ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿತರಾದರೆ ಪ್ರಧಾನಿ, ಕೇಂದ್ರ ಸಚಿವರು, ಮುಖ್ಯಮಂತ್ರಿ, ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶಗಳ ಸಚಿವರನ್ನು ಪದಚ್ಯುತಗೊಳಿಸಲು ಅನುವು ಮಾಡಿಕೊಡುವ ಮೂರು ಮಸೂದೆಗಳು ಬುಧವಾರ (ಆ.20) ಸಂಸತ್ತಿನಲ್ಲಿ ಮಂಡನೆ ಆಯಿತು.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರ (ತಿದ್ದುಪಡಿ) ಮಸೂದೆ 2025; ಸಂವಿಧಾನ (ನೂರ ಮೂವತ್ತನೇ ತಿದ್ದುಪಡಿ) ಮಸೂದೆ 2025; ಮತ್ತು ಜಮ್ಮು ಮತ್ತು ಕಾಶ್ಮೀರ ಪುನರ್‌ವಿಂಗಡನೆ (ತಿದ್ದುಪಡಿ) ಮಸೂದೆ 2025 ಅನ್ನು ಮಂಡಿಸಿದರು.
ಪ್ರತಿಪಕ್ಷಗಳ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿ ಮಸೂದೆಗಳ ಪ್ರತಿಗಳನ್ನು ಹರಿದು ಬಿಸಾಕಿದರು.
VIDEO | Parliament Monsoon Session: Opposition MPs tear copies of three bills introduced by Union Home Minister Amit Shah and throw paper bits towards him in Lok Sabha. Speaker Om Birla adjourns the House amid uproar. #ParliamentMonsoonSession #MonsoonSession
(Source: Third… pic.twitter.com/aAY12oBIFV
— Press Trust of India (@PTI_News) August 20, 2025
ಎಐಎಂಐಎಂ ಪಕ್ಷದ ಸಂಸದ ಅಸಾದುದ್ದೀನ್ ಓವೈಸಿ ಮೊದಲು ಮಸೂದೆಗಳಿಗೆ ವಿರೋಧ ವ್ಯಕ್ತಪಡಿಸಿದರು. ಇದು ಸರ್ಕಾರಗಳನ್ನು ಅಸ್ಥಿರಗೊಳಿಸುವ ಅಸ್ತ್ರವೇ ಹೊರತು, ಇನ್ನೇನು ಅಲ್ಲ ಎಂದರು.
ಓವೈಸಿ ಮಾತಿಗೆ ಧ್ವನಿಗೂಡಿಸಿದ ಪ್ರತಿಪಕ್ಷ ಸಂಸದರು, ಘೋಷಣೆಗಳನ್ನು ಕೂಗಿದರು. ಇದರಿಂದ ಸದನದಲ್ಲಿ ಭಾರೀ ಗದ್ದಲ ಉಂಟಾಯಿತು. ಗದ್ದಲ ಹೆಚ್ಚಾಗುತ್ತಿದ್ದಂತೆ ಸ್ಪೀಕರ್ ಓಂ ಬಿರ್ಲಾ ಅವರು ಕಲಾಪವನ್ನು ಮಧ್ಯಾಹ್ನ 3 ಗಂಟೆಗೆ ಮುಂದೂಡಿದರು. ಮೂರು ಗಂಟೆಗೆ ಮತ್ತೆ ಸಭೆ ಸೇರಿದಾಗ ಪ್ರತಿಪಕ್ಷ ಸದಸ್ಯರ ಪ್ರತಿಭಟನೆ ಮುಂದುವರಿಯಿತು. ಹಾಗಾಗಿ, ಸ್ಪೀಕರ್ ಕಲಾಪವನ್ನು ಸಂಜೆ 5 ಗಂಟೆಗೆ ಮುಂದೂಡಿಕೆ ಮಾಡಿದರು.
ಮಸೂದೆಗಳ ಮಂಡನೆಯ ಬಳಿಕ ಅಮಿತ್ ಶಾ ಅವರು ಅವುಗಳನ್ನು ಜಂಟಿ ಸಂಸದೀಯ ಸಮಿತಿಗೆ ಕಳುಹಿಸುವ ನಿರ್ಣಯವನ್ನು ಮಂಡಿಸಿದರು. ಅದಕ್ಕೆ ಲೋಕಸಭೆಯಲ್ಲಿ ಅಂಗೀಕಾರ ದೊರೆಯಿತು.
ಮೂರು ಮಸೂದೆಗಳನ್ನು ಬಿಜೆಪಿ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರ ವಿರೋಧ ಪಕ್ಷಗಳ ಆಡಳಿತದ ರಾಜ್ಯಗಳಲ್ಲಿ ಸರ್ಕಾವನ್ನು ಉರುಳಿಸಲು ದುರುಪಯೋಗಪಡಿಸಿಕೊಳ್ಳಬಹುದು. ಹೊಸ ಮಸೂದೆಗಳು ಕೇಂದ್ರ ಸರ್ಕಾರ ಇಡಿ, ಸಿಬಿಐ ಬಳಸಿಕೊಂಡು ವಿರೋಧ ಪಕ್ಷಗಳ ಚುನಾಯಿತ ಮುಖ್ಯಮಂತ್ರಿ, ಸಚಿವರನ್ನು ಸುಳ್ಳು ಆರೋಪಗಳ ಮೇಲೆ ಬಂಧಿಸಲು ಮತ್ತು ನ್ಯಾಯಾಲಯದಲ್ಲಿ ತಪ್ಪಿತಸ್ಥರೆಂದು ಸಾಬೀತಾಗದೆ ಅವರನ್ನು ಹುದ್ದೆಯಿಂದ ವಜಾಗೊಳಿಸಲು ಅನುವು ಮಾಡಿಕೊಡುತ್ತದೆ ಎಂದು ವಿರೋಧ ಪಕ್ಷಗಳು ಕಳವಳ ವ್ಯಕ್ತಪಡಿಸಿವೆ.
ಇಂತಹ ಮಸೂದೆಗಳನ್ನು ತರುವ ಮೂಲಕ ಬಿಜೆಪಿ ಸರ್ಕಾರ ಜನರ ಕಣ್ಣಿಗೆ ಮಣ್ಣೆರಚುಲು ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
“ಇದೊಂದು ಕಠಿಣ ನಿಲುವಾಗಿದೆ. ಭ್ರಷ್ಟಾಚಾರ ವಿರೋಧಿ ಕ್ರಮ ಎಂದು ಕೇಂದ್ರ ಸರ್ಕಾರ ಹೇಳಿಕೊಂಡರೂ, ಇದು ಜನರ ಕಣ್ಣಿಗೆ ಮಣ್ಣೆರಚುವ ಪ್ರಯತ್ನವಾಗಿದೆ. ಅಪರಾಧಿ ಎಂದು ಸಾಬೀತಾಗುವ ಮೊದಲೇ ಚುನಾಯಿತ ಪ್ರತಿನಿಧಿಗಳನ್ನು ಪದಚ್ಯುತಗೊಳಿಸಲು ಇದು ಅವಕಾಶ ನೀಡುತ್ತದೆ” ಎಂದು ಸಂಸತ್ ಸಂಕೀರ್ಣದಲ್ಲಿ ಮಾತನಾಡುವಾಗ ಪ್ರಿಯಾಂಕಾ ಗಾಂಧಿ ಹೇಳಿದ್ದಾಗಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.


