ಭೂ ಸ್ವಾಧೀನ ರದ್ದುಗೊಳಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ ಬಳಿಕವೂ, ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ದಿ ಮಂಡಳಿ (ಕೆಐಎಡಿಬಿ) ಅಧಿಕಾರಿಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆ ಚನ್ನರಾಯಪಟ್ಟಣ ಹೋಬಳಿಯ ರೈತರಿಗೆ ನೋಟಿಸ್ ಕೊಟ್ಟಿರುವುದು ಗೊಂದಲಕ್ಕೆ ಕಾರಣವಾಗಿದೆ.
ರೈತರು ಮತ್ತು ಹೋರಾಟಗಾರರು ಸೋಮವಾರ (ಸೆ.1) ಬೆಂಗಳೂರಿನ ಖನಿಜ ಭವನದಲ್ಲಿರುವ ಕೆಐಎಡಿಬಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕಚೇರಿ ಮತ್ತು ಅರವಿಂದ ಭವನದಲ್ಲಿರುವ ವಿಶೇಷ ಭೂ ಸ್ವಾಧೀನ ಅಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೂರೂವರೆ ವರ್ಷಗಳ ನಿರಂತರ ಹೋರಾಟದ ಫಲವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿ ವ್ಯಾಪ್ತಿಯ 13 ಹಳ್ಳಿಗಳ ರೈತರ 1,777 ಎಕರೆ ಭೂಸ್ವಾಧೀನವನ್ನು 2025 ಜುಲೈ 15ರಂದು ಸರ್ಕಾರ ಕೈಬಿಟ್ಟಿತ್ತು. ಈ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯ ಮಾಧ್ಯಮಗಳ ಮುಂದೆ ಅಧಿಕೃತ ಘೋಷಣೆ ಮಾಡಿದ್ದರು.
ಆದರೆ, ಇದೀಗ ಹ್ಯಾಡಾಳ, ಗೋಕರೆಬಚ್ಚೇನಹಳ್ಳಿ ಗ್ರಾಮಗಳ 439 ಎಕರೆ ಭೂ ಸ್ವಾಧೀನಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 6ರಂದು ದರ ನಿಗದಿ ಸಭೆ ಕರೆಯಲಾಗಿದೆ. ಈ ಕುರಿತು ರೈತರಿಗೆ ನೋಟಿಸ್ ನೀಡಲಾಗಿದೆ.

ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ಕೆಐಎಡಿಬಿ ಅಧಿಕಾರಿಗಳ ಈ ನಡೆಯನ್ನು ತೀವ್ರವಾಗಿ ಖಂಡಿಸಿದ್ದು, ಸಿಎಂ ಘೋಷಿಸಿದಂತೆ 13 ಹಳ್ಳಿಗಳ ಎಲ್ಲಾ ಭೂಮಿಗಳ ಡಿನೋಟಿಫಿಕೇಶನ್ ಮುಗಿಯುವವರೆಗೆ ಯಾವುದೇ ರೀತಿಯ ಭೂಸ್ವಾಧೀನ ಪ್ರಕ್ರಿಯೆಯನ್ನು ಮುಂದುವರಿಸದಂತೆ ಆಗ್ರಹಿಸಿದೆ.
ತಮ್ಮ ಒತ್ತಾಯಗಳನ್ನು ಕೂಡಲೇ ಈಡೇರಿಸದಿದ್ದರೆ ಮುಂದಿನ ಎಲ್ಲಾ ಪರಿಣಾಮಗಳಿಗೆ ಕೆಐಎಡಿಬಿ ಕಚೇರಿಯೇ ಹೊಣೆಯಾಗಿರುತ್ತದೆ ಎಂದು ಎಚ್ಚರಿಕೆ ಕೊಟ್ಟಿದೆ.

ನಕಲಿ ದಾಖಲೆ ವಿರುದ್ದ ದೂರು
ಕೆಐಎಡಿಬಿ ಭೂಸ್ವಾಧೀನಕ್ಕೆ ಒಪ್ಪಿಗೆ ಇದೆ ಎಂದು ರೈತರ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಲಾಗಿದೆ. ಅದನ್ನು ನಂಬಿ ಅಧಿಕಾರಿಗಳು ನೋಟಿಸ್ ಕೊಟ್ಟಿದ್ದಾರೆ ಎಂಬ ಆರೋಪವೂ ಕೇಳಿ ಬಂದಿದೆ.
ಹ್ಯಾಡಾಳ ಗ್ರಾಮದ ರೈತ ಲಗುಮಯ್ಯ ಎಂಬವರು ಈ ಸಂಬಂಧ ವಿಶೇಷ ಭೂ ಸ್ವಾಧೀನ ಅಧಿಕಾರಿಗೆ ದೂರು ಕೊಟ್ಟಿದ್ದಾರೆ. “ಭೂ ಸ್ವಾಧೀನಕ್ಕೆ ನನ್ನ ಒಪ್ಪಿಗೆ ಇದೆ ಎಂದು ನಕಲಿ ದಾಖಲೆ ಸೃಷ್ಟಿಸಿ ಅಥವಾ ನಕಲಿ ಸಹಿ ಹಾಕಿ ಅಧಿಕಾರಿಗಳ ದಾರಿ ತಪ್ಪಿಸಿರುವವರು ಮತ್ತು ಅದಕ್ಕೆ ಕುಮ್ಮಕ್ಕು ನೀಡಿರುವವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

ಬಾನು ಮುಷ್ತಾಕ್‌ರನ್ನು ವಿರೋಧಿಸುತ್ತಿರುವವರು ಧರ್ಮಾಂಧರು: ಸಿಎಂ ಸಿದ್ದರಾಮಯ್ಯ


