೆ ತಲಾ 10 ಲಕ್ಷ ರೂಪಾಯಿ ಪರಿಹಾರ ನೀಡುತ್ತೇವೆ. ಗಾಯಾಳುಗಳ ಚಿಕಿತ್ಸಾ ವೆಚ್ಚ ಭರಿಸುತ್ತೇವೆ. ಅವರಿಗೆ ಬೇಕಾದ ಆಹಾರ ಮತ್ತು ಸಾರಿಗೆ ವ್ಯವಸ್ಥೆ ಮಾಡುತ್ತೇವೆ. ಘಟನೆ ಬಗ್ಗೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಮ್ಯಾಜಿಸ್ಟ್ರೀರಿಯಲ್ ವಿಚಾರಣೆ ಮಾಡಿಸುತ್ತೇವೆ ಎಂದು ಘೋಷಿಸಿದ್ದರು.

ಮ್ಯಾಜಿಸ್ಟ್ರೀರಿಯಲ್ ವಿಚಾರಣೆಗೆ ವಿಚಾರಣಾಧಿಕಾರಿಯಾಗಿ ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಗದೀಶ್ ಜಿ ಅವರನ್ನು ನೇಮಕ ಮಾಡಲಾಗಿದೆ.

ಮರುದಿನ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಘಟನೆ ಉಲ್ಲೇಖಿಸಿ ಕಣ್ಣೀರು ಹಾಕಿದ್ದರು. ಸರ್ಕಾರದಿಂದ ಯಾವುದೇ ತಪ್ಪಾಗಿಲ್ಲ. ನಾನು ನಮ್ಮ ಪೊಲೀಸರನ್ನು ದೂರುವುದಿಲ್ಲ ಎಂದು ಸಮರ್ಥಿಸಿಕೊಂಡಿದ್ದರು.

ಗುರುವಾರ ಸಂಜೆ ಸಿಎಂ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆದಿದೆ. ಕಾಲ್ತುಳಿತ ದುರಂತದ ಬಗ್ಗೆ ಗಂಭೀರ ಚರ್ಚೆ ನಡೆದು ಸರ್ಕಾರ ಕೆಲವೊಂದು ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದೆ.

ಕಾಲ್ತುಳಿತ ಘಟನೆಯ ಬಗ್ಗೆ ತನಿಖೆ ನಡೆಸಿ ವರದಿ ನೀಡಲು ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶರಾದ ನ್ಯಾಯಮೂರ್ತಿ ಮೈಕೆಲ್ ಕುನ್ಹಾ ಅವರ ಏಕಸದಸ್ಯ ವಿಚಾರಣಾ ಆಯೋಗವನ್ನು ಸರ್ಕಾರ ರಚಿಸಿದೆ.

ಆರ್‌ಸಿಬಿ, ಕಾರ್ಯಕ್ರಮ ಆಯೋಜಕರಾದ ಡಿಎನ್‌ಎ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಪ್ರತಿನಿಧಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಂಡು, ಬಂಧಿಸಲು ಸಿಎಂ ಸೂಚನೆ ನೀಡಿದ್ದರು. ಅದರಂತೆ ಎಫ್‌ಐಆರ್ ಕೂಡಾ ದಾಖಲಾಗಿತ್ತು.

ಶುಕ್ರವಾರ ಬೆಳಿಗ್ಗೆ ಅಪರಾಧ ವಿಭಾಗ ಮತ್ತು ಬೆಂಗಳೂರು ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಆರ್‌ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥ ನಿಖಿಲ್ ಸೋಸಲೆ, ಡಿಎನ್‌ಎ ಮ್ಯಾನೇಜ್‌ಮೆಂಟ್ ಸಿಬ್ಬಂದಿ ಸುನೀಲ್ ಮ್ಯಾಥ್ಯೂ ಹಾಗೂ ಕಿರಣ್ ಮತ್ತು ಸುಮಂತ್‌ ಎಂಬವರನ್ನು ಬಂಧಿಸಿದ್ದಾರೆ.

ದುರಂತಕ್ಕೆ ಹೊಣೆಯಾಗಿಸಿ ಬೆಂಗಳೂರು ನಗರ ಪೊಲೀಸ್ ಹೆಚ್ಚುವರಿ ಮಹಾನಿರ್ದೇಶಕ ಮತ್ತು ಆಯುಕ್ತ ಡಾ. ಬಿ. ದಯಾನಂದ, ಬೆಂಗಳೂರು ಪಶ್ಚಿಮ ವಿಭಾಗದ ಇನ್ಸ್‌ಪೆಕ್ಟರ್ ಜನರಲ್ ಮತ್ತು ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್, ಬೆಂಗಳೂರು ಕೇಂದ್ರ ವಿಭಾಗದ ಉಪ ಪೊಲೀಸ್ ಆಯುಕ್ತ ಶೇಖರ್ ಎಚ್ ತೆಕ್ಕಣ್ಣನವರ್, ಕಬ್ಬನ್ ಪಾರ್ಕ್ ಸಹಾಯಕ ಪೊಲೀಸ್ ಆಯುಕ್ತ ಸಿ ಬಾಲಕೃಷ್ಣ, ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಎ.ಕೆ ಗಿರೀಶ್ ಅವರನ್ನು ಸರ್ಕಾರ ಅಮಾನತು ಮಾಡಿದೆ.

ಮೇಲ್ನೋಟಕ್ಕೆ ಈ ಅಧಿಕಾರಿಗಳ ಬೇಜವಾಬ್ದಾರಿತನ, ಅಲಕ್ಷ್ಯ ಕಂಡು ಬಂದಿದೆ. ಈ ಕಾರಣಕ್ಕೆ ಅಮಾನತುಗೊಳಿಸಲಾಗಿದೆ ಎಂದು ಸರ್ಕಾರ ಹೇಳಿದೆ.

ಗುರುವಾರ ಕರ್ನಾಟಕ ಹೈಕೋರ್ಟ್ ದುರಂತ ಬಗ್ಗೆ ಸ್ವಯಂ ಪ್ರೇರಿತ ವಿಚಾರಣೆ ಕೈಗೆತ್ತಿಕೊಂಡು ಸರ್ಕಾರದಿಂದ ವರದಿ ಕೇಳಿತ್ತು. ಸರ್ಕಾರದ ಪರ ಅಡ್ವೊಕೇಟ್ ಜನರಲ್ ಪ್ರಾಥಮಿಕ ವರದಿ ಸಲ್ಲಿಸಿದ ಬಳಿಕ, 9 ಪ್ರಶ್ನೆಗಳನ್ನು ಮುಂದಿಟ್ಟು ವಸ್ತುಸ್ಥಿತಿಯ ಕುರಿತ ವರದಿಯನ್ನು ಸಲ್ಲಿಸುವಂತೆ ಸೂಚಿಸಿದೆ. ವಿಚಾರಣೆಯನ್ನು ಜೂನ್‌ 10ಕ್ಕೆ ಮುಂದೂಡಿದೆ.

ಈ ನಡುವೆ ಸಿಎಂ ಸಿದ್ದರಾಮಯ್ಯ ವಿರುದ್ದ ಮುಡಾ ಪ್ರಕರಣದಲ್ಲಿ ಕೋರ್ಟ್ ಮೊರೆ ಹೋಗಿರುವ ಸ್ನೇಹಮಯಿ ಕೃಷ್ಣ ಅವರು ಕಾಲ್ತುಳಿತ ದುರಂತಕ್ಕೆ ಸಿಎಂ, ಡಿಸಿಎಂ ಅವರನ್ನು ಹೊಣೆ ಮಾಡಿ ಕ್ರಮ ಕೈಗೊಳ್ಳುವಂತೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಪ್ರತ್ಯೇಕ ದೂರು ನೀಡಿದ್ದಾರೆ.

ಶುಕ್ರವಾರ ಮಧ್ಯಾಹದ ಬಳಿಕ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜ್ ಅವರನ್ನು ಹುದ್ದೆಯಿಂದ ವಜಾ ಮಾಡಲಾಗಿದೆ. ಗುಪ್ತಚರ ಇಲಾಖೆ ಎಡಿಜಿಪಿ ಹೇಮಂತ್ ನಿಂಬಾಳ್ಕರ್ ಅವರನ್ನು ವರ್ಗಾಯಿಸಲಾಗಿದೆ.

ಮುಖ್ಯಮಂತ್ರಿಯ ಆದೇಶದಂತೆ ಪೊಲೀಸರು ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಯ ಪದಾಧಿಕಾರಿಗಳ ವಿರುದ್ಧ ಎಫ್‌ಐರ್‌ ದಾಖಲಿಸಿದ್ದರು. ಅದನ್ನು ಪ್ರಶ್ನಿಸಿ ಸಂಸ್ಥೆಯ ಅಧ್ಯಕ್ಷ ರಘುರಾಮ್‌ ಭಟ್‌, ಕಾರ್ಯದರ್ಶಿ ಎ ಶಂಕರ್‌, ಖಜಾಂಚಿ ಇ.ಎಸ್‌ ಜಯರಾಂ ಅವರು ಹೈಕೋರ್ಟ್ ಮೊರೆ ಹೋಗಿದ್ದರು.

ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಇವರ ವಿರುದ್ದ ಬಲವಂತದ ಕ್ರಮ ಕೈಗೊಳ್ಳದಂತೆ ಶುಕ್ರವಾರ ಆದೇಶಿಸಿದೆ.

ಆರ್‌ಸಿಬಿಯ ಮಾರ್ಕೆಟಿಂಗ್ ಮುಖ್ಯಸ್ಥರಾದ ನಿಖಿಲ್ ಸೋಸಲೆ ಬಂಧನ ಪ್ರಶ್ನಿಸಿ ಅವರ ಪತ್ನಿ ಹೈಕೋರ್ಟ್ ಮೊರೆ ಹೋಗಿದ್ದಾರೆ.

ತನಿಖೆಯನ್ನೇ ನಡೆಸದೇ ಸಿಎಂ ಆದೇಶಾನುಸಾರ ಬಂಧಿಸಲಾಗಿದೆ. ಕಾನೂನು, ಸಂವಿಧಾನ ಕಡೆಗಣಿಸಿ ಬಂಧನ ಮಾಡಲಾಗಿದೆ. ಈ ಮೂಲಕ ನಿಖಿಲ್ ಸೋಸಲೆಯ ಮೂಲಭೂತ ಹಕ್ಕಿನ ಉಲ್ಲಂಘನೆಯಾಗಿದೆ. ಅಲ್ಲದೇ ಚಿನ್ನಸ್ವಾಮಿ ಸ್ಟೇಡಿಯಂನ ಸಂಭ್ರಮಾಚರಣೆಯಲ್ಲಿ ಡಿಸಿಎಂ ಭಾಗಿಯಾಗಿದ್ದರು ಎಂದು ಗಂಭೀರ ಆರೋಪ ಮಾಡಿದ್ದಾರೆ.

“ಆನ್‌ಲೈನ್ ಮೂಲಕ ಉಚಿತ ಪಾಸ್ ವ್ಯವಸ್ಥೆ ಮಾಡಲಾಗಿತ್ತು. ಪಾಸ್ ಇದ್ದವರಿಗಷ್ಟೇ ಚಿನ್ನಸ್ವಾಮಿ ಸ್ಟೇಡಿಯಂಗೆ ಪ್ರವೇಶವಿತ್ತು. ಆಟಗಾರರನ್ನು ವಿಮಾನ ನಿಲ್ದಾಣದಲ್ಲಿ ಖುದ್ದು ಡಿಸಿಎಂ ಸ್ವಾಗತಿಸಿದ್ದರು. ವಿಧಾನಸೌಧದಲ್ಲಿ ಸರ್ಕಾರ, ಸಿಎಂ, ಡಿಸಿಎಂ ಸನ್ಮಾನಿಸಿದ್ದರು. ನಂತರ ಚಿನ್ನಸ್ವಾಮಿ ಸ್ಟೇಡಿಯಂನ ಸಂಭ್ರಮಾಚರಣೆಯಲ್ಲಿ ಡಿಸಿಎಂ ಭಾಗಿಯಾಗಿದ್ದರು. ಅವಘಡದ ಮಾಹಿತಿ ತಿಳಿದ ತಕ್ಷಣ ಆರ್‌ಸಿಬಿಯಿಂದ ಕಾರ್ಯಕ್ರಮ ಸ್ಥಗಿತ ಮಾಡಲಾಗಿತ್ತು. ಹೀಗಾಗಿ, ಯಾವುದೇ ಲೋಪವೆಸಗಿಲ್ಲ. ನಿಖಿಲ್ ಸೋಸಲೆ ಬಂಧನಕ್ಕೆ ತಡೆ ನೀಡುವಂತೆ ಪತ್ನಿ ಮಾಳವಿಕಾ ನಾಯ್ಕ್ ಹೈಕೋರ್ಟ್‌ಗೆ ಸಲ್ಲಿಸಿದ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ” ಎಂದು ವರದಿಯಾಗಿದೆ.

ಪ್ರತಿಪಕ್ಷಗಳು ಮತ್ತು ಅದರ ನಾಯಕರು ಹೇಳಿದ್ದೇನು?

ಕಾಲ್ತುಳಿತ ದುರಂತವನ್ನು ಮುಂದಿಟ್ಟುಕೊಂಡು ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಸರ್ಕಾರ ವಿರುದ್ದ ಹರಿಹಾಯುತ್ತಿದ್ದಾರೆ.

“ಸ್ವತಃ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳೇ ಮುಂದೆ ನಿಂತು ವಿಜಯೋತ್ಸವ ಆಚರಣೆಗೆ ಮುಂದಾಗಿ ಬಹು ದೊಡ್ಡ ದುರಂತಕ್ಕೆ ಕಾರಣವಾಗಿರುವಾಗ ಐವರು ಪೊಲೀಸ್ ಅಧಿಕಾರಿಗಳನ್ನು ಬಲಿಪಶು ಮಾಡಿರುವುದು ನಾಚಿಕೆಗೇಡಿನ ಸಂಗತಿ” ಎಂದು ಮಾಜಿ ಸಿಎಂ ಹಾಗೂ ಬಿಜೆಪಿ ನಾಯಕ ಬಿ.ಎಸ್ ಯಡಿಯೂರಪ್ಪ ಟೀಕಿಸಿದ್ದಾರೆ.

“ಡಿಸಿಎಂ ಸರ್ಕಾರದ ಭಾಗವಲ್ಲವೇ? ಉಪಮುಖ್ಯಮಂತ್ರಿ ಡಿಕೆಶಿ ಅವರೇ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ವಿಜಯೋತ್ಸವ ನಡೆಯುವ ಬಗ್ಗೆ ಮಾಧ್ಯಮಗಳಿಗೆ ಅಧಿಕೃತ ಹೇಳಿಕೆ ನೀಡಿದ್ದರು. ಅಂದರೆ ಸರ್ಕಾರವೇ ಮುಂದೆ ನಿಂತು ಕಾರ್ಯಕ್ರಮ ಆಯೋಜಿಸಿದ ಹಾಗಾಯಿತು. ಇಷ್ಟರ ಮೇಲೂ ಮುಖ್ಯಮಂತ್ರಿಗಳು ಕಾಲ್ತುಳಿತಕ್ಕೂ ಸರ್ಕಾರಕ್ಕೂ ಸಂಬಂಧವಿಲ್ಲ ಎನ್ನುವ ಹೇಳಿಕೆ ನೀಡಿದ್ದರು. ಅಮಾಯಕರನ್ನು ಸಾವಿನ ದವಡೆಗೆ ತಳ್ಳಿದ ಡಿಸಿಎಂ ಡಿಕೆಶಿ ಅವರ ಮೇಲೆ ಎಫ್‌ಐಆರ್‌ ದಾಖಲಿಸಿ, ಬಂಧಿಸುವ ತಾಕತ್ತು ಸರ್ಕಾರಕ್ಕೆ ಇದೆಯೇ?” ಎಂದು ರಾಜ್ಯ ಬಿಜೆಪಿ ಪ್ರಶ್ನಿಸಿದೆ.

“ನಿನ್ನೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಪೊಲೀಸರು ಮೊದಲೇ ಅಪಾಯದ ಮುನ್ಸೂಚನೆ ನೀಡಿದ್ದರು, ಪೊಲೀಸರು ಹೊಣೆಯಲ್ಲ ಎಂದು ಹೇಳಿದ್ದರು. ಈಗ ಸಿಎಂ ಸಿದ್ದರಾಮಯ್ಯ ಅವರು ಏಕಾಏಕಿ ಬೆಂಗಳೂರು ಪೊಲೀಸ್ ಕಮಿಷನರ್ ಸೇರಿದಂತೆ ಹಲವು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನಡುವೆ ನಡೆಯುತ್ತಿರುವ ಶೀತಲ ಸಮರ, ಮುಸುಕಿನ ಗುದ್ದಾಟವೇ ಈ ದುರಂತಕ್ಕೂ ಕಾರಣವಾಯ್ತಾ?” ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌. ಅಶೋಕ್ ಪ್ರಶ್ನಿಸಿದ್ದಾರೆ.

ಸರಿಯಾದ ಪೂರ್ವಸಿದ್ಧತೆ ಮಾಡಿಕೊಳ್ಳದೆ, ಯಾವುದೇ ಮುನ್ನೆಚ್ಚರಿಕೆ ವಹಿಸದಿರುವುದೇ ಈ ಮಹಾದುರಂತಕ್ಕೆ ನೇರ ಕಾರಣ. ಇದಕ್ಕೆ ಸಿಎಂ ಮತ್ತು ಡಿಸಿಎಂ ಅವರನ್ನು ಹೊಣೆ ಮಾಡಬೇಕು ಎಂದು ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಹೆಚ್‌.ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಸಂಭ್ರಮಾಚರಣೆ ಕಾರ್ಯಕ್ರಮಕ್ಕೆ ಸಿಎಂ ಮತ್ತು ಡಿಸಿಎಂ ಬಹಿರಂಗ ಆಹ್ವಾನ ನೀಡಿದ್ದರು. ಹೆಚ್ಚು ಜನ ಸೇರಲು ಅವರೂ ಕಾರಣ. ಆದರೆ, ದುರಂತದ ಬಳಿಕ ಅಧಿಕಾರಿಗಳನ್ನು ಹೊಣೆ ಮಾಡಿ ಕೈತೊಳೆದುಕೊಳ್ಳಲು ನೋಡುತ್ತಿದ್ದಾರೆ. ಘಟನೆಯ ಹೊಣೆಯನ್ನು ಸಿಎಂ ಮತ್ತು ಡಿಸಿಎಂ ಕೂಡ ಹೊತ್ತುಕೊಳ್ಳಬೇಕು ಎಂದು ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ.

ಕಾಲ್ತುಳಿತ| ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜ್ ವಜಾ; ಗುಪ್ತಚರ ಎಡಿಜಿಪಿ ಹೇಮಂತ್ ನಿಂಬಾಳ್ಕರ್ ವರ್ಗಾವಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...