ಪಿಲಿಭಿತ್: ಬಿಎಸ್‌ಎಫ್ ಯೋಧರೊಬ್ಬರ ಪತ್ನಿಯ ಮೇಲೆ ಆಕೆಯ ಇಬ್ಬರು ಮೈದುನರು ಸರಣಿ ಅತ್ಯಾಚಾರವೆಸಗಿ, ಅತ್ಯಾಚಾರದ ದೃಶ್ಯಾವಳಿಗಳನ್ನು ಇಟ್ಟುಕೊಂಡು ಬ್ಲಾಕ್‌ಮೇಲ್ ಮಾಡುತ್ತಿದ್ದ ಆಘಾತಕಾರಿ ಸಂಗತಿ ಬೆಳಕಿಗೆ ಬಂದಿದೆ. ಈ ಹೇಯ ಕೃತ್ಯಕ್ಕೆ ಸಂಬಂಧಿಸಿದಂತೆ, ಸಂತ್ರಸ್ತೆಯ ಅತ್ತೆ-ಮಾವ ಸೇರಿದಂತೆ ಏಳು ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು, ಓರ್ವ ಮೈದುನನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಸಂತ್ರಸ್ತೆ ತಾನು ಮದುವೆಯಾದ ನಂತರ ಗ್ರಾಮದ ಹೊರಗೆ ತನ್ನ ಅತ್ತೆಯೊಂದಿಗೆ ಪ್ರತ್ಯೇಕವಾಗಿ ವಾಸಿಸುತ್ತಿದ್ದೆ ಎಂದು ಹೇಳಿದ್ದಾರೆ. ಪತಿ ಬಿಎಸ್‌ಎಫ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದ ಕಾರಣ ಹೆಚ್ಚಿನ ಸಮಯ ಕರ್ತವ್ಯದಲ್ಲಿ ಇರುತ್ತಿದ್ದರು ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಅತ್ತೆ ಮನೆಯಿಂದ ಹೊರಗೆ ಹೋದಾಗಲೆಲ್ಲಾ, ಮೈದುನರು ಮನೆಗೆ ನುಗ್ಗಿ ತನ್ನ ಮೇಲೆ ಸರಣಿ ಅತ್ಯಾಚಾರ ಎಸಗುತ್ತಿದ್ದರು. ಈ ಕೃತ್ಯಗಳ ವಿಡಿಯೋಗಳನ್ನು ರೆಕಾರ್ಡ್ ಮಾಡಿಕೊಂಡು, ಅವುಗಳ ಮೂಲಕ ಬ್ಲಾಕ್‌ಮೇಲ್ ಮಾಡುತ್ತಿದ್ದರು ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ಪತಿ ರಜೆ ಮೇಲೆ ಮನೆಗೆ ಬಂದಾಗ, ಮೈದುನರು ಆ ವಿಡಿಯೋಗಳನ್ನು ಆತನಿಗೆ ತೋರಿಸಿದ್ದಾರೆ. ಇದರಿಂದ ಆಕ್ರೋಶಗೊಂಡ ಅತ್ತೆ-ಮಾವಂದಿರು, ಸಂತ್ರಸ್ತೆ ಮತ್ತು ಆಕೆಯ ಪತಿಯ ಮೇಲೆ ಹಲ್ಲೆ ನಡೆಸಿದ್ದಾರೆ. ಅಲ್ಲದೆ, ಮಹಿಳೆಯನ್ನು ಕತ್ತು ಹಿಸುಕಿ ಕೊಲ್ಲಲು ಯತ್ನಿಸಿದ್ದಾರೆ ಎಂದೂ ದೂರಿದ್ದಾರೆ. ಆರೋಪಿಗಳು (ಮೈದುನರು) ಈ ವಿಡಿಯೋಗಳನ್ನು ಆನ್‌ಲೈನ್‌ನಲ್ಲಿ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದನ್ನೂ ಪೊಲೀಸರು ದೃಢಪಡಿಸಿದ್ದಾರೆ.
ಸಂತ್ರಸ್ತೆಯ ದೂರಿನ ಅನ್ವಯ, ಆಕೆಯ ಅತ್ತೆ, ಮಾವ ಸೇರಿದಂತೆ ಏಳು ಮಂದಿಯ ವಿರುದ್ಧ ಅತ್ಯಾಚಾರ ಹಾಗೂ ಹಲ್ಲೆಯಂತಹ ಗಂಭೀರ ಆರೋಪಗಳಡಿ ಭಾರತೀಯ ನ್ಯಾಯ ಸಂಹಿತೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಜಹಾನಾಬಾದ್ ಪೊಲೀಸ್ ಠಾಣೆಯ ಪ್ರಭಾರಿ ಮನೋಜ್ ಕುಮಾರ್ ಮಿಶ್ರಾ ಮಾಹಿತಿ ನೀಡಿದ್ದಾರೆ.
ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ಮೈದುನ ಹರಿಓಂನನ್ನು ಬಂಧಿಸಲಾಗಿದೆ. ಉಳಿದ ಆರೋಪಿಗಳ ಪತ್ತೆಗಾಗಿ ತೀವ್ರ ಶೋಧ ನಡೆಸಲಾಗುತ್ತಿದೆ. ಸಂತ್ರಸ್ತೆಗೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಸಮಗ್ರ ಪ್ರಯತ್ನಗಳನ್ನು ಮಾಡಲಾಗುವುದು ಎಂದು ಮಿಶ್ರಾ ಸ್ಪಷ್ಟಪಡಿಸಿದ್ದಾರೆ.


